ಬೆಂಗಳೂರು: ಖಾಸಗಿ ಆಸ್ಪತ್ರೆಗಳು ಕೋವಿಡ್-19 ರೋಗಿಗಳ ಚಿಕಿತ್ಸೆಗೆ ನಿರಾಕರಿಸಿದರೆ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದಾಗಿ ಸರ್ಕಾರ ಆದೇಶ ಹೊರಡಿಸಿದೆ.
ಈ ಸಂಬಂಧ ಆದೇಶ ಹೊರಡಿಸಿರುವ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್, ಕೆಲ ಖಾಸಗಿ ಆಸ್ಪತ್ರೆಗಳು ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ನಿರಾಕರಿಸುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಇದು ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಕಾಯ್ದೆಗೆ ವಿರುದ್ಧವಾಗಿದೆ. ಈ ಕಾಯ್ದೆಯಡಿ ಸರ್ಕಾರ ಸೂಚಿಸುವಂತೆ ಖಾಸಗಿ ಆಸ್ಪತ್ರೆಗಳು ಎಲ್ಲಾ ರಾಜ್ಯ ಹಾಗೂ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಹೀಗಾಗಿ ಖಾಸಗಿ ಆಸ್ಪತ್ರೆಗಳು ಕೊರೊನಾ ಸೋಂಕಿತರನ್ನು ದಾಖಲಿಸಲು ಅಥವಾ ಚಿಕಿತ್ಸೆ ನೀಡಲು ನಿರಾಕರಿಸಬಾರದು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ವಿಪತ್ತು ನಿರ್ವಹಣಾ ಕಾಯ್ದೆ 2005 ನೀಡಿರುವ ಅಧಿಕಾರದಂತೆ ಖಾಸಗಿ ಆಸ್ಪತ್ರೆಗಳು ಕೋವಿಡ್-19 ಸೋಂಕಿತನನ್ನು ದಾಖಲಿಸಿಕೊಳ್ಳಲು ಅಥವಾ ಚಿಕಿತ್ಸೆ ನೀಡಲು ನಿರಾಕರಿಸಬಾರದು. ಅವರು ಕಡ್ಡಾಯವಾಗಿ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆ ಕಾಯ್ದೆಯ ನಿಯಮವನ್ನು ಪಾಲಿಸಬೇಕು ಎಂದು ಆದೇಶ ನೀಡಲಾಗಿದೆ. ಒಂದು ವೇಳೆ ಈ ಆದೇಶವನ್ನು ಪಾಲಿಸದೇ ಹೋದರೆ ವಿಪತ್ತು ನಿರ್ವಹಣಾ ಕಾಯ್ದೆ, ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆ ಕಾಯ್ದೆ ಮತ್ತು ಐಪಿಸಿಯಡಿ ಶಿಕ್ಷೆಗೆ ಒಳಗಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.