ಬೆಂಗಳೂರು : ರಾಜ್ಯದಲ್ಲಿ ಕೋವಿಡ್-19 ರೂಪಾಂತರಿ ವೈರಸ್ ಒಮಿಕ್ರಾನ್ ಹರಡುವಿಕೆಯನ್ನು ನಿಯಂತ್ರಿಸಲು ಮತ್ತು ಸಾರ್ವಜನಿಕ ಆರೋಗ್ಯದ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಜನವರಿ 5 ರಿಂದ 19ರವರೆಗೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿತ್ತು.
ಶುಕ್ರವಾರ ರಾತ್ರಿ 8 ಗಂಟೆಯಿಂದ ಶುರುವಾಗಿ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ರಾಜ್ಯಾದ್ಯಂತ ವಾರಾಂತ್ಯದ ಕರ್ಫ್ಯೂ ಇರುತ್ತಿತ್ತು. ಹೀಗಾಗಿ, ಈ ಅವಧಿಯಲ್ಲಿ ಶನಿವಾರದಂದು ರಾಜ್ಯಾದ್ಯಂತ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳನ್ನು ನಡೆಸದಿರಲು ತಿಳಿಸಲಾಗಿತ್ತು.
ಇದೀಗ ನೈಟ್ ಕರ್ಫ್ಯೂ ತೆರವು ಮಾಡಿರುವ ಹಿನ್ನೆಲೆಯಲ್ಲಿ ಶನಿವಾರವೂ ಶಾಲೆಗಳಲ್ಲಿ ಭೌತಿಕ ತರಗತಿ ನಡೆಸಲು ಸೂಚಿಸಲಾಗಿದೆ. ಕೋವಿಡ್ -19ನ ಎಲ್ಲಾ ಮುಂಜಾಗ್ರತಾ, ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು.
ಬೆಂಗಳೂರು ನಗರ ಜಿಲ್ಲೆಯ ಬೆಂಗಳೂರು ಉತ್ತರ ಮತ್ತು ದಕ್ಷಿಣ ಶೈಕ್ಷಣಿಕ ಜಿಲ್ಲೆಗಳ ವ್ಯಾಪ್ತಿಯಲ್ಲಿನ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳನ್ನು ಹಾಗೂ ರಾಜ್ಯದ ಉಳಿದ ಎಲ್ಲಾ ಜಿಲ್ಲೆಗಳಲ್ಲಿನ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿನ ಎಲ್ಲಾ ತರಗತಿಗಳ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳನ್ನು ಎಂದಿನಂತೆ ನಡೆಸಿಕೊಂಡು ಹೋಗಲು ಕ್ರಮವಹಿಸುವಂತೆ ಆಯಾ ಜಿಲ್ಲೆಗಳ ಉಪನಿರ್ದೇಶಕ(ಆಡಳಿತ)ರಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ತಿಳಿಸಿದೆ.
ಜಾಹೀರಾತು : ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ