ಬೆಂಗಳೂರು: ಶಾಲಾ ಶುಲ್ಕವನ್ನು ಶೇ. 30ರಷ್ಟು ಕಡಿತ ಮಾಡಿರುವ ಸರ್ಕಾರ ಹಾಗೂ ಖಾಸಗಿ ಶಾಲೆಗಳ ನಡುವೆ ಉಂಟಾಗಿರುವ ಶುಲ್ಕ ನಿಗದಿ ವಿವಾದವನ್ನ ಕೊನೆಗೊಳಿಸಲು ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಸಮಿತಿ ರಚಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಸಂಬಂಧ ಹೈಕೋರ್ಟ್ಗೆ ಮಧ್ಯಂತರ ಅರ್ಜಿ ಸಲ್ಲಿಸಿದೆ. ಶಾಲಾ ಶುಲ್ಕ ಕಡಿತಗೊಳಿಸಿರುವ ಸರ್ಕಾರದ ಆದೇಶ ಪ್ರಶ್ನಿಸಿ ಕರ್ನಾಟಕ ಖಾಸಗಿ ಶಾಲೆಗಳ ಸಮಿತಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸಲ್ಲಿಸಿರುವ ಮಧ್ಯಂತರ ಅರ್ಜಿಯನ್ನು ನ್ಯಾ. ಸಚಿನ್ ಶಂಕರ್ ಮಗದಂ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.
ಈ ವೇಳೆ ರಾಜ್ಯ ಸರ್ಕಾರದ ಪರ ಹಾಜರಿದ್ದ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ ಪೀಠಕ್ಕೆ ಮಾಹಿತಿ ನೀಡಿ, ಕೋವಿಡ್ ಹಿನ್ನೆಲೆಯಲ್ಲಿ ಪೋಷಕರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ಖಾಸಗಿ ಶಾಲೆಗಳಿಗೆ ಶೇ.70 ರಷ್ಟು ಶುಲ್ಕ ಪಡೆಯುವಂತೆ ಹಾಗೂ ಶೇ.30 ರಷ್ಟು ಶುಲ್ಕ ರಿಯಾಯಿತಿ ನೀಡುವಂತೆ ಸರ್ಕಾರ ಆದೇಶಿಸಿದೆ. ಇದನ್ನು ಪ್ರಶ್ನಿಸಿ ಖಾಸಗಿ ಶಾಲೆಗಳ ಒಕ್ಕೂಟ ಅರ್ಜಿ ಸಲ್ಲಿಸಿದೆ.
ಪ್ರಸ್ತುತ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಪೋಷಕರಿಗೆ ಪೂರ್ಣ ಶುಲ್ಕ ಪಾವತಿಸಲು ಸಮಸ್ಯೆಯಾಗುತ್ತಿದೆ. ಹೀಗಾಗಿ, ಶುಲ್ಕ ನಿಗದಿ ವಿವಾದವನ್ನು ಬಗೆಹರಿಸಲು ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಸಮಿತಿ ರಚಿಸಲು ಯೋಚಿಸಲಾಗಿದೆ. ಸಮಿತಿ ಸೂಚನೆಯಂತೆ ಶುಲ್ಕ ನಿಗದಿ ಪರಿಶೀಲನೆ ಮಾಡಲಾಗುವುದು ಎಂದು ಪೀಠಕ್ಕೆ ವಿವರಿಸಿದರು.
ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ ಖಾಸಗಿ ಶಾಲೆಗಳ ಪರ ವಕೀಲರು, ಸರ್ಕಾರದಿಂದ ಯಾವುದೇ ಆರ್ಥಿಕ ನೆರವು ಪಡೆಯದ ಖಾಸಗಿ ಶಾಲೆಗಳ ಶುಲ್ಕ ನಿಗದಿಪಡಿಸಲು ರಾಜ್ಯ ಸರ್ಕಾರಕ್ಕೆ ಯಾವುದೇ ಅಧಿಕಾರವಿಲ್ಲ, ಸರ್ಕಾರದ ಈ ಪ್ರಸ್ತಾವಕ್ಕೆ ತಮ್ಮ ವಿರೋಧವಿದೆ ಎಂದರು. ಅಲ್ಲದೇ, ಮಧ್ಯಂತರ ಅರ್ಜಿಯಲ್ಲಿರುವ ವಿಚಾರಗಳೇನು ಎಂಬ ಬಗ್ಗೆ ತಮಗೆ ತಿಳಿದಿಲ್ಲ, ಹಾಗಾಗಿ ಅರ್ಜಿಯ ಪ್ರತಿಯನ್ನು ನೀಡುವಂತೆ ಕೋರಿದರು. ಈ ಹಿನ್ನೆಲೆಯಲ್ಲಿ ಮಧ್ಯಂತರ ಅರ್ಜಿಯ ಪ್ರತಿಯನ್ನು ಪ್ರತಿವಾದಿಗಳಿಗೆ ನೀಡುವಂತೆ ಸೂಚಿಸಿದ ಪೀಠ, ವಿಚಾರಣೆಯನ್ನು ಜೂನ್ 21ಕ್ಕೆ ಮುಂದೂಡಿತು.