ಬೆಂಗಳೂರು: ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ವಿಚಾರಣೆ ರದ್ದು ಕೋರಿ ಮುರುಘಾಮಠದ ಪೀಠಾಧಿಪತಿ ಶಿವಮೂರ್ತಿ ಶರಣರು ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ಜು 20ಕ್ಕೆ ಮುಂದೂಡಿದೆ. ಅಲ್ಲಿಯವರೆಗೂ ಶರಣರ ವಿರುದ್ಧದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆ, ಧಾರ್ಮಿಕ ಸಂಸ್ಥೆಗಳ (ದುರ್ಬಳಕ ತಡೆ) ಕಾಯ್ದೆಯ ಮತ್ತು ಸಾಕ್ಷ್ಯ ನಾಶ ಆರೋಪ ಕುರಿತ ಸೆಷನ್ಸ್ ಕೋರ್ಟ್ ವಿಚಾರಣೆಗೆ ನೀಡಲಾಗಿದ್ದ ತಡೆಯಾಜ್ಞೆ ವಿಸ್ತರಿಸಿ ಆದೇಶಿಸಿದೆ.
ಪೋಕ್ಸೋ, ಎಸ್‌ಸಿ-ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ, ಧಾರ್ಮಿಕ ಸಂಸ್ಥೆಗಳ ದುರ್ಬಳಕೆ ತಡೆ ಕಾಯ್ದೆಯಡಿ ಮತ್ತು ಸಾಕ್ಷ್ಯ ನಾಶ ಸೇರಿ ಇನ್ನಿತರ ಆರೋಪಗಳ ಸಂಬಂಧ ತಮ್ಮ ವಿರುದ್ಧ ದಾಖಲಾಗಿದ್ದ ದೋಷಾರೋಪ ಪಟ್ಟಿ ಮತ್ತು ಆ ಕುರಿತ ಚಿತ್ರದುರ್ಗ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ವಿಚಾರಣೆ ರದ್ದುಪಡಿಸುವಂತೆ ಕೋರಿ ಮುರುಘಾ ಶರಣರು ಹೈಕೋರ್ಟ್‌ಗೆ ನಾಲ್ಕು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದರು.
ಈ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠಕ್ಕೆ, ಶರಣರ ಪರ ವಕೀಲರು ಮತ್ತು ಪೊಲೀಸರ ಪರ ಸರ್ಕಾರಿ ವಕೀಲರು ಹಾಜರಾಗಿ ವಾದ ಮಂಡನೆಗೆ ಸ್ವಲ್ಪ ಕಾಲಾವಕಾಶ ನೀಡಬೇಕು ಎಂದು ಕೋರಿದರು. ಇದನ್ನು ಪುರಸ್ಕರಿಸಿದ ನ್ಯಾಯಪೀಠ, ಜು. 20ಕ್ಕೆ ಅರ್ಜಿಗಳ ವಿಚಾರಣೆ ಮುಂದೂಡಿತು. ಅಲ್ಲದೇ, ಇದೇ ಕೊನೆಯ ಬಾರಿಗೆ ಕಾಲಾವಕಾಶ ನೀಡಲಾಗುತ್ತದೆ. ಮುಂದಿನ ವಿಚಾರಣೆ ವೇಳೆ ವಾದ ಮಂಡನೆಗೆ ಸಿದ್ದರಾಗಿ ಬನ್ನಿ. ನಿಮ್ಮ ವಾದವನ್ನು ಆದಷ್ಟು ಬೇಗ ಮುಗಿಸಿ. ಏನೇ ಇದ್ದರೂ ಸಂಪೂರ್ಣವಾಗಿ ವಾದ ಆಲಿಸಲಾಗುವುದು. ಮತ್ತೆ ಸಮಯಾವಕಾಶ ಕೋರಬಾರದು ಎಂದು ಉಭಯ ಪಕ್ಷಗಾರರ ಪರ ವಕೀಲರಿಗೆ ನ್ಯಾಯಪೀಠ ಸೂಚನೆ ನೀಡಿತು.
ಜತೆಗೆ, ಎಸ್‌ಸಿ-ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ, ಧಾರ್ಮಿಕ ಸಂಸ್ಥೆಗಳ ದುರ್ಬಳಕ ತಡೆ ಕಾಯ್ದೆ ಅಡಿಯ ಮತ್ತು ಸಾಕ್ಷ್ಯ ನಾಶ ಸೇರಿದಂತೆ ಇನ್ನಿತರ ಆರೋಪಗಳ ಸಂಬಂಧ ಶರಣ ವಿರುದ್ಧ ಚಿತ್ರದುರ್ಗ ಸೆಷನ್ಸ್ ನ್ಯಾಯಾಲಯವು ದೋಷಾರೋಪ ಹೊರಿಸಿ ಸಾಕ್ಷಿ ವಿಚಾರಣೆ ನಡೆಸುವುದಕ್ಕೆ ಈ ಹಿಂದೆ ನೀಡಿದ್ದ ತಡೆಯಾಜ್ಞೆಯನ್ನು ಜು.20ರವರೆಗೆ ವಿಸ್ತರಿಸಿ ನ್ಯಾಯಪೀಠ ಆದೇಶಿಸಿತು.
ಪ್ರಕರಣದ ಹಿನ್ನೆಲೆ ಏನು?: ಶಿವಮೂರ್ತಿ ಶರಣರ ವಿರುದ್ಧ ಪೊಕ್ಸೊ ಕಾಯ್ದೆ, ಭಾರತೀಯ ದಂಡ ಸಂಹಿತೆ, ಧಾರ್ಮಿಕ ಸಂಸ್ಥೆಗಳ ದುರುಪಯೋಗ ತಡೆ ಕಾಯ್ದೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಮತ್ತು ಬಾಲ ನ್ಯಾಯ (ಮಕ್ಕಳ ಸಂರಕ್ಷಣೆ ಹಾಗೂ ಆರೈಕೆ) ಕಾಯ್ದೆಯ ವಿವಿಧ ಕಲಂಗಳ ಅಡಿ ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಲಾಗಿದ್ದು, ಸೆಷನ್ಸ್ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಲಾಗಿದೆ. ಮುರುಘಾ ಶರಣರು ನಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಇಬ್ಬರು ಬಾಲಕಿಯರು ಮೈಸೂರಿನ ನಜರ್‌ಬಾದ್ ಪೊಲೀಸ್ ಠಾಣೆಯಲ್ಲಿ 2022ರ ಆಗಸ್ಟ್ 26ರಂದು ದೂರು ದಾಖಲಿಸಿದ ನಂತರ ಪೊಲೀಸರು ಶರಣರನ್ನು 2022ರ ಸೆಪ್ಟೆಂಬರ್ 1ರಂದು ಚಿತ್ರದುರ್ಗದ ಬೃಹನ್ಮಠದಲ್ಲಿ ಬಂಧಿಸಿದ್ದರು. ಅಂದಿನಿಂದಲೂ ಅವರು ಚಿತ್ರದುರ್ಗದ ಜೈಲಿನಲ್ಲಿ ನ್ಯಾಯಾಂಗ ವಶದಲ್ಲಿದ್ದಾರೆ.
ಇದನ್ನೂ ಓದಿ: ಚಿತ್ರದುರ್ಗದ ಮುರುಘಾ ಮಠಕ್ಕೆ ಜಿಲ್ಲಾ ಪ್ರದಾನ ನ್ಯಾಯಾಧೀಶರನ್ನು ಆಡಳಿತಾಧಿಕಾರಿಯನ್ನಾಗಿ ನೇಮಿಸಿದ ಹೈಕೋರ್ಟ್