ಬೆಂಗಳೂರು : ವಿಧಾನಮಂಡಲದ ಅಧಿವೇಶನದಲ್ಲಿ ಅಂಗೀಕಾರಗೊಂಡಿದ್ದ ಕರ್ನಾಟಕ ಭೂ ಕಂದಾಯ (ತಿದ್ದುಪಡಿ) ವಿಧೇಯಕಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಕಳೆದ ವಾರ ನಡೆದ ವಿಧಾನಮಂಡಲದ ಅಧಿವೇಶನದಲ್ಲಿ ಈ ವಿಧೇಯಕಗಳನ್ನು ಅಂಗೀಕರಿಸಲಾಗಿತ್ತು. ಈ ಸಂಬಂಧ ಸರ್ಕಾರವು ರಾಜ್ಯಪತ್ರವನ್ನು ಹೊರಡಿಸಿದೆ.
ಕರ್ನಾಟಕ ಹಣಕಾಸಿನ ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ (ತಿದ್ದುಪಡಿ) ವಿಧೇಯಕದನ್ವಯ ಹಣಕಾಸು ಸಂಸ್ಥೆಗಳಲ್ಲಿ ಠೇವಣಿ ಇಡುವ ಠೇವಣಿದಾರರಿಗೆ ವಂಚಿಸುವ ಅಪರಾಧವನ್ನು ಜಾಮೀನು ರಹಿತ ಅಪರಾಧ ಎಂದು ಪರಿಗಣಿಸಲು, ಮತ್ತು ಇಂತಹ ಪ್ರಕರಣಗಳ ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪಿಸಲು ಅವಕಾಶ ನೀಡಲಾಗಿದೆ. ಈ ವಿಧೇಯಕ ಜಾರಿಯಿಂದ ಹಣಕಾಸು ಸಂಸ್ಥೆಯಲ್ಲಿ ಠೇವಣಿ ಇಟ್ಟು ನಷ್ಟ ಅನುಭವಿಸುವ ಠೇವಣಿದಾರರಿಗೆ ರಕ್ಷಣೆ ಒದಗಿಸಲು ಸಾಧ್ಯವಾಗಲಿದೆ. ಅಲ್ಲದೇ, ಠೇವಣಿದಾರರಿಗೆ ವಂಚನೆ ಎಸಗುವ ಆರೋಪಿತ ಸಂಸ್ಥೆ ಅಥವಾ ವ್ಯಕ್ತಿಯ ವಿರುದ್ಧ ರಾಜ್ಯದ ವಿವಿಧೆಡೆ ಇರುವ ಪ್ರಕರಣಗಳನ್ನು ಒಂದೇ ಪ್ರಕರಣ ಎಂದು ದಾಖಲಿಸಿ ವಿಚಾರಣೆ ನಡೆಸಲಾಗುವುದು.
ಇನ್ನು, ಕರ್ನಾಟಕ ಭೂ ಕಂದಾಯ (ತಿದ್ದುಪಡಿ) ವಿಧೇಯಕದನ್ವಯ ಅನಧಿಕೃತವಾಗಿ ಸಾಗುವಳಿ ಮಾಡುತ್ತಿರುವ ಸರ್ಕಾರಿ ಭೂಮಿಗಳನ್ನು ಸಕ್ರಮಗೊಳಿಸುವ ಅವಧಿಯನ್ನು ಒಂದು ವರ್ಷದ ಅವಧಿಗೆ ವಿಸ್ತರಣೆ ಮಾಡುವುದಾಗಿದೆ. 2018 ರ ಮಾರ್ಚ್ 17 ರಿಂದ 2019 ಮಾ.16 ರವರೆಗೆ ಅನಧಿಕೃತವಾಗಿ ಸಾಗುವಳಿ ಮಾಡುತ್ತಿರುವ ಸರ್ಕಾರಿ ಭೂಮಿಗಳನ್ನು ಸಕ್ರಮಗೊಳಿಸಲು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಆದರೆ, ಲೋಕಸಭೆ ಸಾರ್ವತ್ರಿಕ ಚುನಾವಣೆ ಬಂದ ಕಾರಣ ಅರ್ಜಿಗಳನ್ನು ಸ್ವೀಕರಿಸಿಲ್ಲ. ಶಾಸಕರು ಮತ್ತು ಸಾರ್ವಜನಿಕರಿಂದ ಒತ್ತಾಯ ಕೇಳಿಬಂದ ಹಿನ್ನೆಲೆ ಒಂದು ವರ್ಷದ ಅವಧಿಯವರೆಗೆ ವಿಸ್ತರಿಸಲಾಗಿದೆ.
ಓದಿ: ವಿಧಾನಸಭೆಯಲ್ಲಿ ನಾಲ್ಕು ವಿಧೇಯಕಗಳ ಮಂಡಿಸಿದ ಸಚಿವ ಗೋವಿಂದ ಕಾರಜೋಳ