ಬೆಂಗಳೂರು: ನಗರದ ಗುರು ರಾಘವೇಂದ್ರ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಹಾಗೂ ಗುರು ಸಾರ್ವಭೌಮ ಸೌಹಾರ್ದ ಕ್ರೆಡಿಟ್ ಕೋ-ಅಪರೇಟಿವ್ ಲಿಮಿಟೆಡ್‌ನ ಆಡಳಿತ ಮಂಡಳಿ ಠೇವಣಿದಾರರ ಹಣ ದುರ್ಬಳಕೆ ಮಾಡಿಕೊಂಡಿರುವ ಪ್ರಕರಣವನ್ನು ಸರ್ಕಾರ ಅಪರಾಧ ತನಿಖಾ ದಳಕ್ಕೆ (ಸಿಐಡಿ) ವಹಿಸಿದ್ದು, ಪ್ರಕರಣದ ತನಿಖಾ ವರದಿ ಸಲ್ಲಿಸುವಂತೆ ಹೈಕೋರ್ಟ್ ಸಿಐಡಿಗೆ ಸೂಚಿಸಿದೆ.
ಹಗರಣದ ತನಿಖೆಯನ್ನು ಡಿಐಜಿ ನೇತೃತ್ವದ ವಿಶೇಷ ತನಿಖಾ ತಂಡಕ್ಕೆ ವಹಿಸುವಂತೆ ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಬಸವನಗುಡಿಯ ಕೆ.ಆರ್. ನರಸಿಂಹಮೂರ್ತಿ ಮತ್ತಿತರರು ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಅರ್ಜಿ ಶುಕ್ರವಾರ ವಿಚಾರಣೆಗೆ ಬಂದಾಗ ಅರ್ಜಿದಾರರ ಪರ ವಕೀಲರು, ಸರ್ಕಾರವು ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿರುವ ಮಾಹಿತಿ ನೀಡಿದರು. ಹೇಳಿಕೆ ದಾಖಲಿಸಿಕೊಂಡ ಪೀಠ, ಮುಂದಿನ ವಿಚಾರಣೆ ವೇಳೆ ಪ್ರಕರಣದ ತನಿಖಾ ವರದಿಯನ್ನು ಸಿಐಡಿ ನ್ಯಾಯಾಲಯಕ್ಕೆ ಸಲ್ಲಿಸಬೇಕು.
ಬ್ಯಾಂಕಿನ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಬೇಕೆಂಬ ಅರ್ಜಿದಾರರ ಮನವಿಯನ್ನು ಸಿಐಡಿ ಪರಿಶೀಲಿಸಬೇಕು. ಬ್ಯಾಂಕಿನ ನಿರ್ವಹಣೆ ಸಂಬಂಧ ನೇಮಕವಾಗಿರುವ ಆಡಳಿತಾಧಿಕಾರಿ ಸಾಲ ವಸೂಲಾತಿ ಕುರಿತು ವಸ್ತುಸ್ಥಿತಿ ವರದಿ ಸಲ್ಲಿಸಬೇಕು ಎಂದು ನಿರ್ದೇಶಿಸಿ, ವಿಚಾರಣೆಯನ್ನು ಜುಲೈ 20ಕ್ಕೆ ಮುಂದೂಡಿತು.
ಪ್ರಕರಣದ ಹಿನ್ನೆಲೆ: ಗುರು ರಾಘವೇಂದ್ರ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಮತ್ತು ಅದರ ಅಂಗ ಸಂಸ್ಥೆ ಕೋ-ಅಪರೇಟಿವ್ ಸೊಸೈಟಿ ಠೇವಣಿದಾರರ 1,650 ಕೋಟಿ ಹಣವನ್ನು ಖಾತರಿ ಇಲ್ಲದ ಅನುಮಾನಾಸ್ಪದ ವ್ಯಕ್ತಿಗಳಿಗೆ, ನಕಲಿ ಖಾತೆದಾರರಿಗೆ ಸಾಲ ನೀಡಿವೆ. ಈ ಅವ್ಯವಹಾರದಲ್ಲಿ ಬ್ಯಾಂಕ್ ಮತ್ತು ಕ್ರೆಡಿಟ್ ಸೊಸೈಟಿಯ ಪದಾಧಿಕಾರಿಗಳು ಶಾಮೀಲಾಗಿದ್ದಾರೆ ಎಂಬ ಆರೋಪವಿದೆ.
ಹಗರಣ ಬೆಳಕಿಗೆ ಬಂದ ಬಳಿಕ ಹಣ ಬಾರದೆ ಕಂಗಾಲಾಗಿರುವ ಠೇವಣಿದಾರರು ಪೊಲೀಸರಿಗೆ ದೂರು ನೀಡಿದ್ದು, ನಂತರ ಪ್ರಕರಣದ ತನಿಖೆಯನ್ನು ಡಿಐಜಿ ಹಂತದ ಅಧಿಕಾರಿ ನೇತೃತ್ವದ ವಿಶೇಷ ತನಿಖಾ ತಂಡಕ್ಕೆ ವಹಿಸುವಂತೆ ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.