ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯಲ್ಲಿ ತ್ಯಾಜ್ಯ ವಿಲೇವಾರಿಯನ್ನು 2016ರ ಘನ ತ್ಯಾಜ್ಯ ನಿರ್ವಹಣೆ ನಿಯಮಗಳ ಅನುಸಾರ ಮಾಡಲಾಗುತ್ತಿದೆಯೇ ಎಂಬ ಬಗ್ಗೆ ಒಂದು ವಾರದೊಳಗೆ ಸಮಗ್ರ ವರದಿಯನ್ನು ಸಲ್ಲಿಸಬೇಕು ಎಂದು ಹೈಕೋರ್ಟ್ ಬಿಬಿಎಂಪಿಗೆ ನಿರ್ದೇಶಿಸಿದೆ.
ಘನತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದಂತೆ ನಗರದ ಕವಿತಾ ಶಂಕರ್ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಇಂದು ಮುಖ್ಯ ನ್ಯಾಯಮೂರ್ತಿ ಎ. ಎಸ್. ಓಕ ನೇತೃತ್ವದ ಪೀಠ ವಿಚಾರಣೆ ನಡೆಸಿತು. ಈ ವೇಳೆ ಅರ್ಜಿದಾರರ ಪರ ವಕೀಲ ಅಜೇಶ್ ಕುಮಾರ್ ಪೀಠಕ್ಕೆ ಮನವಿ ಮಾಡಿ, ನಗರದಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ಬಗೆಹರಿಸುವ ಸಂಬಂಧ ನ್ಯಾಯಾಲಯ 2012ರಿಂದ ಈವರೆಗೆ ನೀಡಿರುವ ಆದೇಶಗಳನ್ನು ಎರಡು ಸಂಪುಟಗಳಲ್ಲಿ ಸಲ್ಲಿಸಿದ್ದೇವೆ. ಇವುಗಳನ್ನು ಪರಿಶೀಲಿಸಿ ಸೂಕ್ತ ಆದೇಶ ಹೊರಡಿಸಬೇಕು ಎಂದು ಕೋರಿದರು.
ಓದಿ : ರಾಜ್ಯದಲ್ಲಿ ಫೊರೆನ್ಸಿಕ್ ಲ್ಯಾಬ್, ಸಿಬ್ಬಂದಿ ಕೊರತೆ : ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಇದಕ್ಕೆ ಪ್ರತಿಕ್ರಿಸಿದ ಪೀಠ, ಬಿಬಿಎಂಪಿ ಮೊದಲು 2016ರ ನಿಯಮಗಳನ್ನು ಪಾಲನೆ ಮಾಡುತ್ತಿರುವ ಬಗ್ಗೆ ವಿವರವಾಗಿ ವರದಿ ಸಲ್ಲಿಸಲಿ. ಅದನ್ನು ಪರಿಶೀಲಿಸಿದ ನಂತರ ನ್ಯಾಯಾಲಯ ಸೂಕ್ತ ಆದೇಶ ನೀಡಲಿದೆ ಎಂದಿತು. ಅಲ್ಲದೇ, ತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದಂತೆ ನ್ಯಾಯಾಲಯ ಈವರೆಗೆ ನೀಡಿರುವ ನಿರ್ದೇಶನಗಳನ್ನು ಪಾಲಿಸಲು ಕ್ರಮ ಕೈಗೊಂಡಂತೆ ಕಾಣುತ್ತಿಲ್ಲ. ಕ್ವಾರಿಗಳಲ್ಲಿ ತ್ಯಾಜ್ಯ ಸುರಿಯುವುದನ್ನು ಕೋರ್ಟ್ ಸಹಿಸುವುದಿಲ್ಲ ಎಂದಿತು.
ಬಿಬಿಎಂಪಿ ತ್ಯಾಜ್ಯ ವಿಲೇವಾರಿ ನಿಯಮಗಳನ್ನು ಉಲ್ಲಂಘಿಸುತ್ತಿದ್ದರೂ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪಾಲಿಕೆ ವಿರುದ್ಧ ಕ್ರಮಗಳನ್ನು ಕೈಗೊಂಡಿಲ್ಲ. ಸ್ಥಳೀಯ ಅಧಿಕಾರಿಗಳು ಏಕೆ ಕಾನೂನು ಕ್ರಮ ಜರುಗಿಸಿಲ್ಲ ಎಂದು ಪ್ರಶ್ನಿಸಿತಲ್ಲದೇ, ಈ ಸಂಬಂಧ ವಿವರಣೆ ನೀಡುವಂತೆ ಮಂಡಳಿ ಪರ ವಕೀಲರಿಗೆ ಸೂಚಿಸಿತು.
ಪೀಠ ಹಿಂದಿನ ವಿಚಾರಣೆ ವೇಳೆ, 2022ರ ವೇಳೆಗೆ ಬೆಂಗಳೂರಿನಲ್ಲಿ ಪ್ರತಿದಿನ ಎಷ್ಟು ತ್ಯಾಜ್ಯ ಸಂಗ್ರಹವಾಗುತ್ತದೆ, ಅದನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಲು ಏನೇನು ಕ್ರಮಗಳನ್ನು ಕೈಗೊಳ್ಳುವಿರಿ ಎಂಬ ಬಗ್ಗೆ ವರದಿಯನ್ನು ಸಲ್ಲಿಸುವಂತೆ ಪಾಲಿಕೆಗೆ ಸೂಚಿಸಿತ್ತು. ಆದರೆ ಪಾಲಿಕೆ ಈ ಸಂಬಂಧ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಹೀಗಾಗಿ ಮುಂದಿನ ವಿಚಾರಣೆ ವೇಳೆ 2016ರ ಘನತ್ಯಾಜ್ಯ ನಿರ್ವಹಣೆ ನಿಯಮಗಳನ್ನು ಪಾಲಿಸುತ್ತಿರುವ ಕುರಿತು ವರದಿ ನೀಡುವಂತೆ ತಾಕೀತು ಮಾಡಿದೆ.