ಬೆಂಗಳೂರು: ಮಂಗಳೂರಿನ ಗರೋಡಿ ಬಳಿ ಸಂಭವಿಸಿದ ಆಟೋ ರಿಕ್ಷಾದಲ್ಲಿ ಕುಕ್ಕರ್ ಸ್ಫೋಟ ಪ್ರಕರಣದ ತನಿಖೆ ಎನ್ಐಎಗೆ ವರ್ಗಾಯಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ, ಪ್ರಕರಣದ ಮುಂದಿನ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ ಎಂದು ತಿಳಿಸಿದ್ದಾರೆ.
ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನ.19ರಂದು ನಡೆದ ಘಟನೆಗೆ ಸಂಬಂಧಿಸಿದಂತೆ ಪ್ರಾಥಮಿಕ ತನಿಖೆಯಲ್ಲಿ ಸಂಗ್ರಹಿಸಲಾದ ಸಾಕ್ಷ್ಯ ಹಾಗೂ ಇತರ ಮಾಹಿತಿಗಳ ಆಧಾರದ ಮೇಲೆ ರಾಜ್ಯ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. UAPA ಕಾಯಿದೆ ಅನ್ವಯ ತನಿಖೆ ನಡೆಸಲು ಶಿಫಾರಸು ಮಾಡಲಾಗಿದೆ.
ಮಂಗಳೂರಿನ ಗರೋಡಿ ಬಳಿ ನ.19ರಂದು ಆಟೋ ರಿಕ್ಷಾದಲ್ಲಿ ನಿಗೂಢ ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ ಆಟೋ ಚಾಲಕ ಮತ್ತು ಓರ್ವ ಪ್ರಯಾಣಿಕ ಗಾಯಗೊಂಡಿದ್ದರು. ಬಳಿಕ ಇದೊಂದು ಭಯೋತ್ಪಾದಕ ಕೃತ್ಯ ಎಂಬುದು ಪೊಲೀಸರ ತನಿಖೆ ವೇಳೆ ಕಂಡುಬಂದಿದೆ ಎಂದು ಡಿಜಿಪಿ ಪ್ರವೀಣ್ ಸೂದ್ ತಿಳಿಸಿದ್ದರು.
ಇದನ್ನೂ ಓದಿ: ಮಂಗಳೂರು ಸ್ಫೋಟ: ಹೊಣೆ ಹೊತ್ತ ಸಂಘಟನೆ ಪೋಸ್ಟರ್ ವೈರಲ್, ಸತ್ಯಾಸತ್ಯತೆ ಪರಿಶೀಲನೆ ಎಂದ ಎಡಿಜಿಪಿ