ಬೆಂಗಳೂರು: ಗ್ರಾಮ ಪಂಚಾಯತಿಗಳಿಗೆ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಶುಕ್ರವಾರ ಕ್ಷೇತ್ರ ವ್ಯಾಪ್ತಿಯಲ್ಲಿ ರಜೆ ಘೋಷಿಸಿ ಸರ್ಕಾರ ಆದೇಶ ಹೊರಡಿಸಲಾಗಿದೆ. ಅವಧಿ ಮುಕ್ತಾಯವಾಗಲಿರುವ ಗ್ರಾಮ ಪಂಚಾಯಿತಿಗಳಿಗೆ ಸಾರ್ವತ್ರಿಕ ಚುನಾವಣೆ ಹಾಗೂ ವಿವಿಧ ಕಾರಣಗಳಿಂದ ಗ್ರಾಮ ಪಂಚಾಯಿತಿಯಲ್ಲಿ ಖಾಲಿಯಿರುವ ಹಾಗೂ ತೆರವಾಗಿರುವ ಸ್ಥಾನಗಳಿಗೆ ಉಪ ಚುನಾವಣೆ ಘೋಷಣೆಯಾಗಿದ್ದು, ಶುಕ್ರವಾರ ಮತದಾನ ನಡೆಯಲಿದೆ.
ಸಾರ್ವತ್ರಿಕ/ಉಪ ಚುನಾವಣೆ ನಡೆಯುವ ಪಂಚಾಯಿತಿ ಮತ ಕ್ಷೇತ್ರಗಳಲ್ಲಿನ ಸರ್ಕಾರಿ ಹಾಗೂ ಖಾಸಗಿ ಕಾಲೇಜುಗಳು, ಅನುದಾನಿತ ಹಾಗೂ ಅನುದಾನರಹಿತ ವಿದ್ಯಾಸಂಸ್ಥೆಗಳು, ಎಲ್ಲ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಚೇರಿಗಳು, ರಾಷ್ಟ್ರೀಕೃತ ಹಾಗೂ ಇತರ ಬ್ಯಾಂಕುಗಳು, ಕೇಂದ ಹಾಗೂ ರಾಜ್ಯ ಸರ್ಕಾರದ ಕಾರ್ಖಾನೆಗಳು, ಉಳಿದ ಕೈಗಾರಿಕಾ ಸಂಸ್ಥೆಗಳು ಹಾಗೂ ಸಹಕಾರಿ ರಂಗದ ಸಂಘ ಸಂಸ್ಥೆ, ಔದ್ಯಮಿಕ ಸಂಸ್ಥೆಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ಅರ್ಹ ಮತದಾರ ನೌಕರರಿಗೆ ಸೀಮಿತವಾದಂತೆ ಅ.28 ರಂದು ವೇತನ ಸಹಿತ ರಜೆಯನ್ನು ಘೋಷಿಸಿ ಸರ್ಕಾರ ಆದೇಶಿಸಿದೆ.
ಈ ರಜೆಯು ತುರ್ತು ಸೇವೆಗಳ ಮೇಲೆ ಇರುವ ಸರ್ಕಾರಿ ನೌಕರರಿಗೆ ಅನ್ವಯಿಸುವುದಿಲ್ಲ. ಈ ಚುನಾವಣೆ ಕಾರ್ಯಗಳಿಗೆ ನಿಯೋಜಿಸಲ್ಪಟ್ಟ ಎಲ್ಲಾ ಸರ್ಕಾರಿ ನೌಕರರು ಚುನಾವಣಾ ಕಾರ್ಯಕ್ಕೆ ಹಾಜರಾಗುವಂತೆ ತಿಳಿಸಿದೆ. ಶುಕ್ರವಾರ ಅವಧಿ ಮುಗಿದ 252 ಗ್ರಾಪಂ ಸ್ಥಾನಗಳಿಗೆ ಹಾಗೂ ವಿವಿಧ ಕಾರಣಗಳಿಂದ ತೆರವಾದ 187 ಸದಸ್ಯ ಸ್ಥಾನಗಳಿಗೆ ಮತದಾನ ನಡೆಯಲಿದೆ.
(ಓದಿ: ಹುಕ್ಕೇರಿ ಗ್ರಾ.ಪಂ ಚುನಾವಣೆ: ವರ್ಷದ ಬಳಿಕ ಮರು ಮತಎಣಿಕೆ, 1 ಮತದಿಂದ ಸೋತ ಅಭ್ಯರ್ಥಿಗೆ ಮತ್ತೆ ಸೋಲು! )