ಬೆಂಗಳೂರು: ಪಂಚಮಸಾಲಿ ಉಪಪಂಗಡಕ್ಕೆ ಮೀಸಲಾತಿ ನೀಡುವ ಸಂಬಂಧ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸರ್ಕಾರಕ್ಕೆ ಸಲ್ಲಿಸಿದ್ದ ಮಧ್ಯಂತರ ವರದಿಯನ್ನ ಸರ್ಕಾರ ಮುಚ್ಚಿದ ಲಕೋಟೆಯಲ್ಲಿ ಹೈಕೋರ್ಟ್‌ಗೆ ಸಲ್ಲಿಸಿದೆ. ಬೆಂಗಳೂರು ನಗರದ ಡಿಜಿ ರಾಘವೇಂದ್ರ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್ ಕಿಣಗಿ ಅವರಿದ್ದ ಪೀಠಕ್ಕೆ ರಾಜ್ಯ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ಅವರು ಈ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿದರು. ಅಲ್ಲದೇ, ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿದರು. ಇದನ್ನು ದಾಖಲಿಸಿಕೊಂಡ ನ್ಯಾಯಪೀಠ ಮುಂದಿನ ಎರಡು ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸಲು ಸೂಚನೆ ನೀಡಿ ವಿಚಾರಣೆ ಮುಂದೂಡಿತು.
ಓದಿ: ಪಂಚಮಸಾಲಿ ಲಿಂಗಾಯತರಿಗೆ 2ಎ ಮೀಸಲಾತಿ ನೀಡುವ ವರದಿ : ರಿಪೋರ್ಟ್ ಸಲ್ಲಿಸಲು ಹೈಕೋರ್ಟ್‌ಗೆ ಕಾಲಾವಕಾಶ ಕೋರಿದ ಸರ್ಕಾರ
ಈ ಹಿಂದೆ ಪಂಚಮಸಾಲಿ ಲಿಂಗಾಯತ ಉಪಜಾತಿಗೆ ಪ್ರವರ್ಗ 2ಎ ಅಡಿ ಮೀಸಲಾತಿ ನೀಡುವ ಕುರಿತು ಹಿಂದುಳಿದ ವರ್ಗಗಳ ಆಯೋಗ ಸರ್ಕಾರಕ್ಕೆ ಸಲ್ಲಿಸಿರುವ ಮಧ್ಯಂತರ ವರದಿಯನ್ನು ನ್ಯಾಯಪೀಠಕ್ಕೆ ಒದಗಿಸಲು ಸರ್ಕಾರ ಹೈಕೋರ್ಟ್‌ಗೆ ಕಾಲಾವಕಾಶ ಕೋರಿತ್ತು. ಪಂಚಮಸಾಲಿ ಲಿಂಗಾಯತ ಉಪ ಜಾತಿಗೆ ಪ್ರವರ್ಗ 2ಎ ಅಡಿ ಮೀಸಲಾತಿ ನೀಡುವ ಸಂಬಂಧದ ಸರ್ಕಾರದ ಪ್ರಕ್ರಿಯೆ ಪ್ರಶ್ನಿಸಿ ಬೆಂಗಳೂರಿನ ಡಿ.ಜಿ. ರಾಘವೇಂದ್ರ ಮತ್ತಿತರರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆಲೋಕ್ ಆರಾಧೆ ಮತ್ತು ವಿಶ್ವಜಿತ್ ಶೆಟ್ಟಿ ಅವರಿದ್ದ ನ್ಯಾಯಪೀಠಕ್ಕೆ ಸರ್ಕಾರ ಕಾಲಾವಕಾಶ ಕೋರಿತ್ತು.
ವಿಚಾರಣೆ ವೇಳೆ ಹಾಜರಾಗಿದ್ದ ಸರ್ಕಾರದ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ, ಸರ್ಕಾರಕ್ಕೆ ಸಲ್ಲಿಸಿರುವ ವರದಿಯನ್ನು ಫೆಬ್ರವರಿ 2 ಎಂದು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಲಾಗುವುದು ಎಂದು ಭರವಸೆ ನೀಡಿದರು. ಈ ಅಂಶವನ್ನು ದಾಖಲಿಸಿಕೊಂಡ ನ್ಯಾಯಪೀಠ, ವಿಚಾರಣೆ ಮುಂದೂಡಿತು.
ಇದಕ್ಕೂ ಮುಂಚೆ ಜನವರಿ 12ರಂದು ನಡೆದ ವಿಚಾರಣೆ ನಡೆಸಿದ್ದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಮೂರ್ತಿ ಆಶೋಕ್ ಎಸ್. ಕಿಣಗಿ ಅವರಿದ್ದ ವಿಭಾಗೀಯ ಪೀಠ, ಪಂಚಮಸಾಲಿ ಲಿಂಗಾಯತರಿಗೆ ಮೀಸಲಾತಿ ನೀಡುವ ಸಂಬಂಧ ಯಾವುದೇ ಪ್ರಕ್ರಿಯೆಗಳನ್ನು ಮುಂದುವರೆಸದಂತೆ ಯತಾಸ್ಥಿತಿ ಕಾಯ್ದುಕೊಳ್ಳಲು ನಿರ್ದೇಶನ ನೀಡಿತ್ತು. ಆದರೆ, ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡುವುದಕ್ಕೆ ಸಂಬಂಧಿಸಿದಂತೆ ಸಲ್ಲಿಸಿರುವ ಅರ್ಜಿ ವಿಚಾರಣೆ ಹಂತದಲ್ಲಿದೆ.
ಈ ನಡುವೆ ಮೀಸಲಾತಿ ನೀಡುವ ಸಂಬಂಧ ಸರ್ಕಾರ ಕೆಲ ನಿರ್ಧಾರಗಳನ್ನು ಕೈಗೊಳ್ಳಲು ಮುಂದಾಗಿದೆ. ಹೀಗಾಗಿ ತುರ್ತು ವಿಚಾರಣೆಗೆ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದರು. ಅಲ್ಲದೇ, ಮೀಸಲಾತಿ ನೀಡುವುದಕ್ಕೆ ಸಂಬಂಧಿಸಿದಂತೆ ಸರ್ಕಾರ ಕೈಗೊಂಡಿರುವ ನಿರ್ಧಾರಗಳಿಗೆ ಸಂಬಂಧಿಸಿದಂತೆ ಮುಚ್ಚಿದ ಲಕೋಟೆಯಲ್ಲಿ ನ್ಯಾಯಪೀಠಕ್ಕೆ ಸಲ್ಲಿಸಲಾಗುವುದು ಎಂದು ಈ ಹಿಂದೆ ಸರ್ಕಾರದ ಪರ ವಕೀಲರು ನ್ಯಾಯಪೀಠಕ್ಕೆ ತಿಳಿಸಿದ್ದರು. ಆದರೂ ಈವರೆಗೂ ಯಾವುದೇ ಲಕೋಟೆ ಸಲ್ಲಿಸಿಲ್ಲ. ಹೀಗಾಗಿ ಪ್ರಕ್ರಿಯೆಗೆ ತಡೆ ನೀಡಬೇಕು ಎಂದು ನ್ಯಾಯಪೀಠಕ್ಕೆ ವಿವರಿಸಿದರು.
ಡಿ.27ರಂದು ವಿಚಾರಣೆಯಲ್ಲಿ ಅರ್ಜಿದಾರರ ಪರ ವಕೀಲರು, 2000ನೇ ಇಸವಿಯಲ್ಲಿ ಲಿಂಗಾಯತ ಸಮುದಾಯದ ಕೆಲವು ಉಪ ಪಂಗಡಗಳ ಮೀಸಲಾತಿ ಕೋರಿಕೆಯನ್ನು ತಿರಸ್ಕರಿಸಿ ಹಿಂದುಳಿದ ವರ್ಗಗಳ ಆಯೋಗವು ಕೆಲ ಶಿಫಾರಸುಗಳನ್ನು ಮಾಡಿತ್ತು. ಅದಾಗ್ಯೂ ಇತ್ತೀಚೆಗೆ ಹಿಂದುಳಿದ ವರ್ಗಗಳ ಆಯೋಗ ಸಲ್ಲಿಸಿರುವ ಮಧ್ಯಂತರ ವರದಿ ಆಧರಿಸಿ ಪಂಚಮಸಾಲಿ ಸಮುದಾಯವನ್ನು ಪ್ರವರ್ಗ 2ಎ ಗೆ ಸೇರಿಸಲು ಸರ್ಕಾರ ಮುಂದಾಗುತ್ತಿದೆ.
ಆದರೆ, ವೀರಶೈವ/ಲಿಂಗಾಯತ ಸಮುದಾಯದ ಉಪ ಪಂಗಡವನ್ನು ತಾತ್ಕಾಲಿಕ ಪ್ರಕ್ರಿಯೆಯ ಮೂಲಕ ಪ್ರವರ್ಗಕ್ಕೆ 2ಎಗೆ ಸೇರಿಸಲು ಕಾನೂನಿನಲ್ಲಿ ಅವಕಾಶವಿಲ್ಲ. ಆದರೂ ಸರ್ಕಾರ ಹಿಂದುಳಿದ ವರ್ಗಗಳ ಆಯೋಗದ ಮಧ್ಯಂತರ ವರದಿ ಆಧರಿಸಿ ಮೀಸಲು ಕಲ್ಪಿಸಲು ಮುಂದಾಗಿರುವುದು ಕಾನೂನು ಬಾಹಿರ ಎಂದು ವಾದ ಮಂಡಿಸಿದ್ದರು.
ಇದನ್ನು ಓದಿ: ಗಡಿ ಅಭಿವೃದ್ಧಿ ಪ್ರಾಧಿಕಾರಕ್ಕೆ 100 ಕೋಟಿ ರೂ.ಗಳ ಅನುದಾನ ಬಿಡುಗಡೆ: ಸಿಎಂ ಬೊಮ್ಮಾಯಿ