ಬೆಂಗಳೂರು: ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆ ಕೆಲ ಫಲಾನುಭವಿಗಳಿಗೆ ತಲುಪಲು ತಾಂತ್ರಿಕವಾಗಿ ಅಡತಡೆಯುಂಟಾಗಿದ್ದು, ಈ ಸಮಸ್ಯೆಗಳಿಗೆ ಶೀಘ್ರದಲ್ಲಿ ಪರಿಹಾರ ಸಿಗಲಿದೆ. ಇನ್ನೊಂದು ವಾರದಲ್ಲಿ ಗೃಹಲಕ್ಷ್ಮಿ ಅದಾಲತ್ ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಬಾಲ ಭವನದಲ್ಲಿ ಗುರುವಾರ ನಡೆದ ಮಕ್ಕಳ ದಿನಾಚರಣೆ ಸಮಾರಂಭದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಈಗಾಗಲೇ 1 ಕೋಟಿ 10 ಲಕ್ಷ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆ ತಲುಪಿದ್ದು, ಪಿಡಿಒ, ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಬಾಕಿ ಉಳಿದಿರುವ ಫಲಾನುಭವಿಗಳಿಗೆ ಆಯಾ ಪಂಚಾಯಿತಿ, ಪುರಸಭೆ, ನಗರಸಭೆ ವ್ಯಾಪ್ತಿಯಲ್ಲಿ ಸಭೆ ನಡೆಸಿ ಹಣ ಹಾಕುವ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.
ಈಗಾಗಲೇ ಮೂರು ಕಂತಿನ ಹಣ ಬಾರದೇ ಇದ್ದವರಿಗೆ ಏಕಕಾಲಕ್ಕೆ ಆರು ಸಾವಿರ ದುಡ್ಡು ಹಾಕುವ ಪ್ರಕ್ರಿಯೆ ನಡೆಯುತ್ತಿದೆ. ಗೃಹಲಕ್ಷ್ಮಿ ಯೋಜನೆಗೆ ಸುಮಾರು 50 ಸಾವಿರ ತೆರಿಗೆದಾರರು ಕೂಡ ಅರ್ಜಿ ಹಾಕಿದ್ದು, ಅರ್ಜಿಗಳನ್ನು ನಿರಾಕರಿಸಿ ಡಿಲೀಟ್ ಮಾಡಲಾಗಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.
ಗಾಂಧೀಜಿ ನೆಹರೂ ಕನಸು ಮಕ್ಕಳು ನನಸು ಮಾಡಬೇಕು: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ, ಜವಾಹರಲಾಲ್ ನೆಹರೂ ಅವರ ಕನಸುಗಳನ್ನು ಇಂದಿನ ಮಕ್ಕಳು ನನಸು ಮಾಡಬೇಕು. ಪ್ರತಿಯೊಬ್ಬ ಮಕ್ಕಳು ಉತ್ತಮ ದಾರಿಯಲ್ಲಿ ಮುನ್ನಡೆದು, ಪೋಷಕರಿಗೆ ಕೀರ್ತಿ ತರಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕರೆ ನೀಡಿದರು.
ನಗರದ ಕಬ್ಬನ್ ಪಾರ್ಕ್ನಲ್ಲಿರುವ ಬಾಲಭವನದಲ್ಲಿ ಗುರುವಾರ ನಡೆದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಭಾರತ ವಿಶ್ವಮಟ್ಟದಲ್ಲಿ ಸಮೃದ್ಧವಾಗಿ ಬೆಳೆಯುತ್ತಿದೆ. ಇಡೀ ವಿಶ್ವ ಭಾರತದತ್ತ ತಿರುಗಿ ನೋಡುತ್ತಿದೆ. ಇದಕ್ಕೆ ಇಂದಿನ ಯುವಜನತೆಯೇ ಕಾರಣ, ಪಾಲಕರು ಮಕ್ಕಳನ್ನು ಸತ್ಪ್ರಜೆಗಳಾಗಿ ಬೆಳೆಸಬೇಕು. ನೆಹರೂ, ಗಾಂಧೀಜಿಯಂಥ ಮಹಾನ್ ನಾಯಕರ ಬಗ್ಗೆ ಮಕ್ಕಳಿಗೆ ತಿಳಿ ಹೇಳಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಮಕ್ಕಳಿಗೆ ಶೌರ್ಯ ಪ್ರಶಸ್ತಿ, ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಸಂಸ್ಥೆಗಳಿಗೆ ಮತ್ತು ವ್ಯಕ್ತಿಗಳಿಗೆ ರಾಜ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಡಾ. ಜಿ.ಸಿ. ಪ್ರಕಾಶ್, ನಿರ್ದೇಶಕಿ ಎಂ.ಎಸ್. ಅರ್ಚನಾ, ಇಲಾಖೆಯ ವ್ಯವಸ್ಥಾಪಕ ನಿರ್ದೇಶಕಿ ಪುಷ್ಪಲತಾ, ಬಾಲಭವನದ ಕಾರ್ಯದರ್ಶಿ ನಿಶ್ಚಲ್ ಸೇರಿದಂತೆ ಇಲಾಖೆಯ ಅಧಿಕಾರಿಗಳು, ಅಪಾರ ಮಕ್ಕಳು ಪಾಲ್ಗೊಂಡಿದ್ದರು.
ಇದನ್ನೂಓದಿ:ಲೋಕಸಭೆ ಚುನಾವಣೆ: ಎಲ್ಲರೂ ಕೂಡಿ ಕೆಲಸ ಮಾಡಲು ಒಪ್ಪಿದ್ದೇವೆ- ರಮೇಶ್ ಜಾರಕಿಹೊಳಿ