ಬೆಂಗಳೂರು:ಕಳೆದ ಡಿಸೆಂಬರ್‌ನಲ್ಲಿ ನಡೆದ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿಗೆ ನೌಕರರ ಮುಷ್ಕರದಿಂದ ಉಂಟಾಗಿರುವ ನಷ್ಟವನ್ನು ಆಯೋಜಕರಿಂದಲೇ ವಸೂಲಿ ಮಾಡಲು ನಿರ್ದೇಶಿಸುವಂತೆ ಕೋರಿ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದ್ದು, ಈ ಸಂಬಂಧ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಯಾಗಿದೆ.
ಈ ಕುರಿತು ಸಮರ್ಪಣಾ ಸ್ವಯಂ ಸೇವಾ ಸಂಸ್ಥೆ ಸಲ್ಲಿಸಿರುವ ಪಿಐಎಲ್ನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಕೆಲ ಕಾಲ ಅರ್ಜಿದಾರರ ಪರ ವಕೀಲ ಜಿ.ಆರ್. ಮೋಹನ್ ವಾದ ಆಲಿಸಿದ ಪೀಠ, ಪ್ರತಿವಾದಿಗಳಾದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ನಗರ ಪೊಲೀಸ್ ಆಯುಕ್ತ, ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರುಗಳಿಗೆ ನೋಟಿಸ್ ಜಾರಿ ಮಾಡಿ, ವಿಚಾರಣೆಯನ್ನು ಮಾ.30ಕ್ಕೆ ಮುಂದೂಡಿತು.
ಅರ್ಜಿದಾರರ ಕೋರಿಕೆ: ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ನೌಕರರ ಸಂಘಗಳು ಆಗಾಗ್ಗೆ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಮುಷ್ಕರಕ್ಕೆ ಕರೆ ನೀಡುತ್ತಿರುತ್ತವೆ. ಅದನ್ನು ನಿಯಂತ್ರಿಸಲು ಸರ್ಕಾರ ಎಸ್ಮಾ ಕಾಯ್ದೆಯನ್ನೂ ಜಾರಿಗೆ ತಂದಿದೆ. ಹೀಗಿದ್ದರೂ 2020 ಡಿ.11ರಿಂದ 14ರವರೆಗೆ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ನೌಕರರು ಏಕಾಏಕಿ ಮುಷ್ಕರಕ್ಕೆ ಕರೆ ನೀಡಿದ್ದರು. ಇದರಿಂದ ಸಾರ್ವಜನಿಕರಿಗೆ ಅನಾನುಕೂಲ ಉಂಟಾಗಿದ್ದಲ್ಲದೇ, ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿಗೆ 7.93 ಕೋಟಿ ರೂಪಾಯಿ ನಷ್ಟ ಉಂಟಾಗಿದೆ. ಮುಷ್ಕರಕ್ಕೆ ಕರೆ ನೀಡಿದವರ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಆದರೆ, ಅವುಗಳನ್ನು ಆಧರಿಸಿ ಪೊಲೀಸರು ಯಾವುದೇ ತನಿಖೆ ನಡೆಸಿಲ್ಲ. ಆದ್ದರಿಂದ ಮುಷ್ಕರದಿಂದ ಉಂಟಾಗಿರುವ ನಷ್ಟ 7.93 ಕೋಟಿ ರೂಪಾಯಿಯನ್ನು ಮಷ್ಕರಕ್ಕೆ ಕರೆ ನೀಡಿದ್ದ ಸಂಘಟನೆಗಳು ಮತ್ತು ನೌಕರರಿಂದ ವಸೂಲಿ ಮಾಡಬೇಕು. ಮುಷ್ಕರ ಸಂಬಂಧ ದಾಖಲಾಗಿರುವ ಎಫ್‌ಐಆರ್‌ಗಳ ಸಂಬಂಧ ಸೂಕ್ತ ಕಾನೂನು ಕ್ರಮ ಜರುಗಿಸಲು ಸರ್ಕಾರ ಮತ್ತು ನಗರ ಪೊಲೀಸ್ ಆಯುಕ್ತರಿಗೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.