ಬೆಂಗಳೂರು : ಮುಂಗಾರು ಮಳೆಗೆ ನಲುಗಿರುವ ರಾಜ್ಯದ ಜನತೆ ಮತ್ತು ಜಾನುವಾರುಗಳ ರಕ್ಷಣೆಗೆ ಸರ್ಕಾರ ಸಮರೋಪಾದಿಯಲ್ಲಿ ಸ್ಪಂದಿಸಿ, ಪರಿಹಾರ ಕ್ರಮ ಕೈಗೊಳ್ಳುವಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಅತಿವೃಷ್ಟಿ ಸಂತ್ರಸ್ತರ ಪರಿಹಾರ ಕಾಮಗಾರಿಗಳಿಗೆ ಹಣಕಾಸಿನ ಕೊರತೆಯಾಗದಂತೆ ಸರ್ಕಾರ ಎಚ್ಚರಿಕೆ ವಹಿಸಬೇಕು. ಸಚಿವರು ಮತ್ತು ಅಧಿಕಾರಿಗಳು ಮಳೆ ಹಾನಿಗೊಳಗಾದ ಪ್ರದೇಶಗಳಿಗೆ ತೆರಳಿ ಅಲ್ಲಿಯೇ ಮೊಕ್ಕಾಂ ಹೂಡಿ ಪರಿಸ್ಥಿತಿಯ ಉಸ್ತುವಾರಿ ನೋಡಿಕೊಳ್ಳುವ ಮೂಲಕ ನೆರೆ ಸಂತ್ರಸ್ತರಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕಿದೆ ಎಂದು ಸಲಹೆ ನೀಡಿದ್ದಾರೆ.
ಈ ಬಾರಿಯೂ ರಾಜ್ಯ ಅತಿವೃಷ್ಟಿಯ ಸಂಕಷ್ಟಕ್ಕೆ ಸಿಲುಕಿದ್ದು, ವಿಶೇಷವಾಗಿ ರೈತರು ಕಂಗಾಲಾಗಿದ್ದಾರೆ. ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ ಮುಂಗಾರಿನ ಅಬ್ಬರ ಹೆಚ್ಚಿದ್ದು, ಜಿಲ್ಲಾವಾರು ವಿಶೇಷ ಕಾರ್ಯಪಡೆ ರಚಿಸುವ ಮೂಲಕ ನೆರೆ ಪರಿಸ್ಥಿತಿ ನಿಭಾಯಿಸಬೇಕಿದೆ ಎಂದು ಹೇಳಿದ್ದಾರೆ.
ಅತಿವೃಷ್ಟಿ ಸಂತ್ರಸ್ತರಿಗೆ ಕೂಡಲೇ ಆಸರೆ ಕೇಂದ್ರಗಳನ್ನು ಸ್ಥಾಪಿಸಬೇಕು. ಬೆಳೆ ಹಾನಿಗೊಳಗಾದ ರೈತರಿಗೆ ಹಾಗೂ ಮನೆ - ಮಠ ಕಳೆದುಕೊಂಡವರಿಗೆ, ಜೀವ ಹಾನಿಗೊಳಗಾದವರಿಗೆ ತಡಮಾಡದೇ ಸರ್ಕಾರ ಸಹಾಯಹಸ್ತ ಚಾಚಬೇಕು. ಸತತ ನೆರೆ ಹಾವಳಿಗೆ ಸಿಲುಕುತ್ತಿರುವ ಸಂತ್ರಸ್ತರಿಗೆ ಹೆಚ್ಚಿನ ಪರಿಹಾರ ನೀಡಲು ಕೇಂದ್ರ ಸರ್ಕಾರವು ರಾಜ್ಯಕ್ಕೆ ವಿಶೇಷ ಆರ್ಥಿಕ ನೆರವು ನೀಡಬೇಕು. ರಾಜ್ಯ ಸರ್ಕಾರ ಕೂಡ ಈ ಸಂಬಂಧ ಕೇಂದ್ರದ ಮೇಲೆ ಒತ್ತಡ ತರಬೇಕು ಎಂದು ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.