ಬೆಂಗಳೂರು: ರಾಜ್ಯದ ವಿಧಿ ವಿಜ್ಞಾನ ಪ್ರಯೋಗಾಲಯಗಳಲ್ಲಿ ಖಾಲಿ ಇದ್ದ ಜಂಟಿ ನಿರ್ದೇಶಕ, ಉಪ ನಿರ್ದೇಶಕ ಹಾಗೂ ಸಹಾಯಕ ನಿರ್ದೇಶಕರ ಹುದ್ದೆಗಳನ್ನು ಭರ್ತಿ ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್ಗೆ ಮಾಹಿತಿ ನೀಡಿದೆ.
ರಾಜ್ಯದ ಎಫ್ಎಸ್ಎಲ್ ಕೇಂದ್ರಗಳಲ್ಲಿ ಮೂಲಸೌಕರ್ಯ ಹಾಗೂ ಸಿಬ್ಬಂದಿ ಕೊರತೆ ವಿಚಾರವಾಗಿ ಹೈಕೋರ್ಟ್ ಸ್ವಯಂಪ್ರೇರಿತಾವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠಕ್ಕೆ ಈ ಮಾಹಿತಿ ನೀಡಲಾಗಿದೆ.
ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು ಪೀಠಕ್ಕೆ ಮಾಹಿತಿ ನೀಡಿ, 2021ರ ಆಗಸ್ಟ್ 13ರಂದು ನ್ಯಾಯಾಲಯ ನೀಡಿದ್ದ ನಿರ್ದೇಶನದಂತೆ ವಿಧಿವಿಜ್ಞಾನ ಪ್ರಯೋಗಾಲಯಗಳಲ್ಲಿ ಖಾಲಿ ಇದ್ದ ಜಂಟಿ ನಿರ್ದೇಶಕ, ಉಪ ನಿರ್ದೇಶಕ, ಸಹಾಯಕ ನಿರ್ದೇಶಕ ಹಾಗೂ ವೈಜ್ಞಾನಿಕ ಅಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಈ ಕುರಿತಂತೆ ಫೆ.25ರಂದು ನ್ಯಾಯಾಲಯಕ್ಕೆ ವರದಿ ಸಲ್ಲಿಸಲಾಗಿದೆ ಎಂದು ತಿಳಿಸಿದರು.
ಅಲ್ಲದೆ, ಎಫ್ಎಸ್ಎಲ್ ಕೇಂದ್ರಗಳಲ್ಲಿ ಇನ್ನೂ ಕೆಲವು ಹುದ್ದೆಗಳು ಖಾಲಿ ಇದ್ದು, ಅವುಗಳನ್ನು ಭರ್ತಿ ಮಾಡುವ ಪ್ರಕ್ರಿಯೆ ಪ್ರಗತಿಯಲ್ಲಿದೆ. ಅವುಗಳ ನೇಮಕಾತಿಗೆ ಕೆಲ ಸಮಯಾವಕಾಶ ನೀಡಬೇಕು ಎಂದು ಕೋರಿದರು. ಮನವಿ ಪರಿಗಣಿಸಿದ ಪೀಠ, ಎಫ್ಎಸ್ಎಲ್ ಕೇಂದ್ರಗಳಲ್ಲಿ ಖಾಲಿ ಇರುವ ಇತರೆ ಹುದ್ದೆಗಳನ್ನು ಭರ್ತಿ ಮಾಡಲು 6 ವಾರ ಕಾಲಾವಕಾಶ ನೀಡಿ, ವಿಚಾರಣೆಯನ್ನು ಮೇ ಮೊದಲ ವಾರಕ್ಕೆ ಮುಂದೂಡಿತು.
ಇದನ್ನೂ ಓದಿ: ಮೊಬೈಲ್ ರಿಪೇರಿ ಅಂಗಡಿ ಕೆಲಸಗಾರನ ವಿರುದ್ಧ ಸೋತ ಸಿಎಂ ಚರಣ್‌ಜಿತ್ ಸಿಂಗ್ ಚನ್ನಿ!