ಬೆಂಗಳೂರು : ಹಿಂದುಳಿದ ವರ್ಗಗಳ ಆಯೋಗದ ಕಾಯಿದೆಯ ಸೆಕ್ಷನ್ 9ರ ಪ್ರಕಾರ ರಾಜ್ಯ ಸರ್ಕಾರಗಳು ಆಯೋಗದೊಂದಿಗೆ ಚರ್ಚಿಸಿ ಪ್ರತಿ ಹತ್ತು ವರ್ಷಗಳಿಗೊಮ್ಮೆ ಹಿಂದುಳಿದ ವರ್ಗಗಳ ಪಟ್ಟಿಯನ್ನು ಪರಿಷ್ಕರಣೆ ಮಾಡುವುದಕ್ಕೆ ಅವಕಾಶ ಕಲ್ಪಿಸಲಾಗಿದೆ. ಹೀಗಾಗಿ ಮೀಸಲಾತಿಯನ್ನು ಪರಿಷ್ಕರಣೆ ಮಾಡುವ ಅಧಿಕಾರ ರಾಜ್ಯ ಸರ್ಕಾರಕ್ಕಿದ್ದು, ಪಂಚಮಸಾಲಿ ಲಿಂಗಾಯತರಿಗೆ ಮೀಸಲಾತಿ ನೀಡುವ ಕುರಿತು ಸಲ್ಲಿಕೆಯಾಗಿರುವ ಅರ್ಜಿಯನ್ನು ವಜಾಗೊಳಿಸಬೇಕು ಎಂದು ಸರ್ಕಾರ ಹೈಕೋರ್ಟ್‌ಗೆ ಮನವಿ ಮಾಡಿದೆ.
ಪಂಚಮಸಾಲಿ ಲಿಂಗಾಯತ ಸಮುದಾಯವನ್ನು ಪ್ರವರ್ಗ-2ಎಗೆ ಸೇರ್ಪಡೆ ಮಾಡುವುದಕ್ಕೆ ಸಂಬಂಧಿಸಿದಂತೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಲ್ಲಿಸಿರುವ ಮಧ್ಯಂತರ ವರದಿಯನ್ನು ಕಾನೂನು ಬಾಹಿರ ಎಂಬುದಾಗಿ ಘೋಷಿಸುವಂತೆ ಕೋರಿ ಬೆಂಗಳೂರಿನ ಡಿ.ಜಿ.ರಾಘವೇಂದ್ರ ಎಂಬುವವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ಅರ್ಜಿ ವಿಚಾರಣೆ ನಡೆಸುತ್ತಿರುವ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್. ಕಿಣಗಿ ಅವರಿದ್ದ ವಿಭಾಗೀಯ ಪೀಠಕ್ಕೆ ರಾಜ್ಯ ಸರ್ಕಾರ ಆಕ್ಷೇಪಣೆ ಸಲ್ಲಿಸಿದೆ. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ಸರ್ಕಾರ ಸಲ್ಲಿಸಿರುವ ಆಕ್ಷೇಪಣೆಗೆ ಪ್ರತಿ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಬೇಕು ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು. ಮನವಿಯನ್ನು ಪರಿಗಣಿಸಿದ ನ್ಯಾಯಪೀಠ ವಿಚಾರಣೆಯನ್ನು ಒಂದು ವಾರ ಕಾಲ ಮುಂದೂಡಿದೆ.
ಸರ್ಕಾರದ ಆಕ್ಷೇಪಣೆ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಕಾಯ್ದೆ - 1995ರ ಸೆಕ್ಷನ್ 9 ಪ್ರಕಾರ, ಯಾವುದಾದರೂ ಒಂದು ಸಮುದಾಯವು ತನ್ನನ್ನು ಹಿಂದುಳಿದ ವರ್ಗಕ್ಕೆ ಸೇರಿಸುವಂತೆ ಮನವಿ ಸಲ್ಲಿಸಿದರೆ, ಅದನ್ನು ಪರಿಶೀಲಿಸುವುದಕ್ಕೆ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗಕ್ಕೆ ಸಂವಿಧಾನದ ಪ್ರಕಾರ ಅವಕಾಶ ಕಲ್ಪಿಸಲಾಗಿದೆ.
ನಿಯಮಗಳ ಪ್ರಕಾರ, ಆಯೋಗವು ಮನವಿ ಮಾಡಿರುವ ಸಮುದಾಯಗಳು ಸಾಮಾಜಿಕ, ಶೈಕ್ಷಣಿಕವಾಗಿ ಹಿಂದುಳಿದಿದೆಯೇ ವಿಚಾರಣೆ/ಸಮೀಕ್ಷೆ/ತನಿಖೆ ನಡೆಸಿ ನಾಗರಿಕರ ಹಿಂದುಳಿದ ವರ್ಗಗಳ ವರ್ಗೀಕರಣದ ಬಗ್ಗೆ ಸರ್ಕಾರಕ್ಕೆ ಶಿಫಾರಸು ಮಾಡುವುದಕ್ಕೆ ಅವಕಾಶವಿದೆ ಎಂದು ಸರ್ಕಾರ ತನ್ನ ಆಕ್ಷೇಪಣೆಯಲ್ಲಿ ತಿಳಿಸಿದೆ.
ಸಮಾಜದಲ್ಲಿರುವ ಸಮುದಾಯಗಳು ಸಲ್ಲಿಸುವ ಮನವಿಯನ್ನು ಆಯೋಗದ ಪರಿಗಣಿಸಬಹುದಾಗಿದೆ. ಇದು ಸಹ ನಿರಂತರ ಪ್ರಕ್ರಿಯೆಯಾಗಿದೆ ಎಂದು ಆಕ್ಷೇಪಣೆಯಲ್ಲಿ ಸರ್ಕಾರ ವಿವರಿಸಿದೆ. ಹಿಂದುಳಿದ ವರ್ಗಗಳ ಆಯೋಗ ಸರ್ಕಾರಕ್ಕೆ ಹಲವು ಶಿಫಾರಸ್ಸುಗಳನ್ನು ನೀಡಿದೆ. ಅದಕ್ಕೆ ಅನುಗುಣವಾಗಿ ಸರ್ಕಾರವು ಹಲವು ಹಿಂದುಳಿದ ವರ್ಗಗಳನ್ನು ವರ್ಗೀಕರಣ ಮತ್ತು ಮರುವರ್ಗೀಕರಣ ಮಾಡಿಕೊಂಡು ಬಂದಿದೆ. ಯಾವುದೇ ಹಿಂದುಳಿದ ವರ್ಗದ ವ್ಯಕ್ತಿಯ ಸಾಮಾಜಿಕ ಸ್ಥಿತಿಗತಿ ಒಂದೇ ರೀತಿ ಇರುವುದಿಲ್ಲ. ತೀರಾ ಹಿಂದುಳಿದ ವರ್ಗದ ವ್ಯಕ್ತಿ ಭವಿಷ್ಯದಲ್ಲಿ ಮುಂದುವರಿದ ವರ್ಗಕ್ಕೆ ವರ್ಗಾವಣೆಯಾಗಬಹುದು ಎಂದು ಸರ್ಕಾರ ವಿವರಿಸಿದೆ.
ಪಂಚಮಸಾಲಿ ಸಮುದಾಯವು ತನ್ನನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸಿ ಮೀಸಲು ಕಲ್ಪಿಸಲು ಕೋರಿದೆ. ಆ ಬಗ್ಗೆ ಆಯೋಗವು ಪರಿಶೀಲನೆ ನಡೆಸಿ ಸರ್ಕಾರಕ್ಕೆ ಮಧ್ಯಂತರ ವರದಿ ಸಲ್ಲಿಸಿದೆ. ಅದನ್ನು ಸರ್ಕಾರ ಈಗಾಗಲೇ ಮುಚ್ಚಿದ ಲಕೋಟೆಯಲ್ಲಿ ಹೈಕೋರ್ಟ್‌ಗೆ ಸಲ್ಲಿಸಲಾಗಿದೆ. ಈ ಅರ್ಜಿ ಸಲ್ಲಿಸಿರುವ ಅರ್ಜಿದಾರರ ನಡೆಯು ಅಕಾಲಿಕವಾಗಿದೆ. ಅರ್ಜಿಯಲ್ಲಿ ಯಾವುದೇ ಸಾರ್ವಜನಿಕ ಹಿತಾಸಕ್ತಿ ಅಡಗಿಲ್ಲ. ಹೀಗಾಗಿ ಅರ್ಜಿ ವಿಚಾರಣೆಗೆ ಮಾನ್ಯತೆ ಇಲ್ಲ. ಆದ್ದರಿಂದ ವಜಾಗೊಳಿಸಬೇಕು ಎಂದು ಸರ್ಕಾರ ಹೈಕೋರ್ಟ್‌ಗೆ ಮನವಿ ಮಾಡಿದೆ.
ಇದನ್ನೂ ಓದಿ: ಬೇಲೂರು ಸಕಲೇಶಪುರ ರೈಲ್ವೆ ಮಾರ್ಗ ಕೈಬಿಟ್ಟಿರುವ ಕ್ರಮ ಪ್ರಶ್ನಿಸಿದ್ದ ಸಾರ್ವಜನಿಕ ಅರ್ಜಿ ವಜಾಗೊಳಿಸಿದ ಹೈಕೋರ್ಟ್