ಸುಳ್ಯ (ದಕ್ಷಿಣ ಕನ್ನಡ): ದುಷ್ಕರ್ಮಿಗಳಿಂದ ಹತ್ಯೆಗೊಳಗಾಗಿದ್ದ ಬೆಳ್ಳಾರೆಯ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಪತ್ನಿ ಅವರಿಗೆ ಸಿಎಂ ಸಚಿವಾಲಯದಲ್ಲಿ ಗುತ್ತಿಗೆ ಆಧಾರದ ನೆಲೆಯಲ್ಲಿ ನೇಮಕಾತಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಗುತ್ತಿಗೆ ಆಧಾರದಲ್ಲಿ ಸಿ ಗ್ರೂಪ್ ಹುದ್ದೆಗೆ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಎಂ. ಅವರನ್ನು ನೇಮಕಾತಿ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಸಚಿವಾಲಯದಲ್ಲಿ ಹಿರಿಯ ಸಹಾಯಕ ಹುದ್ದೆಗೆ ನೂತನ ಕುಮಾರಿ ಅವರು ನೇಮಕವಾಗಿದ್ದಾರೆ. ದೊಡ್ಡಬಳ್ಳಾಪುರದಲ್ಲಿ ನಡೆದಿದ್ದ ಬಿಜೆಪಿ ಜನಸ್ಪಂದನ ಸಮಾವೇಶದಲ್ಲಿ ಪ್ರವೀಣ್ ನೆಟ್ಟಾರು ಅವರ ಪತ್ನಿಗೆ ಸರ್ಕಾರಿ ಉದ್ಯೋಗ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದರು. ಇದೀಗ ಸರ್ಕಾರವು ಗುತ್ತಿಗೆ ಆಧಾರದಲ್ಲಿ ನೂತನ ಅವರನ್ನು ನೇಮಕಾತಿ ಮಾಡಿ ಆದೇಶ ಹೊರಡಿಸಿದೆ.
(ಓದಿ: ಪ್ರವೀಣ್ ನೆಟ್ಟಾರು ಹತ್ಯೆ ಮಾಡಿದವರಿಗೆ ಗಲ್ಲು ಶಿಕ್ಷೆ ಆಗಬೇಕು: ಪ್ರಮೋದ್ ಮುತಾಲಿಕ್)
ಬೆಳ್ಳಾರೆ ಸಮೀಪದ ನೆಟ್ಟಾರಿನಲ್ಲಿ ಬಿಜೆಪಿಯ ಯುವ ಮುಖಂಡ ಪ್ರವೀಣ್ (32) ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದರು. ಬಳಿಕ ಕೊಲೆ ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದರು. ಅಂತೆಯೇ ಸರ್ಕಾರವು ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಿತ್ತು. ಸದ್ಯ ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ.