ಬೆಂಗಳೂರು: ಪರಿಶಿಷ್ಟ ಪಂಗಡದ ಮೀಸಲು ಪ್ರಮಾಣವನ್ನು ಶೇ.7.5ಕ್ಕೆ ಹೆಚ್ಚಿಸುವಂತೆ ರಾಜ್ಯ ಸರಕಾರವನ್ನು ಒತ್ತಾಯಿಸಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ನಡೆಸುತ್ತಿರುವ ಧರಣಿಗೆ ಬೆಂಬಲ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಈ ಬಗ್ಗೆ ವಿಧಾನಸಭೆ ಕಲಾಪದಲ್ಲಿ ಪ್ರಸ್ತಾಪ ಮಾಡುವುದಾಗಿ ತಿಳಿಸಿದರು.
ಮಾಧ್ಯಮಗಳ ಜತೆ ಮಾತನಾಡಿದ ಹೆಚ್ಡಿಕೆ, ನಾನು ಮುಖ್ಯಮಂತ್ರಿಯಾಗಿದ್ದಾಗ ಸ್ವಾಮೀಜಿ ಮೀಸಲು ಪ್ರಮಾಣ ಹೆಚ್ಚಿಸುವಂತೆ ಒತ್ತಾಯಿಸಿ ಪಾದಯಾತ್ರೆ ನಡೆಸಿದ್ದರು. ಆ ಬಗ್ಗೆ ಅಧ್ಯಯನ ನಡೆಸಿ ವರದಿ ನೀಡಲು ರಾಜ್ಯ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಹೆಚ್.ಎಸ್.ನಾಗಮೋಹನ್ ದಾಸ್ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗಿತ್ತು. ಆ ಸಮಿತಿಯೂ ಈಗಾಗಲೇ ವರದಿ ಸಲ್ಲಿಸಿದ್ದರೂ ಸರಕಾರ ಅನುಷ್ಠಾನಕ್ಕೆ ತಂದಿಲ್ಲ. ಕೂಡಲೇ ಸರಕಾರ ಈ ಬಗ್ಗೆ ನಿರ್ಧಾರ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.