ಬೆಂಗಳೂರು: ಬರೋಬ್ಬರಿ ಒಂದೂವರೆ ವರ್ಷದ ಬಳಿಕ ಶಾಲೆಗಳನ್ನು ಪುನಾರಂಭಿಸಲು ಸರ್ಕಾರ ಮುಂದಾಗಿದೆ. ಆಗಸ್ಟ್ 23ರಿಂದ 9 ಮತ್ತು 10ನೇ ತರಗತಿ ಆರಂಭಿಸುವ ಸಂಬಂಧ ಸರ್ಕಾರ ಇಂದು ಮಾರ್ಗಸೂಚಿ ಹೊರಡಿಸಿದೆ.
ಈ ಮಾರ್ಗಸೂಚಿ ಪ್ರಕಾರ ರಾಜ್ಯದಲ್ಲಿನ ಕೋವಿಡ್ ಸೋಂಕಿನ ಪ್ರಮಾಣ ಶೇ.2ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿನ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರೌಢ ಶಾಲೆಗಳಲ್ಲಿನ 9ನೇ ಮತ್ತು 10ನೇ ತರಗತಿಗಳನ್ನು ಆಗಸ್ಟ್ 23ರಿಂದ ಪ್ರತಿದಿನ ಅರ್ಧ ದಿನ-ಬೆಳಗಿನ ಅವಧಿಯಲ್ಲಿ ಭೌತಿಕ ತರಗತಿಗಳನ್ನು ನಡೆಸಲು ಸೂಚಿಸಿದೆ.
ಮಕ್ಕಳು ಶಾಲೆಗೆ ಹಾಜರಾಗುವಾಗ ಪೋಷಕರ ಅನುಮತಿ ಪತ್ರ ತರುವುದು ಕಡ್ಡಾಯವಾಗಿದೆ. ಅನುಮತಿ ಪತ್ರದಲ್ಲಿ ಮಗುವಿಗೆ ಕೋವಿಡ್-19ರ ಸೋಂಕಿನ ಯಾವುದೇ ಲಕ್ಷಣಗಳಿರುವುದಿಲ್ಲ ಎಂಬುದನ್ನು ದೃಢೀಕರಿಸಬೇಕು ಎಂದು ತಿಳಿಸಲಾಗಿದೆ.
ಭೌತಿಕವಾಗಿ ತರಗತಿಗಳನ್ನು ನಡೆಸಲು ಅವಶ್ಯಕ ದೈಹಿಕ ಅಂತರ ಕಾಪಾಡುವ ದೃಷ್ಟಿಯಿಂದ ಶಾಲಾ ಹಂತಗಳಲ್ಲಿ ಕೊಠಡಿಗಳ ಲಭ್ಯತೆ, ವಿದ್ಯಾರ್ಥಿಗಳ ಸಂಖ್ಯೆ ಹಾಗೂ ಶಿಕ್ಷಕರ ಸಂಖ್ಯೆಯನ್ನು ಆಧರಿಸಿ 9 ಮತ್ತು 10ನೇ ತರಗತಿಗಳ ವಿದ್ಯಾರ್ಥಿಗಳನ್ನು 15 ರಿಂದ 20 ಸಂಖ್ಯೆಯ ವಿದ್ಯಾರ್ಥಿಗಳ ತಂಡಗಳನ್ನಾಗಿ ಮಾಡಿಕೊಂಡು ಭೌತಿಕ ತರಗತಿಗಳನ್ನು ನಡೆಸಲು ಸೂಚಿಸಲಾಗಿದೆ.
ಶಾಲೆ ನಡೆಯುವ ಅವಧಿ:
ಸೋಮವಾರದಿಂದ ಶುಕ್ರವಾರದ ವರೆಗೆ ಬೆಳಗ್ಗೆ 10ರಿಂದ ಮಧ್ಯಾಹ್ನ 1:30ವರೆಗೆ ತರಗತಿ.
ಶನಿವಾರ ಬೆಳಗ್ಗೆ 10 ರಿಂದ ಮಧ್ಯಾಹ್ನ 12:50ರವರೆಗೆ ಕ್ಲಾಸ್.
ಮಾರ್ಗಸೂಚಿಯಲ್ಲಿ ಏನಿದೆ?:
- 9 ಮತ್ತು 10ನೇ ತರಗತಿಗಳ ವಿದ್ಯಾರ್ಥಿಗಳು ಮನೆಯಿಂದಲೇ ಅಗತ್ಯವಾದ ನೀರು, ಉಪಹಾರವನ್ನು ತರುವಂತೆ ಸೂಚನೆ ನೀಡಬೇಕು.
- ಕುಡಿಯುವ ನೀರಿನ ಅವಶ್ಯಕತೆ ಅನುಸಾರ ಶಾಲೆಗಳಲ್ಲಿ ಮಕ್ಕಳಿಗೆ ಕುಡಿಯಲು ಶುದ್ಧ ಬಿಸಿ ನೀರಿನ ವ್ಯವಸ್ಥೆ ಮಾಡಬೇಕು.
- ಶಾಲೆಗಳಲ್ಲಿ ವಿದ್ಯಾರ್ಥಿಗಳ ಭೌತಿಕ ಹಾಜರಾತಿ ಕಡ್ಡಾಯವಲ್ಲ, ಆನ್‌ಲೈನ್ ಅಥವಾ ಪರ್ಯಾಯ ವಿಧಾನದಲ್ಲಿ ಹಾಜರಾಗಬಹುದು.
- ಶಾಲೆಗೆ ಹಾಜರಾಗಲು ಬಯಸದೇ ಇರುವ ವಿದ್ಯಾರ್ಥಿಗಳಿಗೆ ಈಗ ಅನುಸರಿಸುತ್ತಿರುವ ಆನ್‌ಲೈನ್/ ಇತರೆ ವ್ಯವಸ್ಥೆಯನ್ನು ಮುಂದುವರಿಸಿಕೊಂಡು ಹೋಗಬೇಕು.
- ಊಟದ ವಿರಾಮದ ನಂತರ ಅಪರಾಹ್ನ ಪ್ರೌಢ ಶಾಲೆಗಳ ಶಿಕ್ಷಕರು 8ನೇ ತರಗತಿ ವಿದ್ಯಾರ್ಥಿಗಳಿಗೆ ಪರ್ಯಾಯ ವಿಧಾನದಲ್ಲಿ ಬೋಧನೆ ಮತ್ತು ಕಲಿಕೆ ಪ್ರಕ್ರಿಯೆಗಳನ್ನು ನಡೆಸಬೇಕು.
- ರಾಜ್ಯದಲ್ಲಿನ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಶಾಲಾ ಸುರಕ್ಷತೆ, ಮಕ್ಕಳ ಸುರಕ್ಷತೆಗಾಗಿ ನಿಗದಿಪಡಿಸಿರುವ ಪ್ರಮಾಣಿತ ಕಾರ್ಯಾಚರಣೆ ವಿಧಾನ (ಎಸ್‌ಒಪಿ) ಕಡ್ಡಾಯವಾಗಿ ಅನುಷ್ಠಾನಗೊಳಿಸಲು ಉಪನಿರ್ದೇಶಕರು(ಆಡಳಿತ) ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಅಗತ್ಯ ಕ್ರಮವಹಿಸಲು ಸೂಚಿಸಿದೆ.