ಬೆಂಗಳೂರು : ಮುಖ್ಯಮಂತ್ರಿ ಯಡಿಯೂರಪ್ಪ ನಾಯಕತ್ವ ಬದಲಾವಣೆ ನಂತರ ಅವರ ಉತ್ತರಾಧಿಕಾರಿಯಾಗಿ ಗಣಿಗಾರಿಕೆ ಸಚಿವ ಮುರುಗೇಶ ನಿರಾಣಿ ನೇಮಕ ಮಾಡುವ ಪ್ರಸ್ಥಾಪಕ್ಕೆ ಬಿಜೆಪಿ ವಲಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ ಎಂದು ಹೇಳಲಾಗುತ್ತಿದೆ.
ನಗರದ ಕೇಶವ ಕೃಪದಲ್ಲಿ ಆರ್‌ಎಸ್‌ಎಸ್‌ನ ಪ್ರಮುಖರು ಮತ್ತು ಮಠಾಧೀಶರು ಉಪಸ್ಥಿತರಿದ್ದ ಸಭೆಯಲ್ಲಿ ಹೊಸ ಮುಖ್ಯಮಂತ್ರಿ ನೇಮಕ ಬಗ್ಗೆ ನಡೆದ ಸಭೆಯಲ್ಲಿ ಭಾಗವಹಿಸಿದ್ದ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಚಿವ ನಿರಾಣಿ ಅವರಿಗೆ ಸಿಎಂ ಹುದ್ದೆ ನೀಡುವುದಕ್ಕೆ ಪ್ರಬಲ ವಿರೋಧ ವ್ಯಕ್ತಪಡಿಸಿದ್ದಾರೆಂದು ತಿಳಿದು ಬಂದಿದೆ.
ಸಭೆಯಲ್ಲಿ ನಿರಾಣಿ ನಾಯಕತ್ವದ ಬಗ್ಗೆ ಕೆಲವು ಮಠಾಧೀಶರು ಒಲವು ವ್ಯಕ್ತಪಡಿಸಿದಾಗ ತಕ್ಷಣ ಗೋವಿಂದ ಕಾರಜೋಳ ಅವರು ಅತೃಪ್ತಿ ವ್ಯಕ್ತಪಡಿಸಿದರಲ್ಲದೇ, ತಾವು ಹೊಂದಿರುವ ಉಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಸರ್ಕಾರದಿಂದ ಹೊರಗುಳಿಯುವ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ.
ಸಿಎಂ ಕುಟುಂಬದಿಂದಲೂ ವಿರೋಧ..!
ಮುರುಗೇಶ ನಿರಾಣಿ ಅವರಿಗೆ ಮುಖ್ಯಮಂತ್ರಿ ಜವಾಬ್ದಾರಿ ನೀಡುವುದಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಅವರ ಪುತ್ರ ವಿಜಯೇಂದ್ರ ಅವರಿಂದಲೂ ತೀವ್ರ ವಿರೋಧ ವ್ಯಕ್ತವಾಗಿದೆ ಎಂದು ತಿಳಿದುಬಂದಿದೆ. ನಿರಾಣಿ ನೇಮಕವನ್ನು ಸಹಿಸುವುದಿಲ್ಲ ಎನ್ನುವ ಸಂದೇಶವನ್ನು ಸಿಎಂ ಯಡಿಯೂರಪ್ಪ ಬಿಜೆಪಿ ಹೈಕಮಾಂಡ್‌ಗೆ ರವಾನಿಸಿದ್ದಾರೆಂದು ಗೊತ್ತಾಗಿದೆ.
ಪಂಚಮಸಾಲಿ ಮೀಸಲಾತಿ ಹೋರಾಟ, ಸಿಡಿ ಪ್ರಕರಣ ಸೇರಿದಂತೆ ಹಲವಾರು ಪ್ರಕರಣಗಳನ್ನು ಉದಾಹರಿಸಿ ಮುರುಗೇಶ ನಿರಾಣಿಗೆ ಮುಖ್ಯಮಂತ್ರಿ ಸ್ಥಾನ ನೀಡಿದರೆ ಪಕ್ಷಕ್ಕೆ ಹೆಚ್ವು ನಷ್ಟ ವಾಗಲಿದೆ. ಬಿಜೆಪಿಗೆ ಬೆಂಬಲ ನೀಡುತ್ತ ಬಂದಿರುವ ಲಿಂಗಾಯತ ಸಮುದಾಯ ಸಹ ದೂರ ಉಳಿಯುವ ಅಪಾಯ ಇದೆಯೆಂದು ಹೆಳಿದ್ದಾರೆನ್ನಲಾಗಿದೆ.
ಇದನ್ನೂ ಓದಿ : ಉ.ಕ ಭಾಗದ ಪಂಚಮಸಾಲಿ ಸಮುದಾಯಕ್ಕೆ ಸಿಎಂ ಸ್ಥಾನಕ್ಕೆ ಬಸವಜಯ ಮೃತ್ಯುಂಜಯ ಸ್ವಾಮೀಜಿ ಒತ್ತಾಯ