ಬೆಂಗಳೂರು: ಉದ್ಯೋಗ ಸ್ಥಳದಲ್ಲಿ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ ಪ್ರಕರಣಗಳನ್ನು ತಡೆಯುವ ಸಲುವಾಗಿ ರಾಜ್ಯದ ಎಲ್ಲ ಶೈಕ್ಷಣಿಕ ಸಂಸ್ಥೆಗಳಲ್ಲಿ ಆಂತರಿಕ ದೂರು ಸಮಿತಿಗಳನ್ನು ಕಡ್ಡಾಯವಾಗಿ ರಚಿಸುವಂತೆ ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ಇತ್ಯರ್ಥ ಪಡಿಸಿ ಆದೇಶಿಸಿದೆ.
ಕ್ರೀಟಂಸ್ ಪ್ರೊ ಬೋನೋ ಮತ್ತು ಸೆಂಟರ್ ಫಾರ್ ಲೀಗಲ್ ರೀಸರ್ಚ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಎಂ.ಜಿ.ಎಸ್.ಕಮಲ್ ಅವರಿದ್ದ ವಿಭಾಗೀಯಪೀಠದ ಅರ್ಜಿಯನ್ನು ಇತ್ಯರ್ಥ ಪಡಿಸಿ ಆದೇಶಿಸಿದೆ. ವಿಚಾರಣೆ ವೇಳೆ ಅರ್ಜಿದಾರರ ವಾದ ಆಲಿಸಿದ ನ್ಯಾಯಪೀಠ, ಉದ್ಯೋಗ ಸ್ಥಳ ಮತ್ತು ಶೈಕ್ಷಣಿಕ ಸಂಸ್ಥೆಗಳಲ್ಲಿ ಆಂತರಿಕ ದೂರು ಸಮಿತಿ ರಚನೆ ಮಾಡುವುದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ನಿರ್ದಿಷ್ಟ ಅವಧಿಯಲ್ಲಿ ಉತ್ತರ ನೀಡುವಂತೆ ಸೂಚಿಸಿದೆ.
ಈ ಹಿನ್ನೆಲೆಯಲ್ಲಿ ಅರ್ಜಿಯನ್ನು ಪುರಸ್ಕರಿಸಲು ಯಾವುದೇ ಕಾರಣಗಳು ಇಲ್ಲವಾಗಿದೆ ಎಂದು ತಿಳಿಸಿತು. ಅಲ್ಲದೆ, ಈ ಸಂಬಂಧ ಈಗಾಗಲೇ ಸುಪ್ರೀಂಕೋರ್ಟ್ ನೀಡಿರುವ ನಿರ್ದೇಶನದ ಪಾಲನೆಗೆ ಸಂಬಂಧಿಸಿದಂತೆ ಎಂಟು ವಾರದಲ್ಲಿ ಅನುಪಾಲನಾ ವರದಿಯನ್ನು ಸಲ್ಲಿಸುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶಿಸಿದೆ. ಹಾಗಾಗಿ ಇಲ್ಲಿ ಅರ್ಜಿಯನ್ನು ಮಾನ್ಯ ಮಾಡಲಾಗದು ಎಂದು ಅಭಿಪ್ರಾಯ ಪಟ್ಟಿರುವ ನ್ಯಾಯಪೀಠ ಅರ್ಜಿ ಇತ್ಯರ್ಥ ಪಡಿಸಿ ಆದೇಶಿಸಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ದುಡಿಯುವ ಸ್ಥಳಗಳಲ್ಲಿ ಮಹಿಳೆಯರ ಮೇಲೆ ಹಾಗೂ ಬಹುತೇಕ ಶಾಲೆಗಳಲ್ಲಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಹಲವು ಲೇಖನಗಳು ಪ್ರಕಟವಾಗುತ್ತಿವೆ. ಜುಲೈ 2014ರಲ್ಲಿ ಸರ್ಕಾರ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಯುವ ಸಂಬಂಧ ಹೊರಡಿಸಿರುವ ಸುತ್ತೋಲೆಯನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವಂತೆ ಶೈಕ್ಷಣಿಕ ಸಂಸ್ಥೆಗಳಿಗೆ ನಿರ್ದೇಶನ ನೀಡಬೇಕು ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದ್ದರು.
ಸರ್ಕಾರದ ಸುತ್ತೋಲೆಯಲ್ಲಿ ಪೊಕ್ಸೊ ಕಾಯಿದೆ ಸೇರಿದಂತೆ ಹಲವು ಕಾಯಿದೆಗಳನ್ನು ಉಲ್ಲೇಖಿಸಲಾಗಿದೆ. ಅಲ್ಲದೇ, ಮಕ್ಕಳ ಮೇಲಿನ ಅಪರಾಧಗಳಿಗೆ ಸಂಬಂಧಿಸಿದಂತೆ ಎಷ್ಟು ಎಚ್ಚರಿಕೆಯಿಂದಿರಬೇಕು ಮತ್ತು ಯಾವ ರೀತಿಯ ಸೂಕ್ಷ್ಮ ಮುನ್ನೆಚ್ಚರಿಕೆ ಕೈಗೊಳ್ಳಬೇಕು, ಶೈಕ್ಷಣಿಕ ಸಂಸ್ಥೆಗಳು ಹಾಗೂ ಪೋಷಕರ ಹೊಣೆಗಾರಿಕೆಗಳನ್ನು ವಿವರಿಸಲಾಗಿದೆ. ಅವುಗಳನ್ನು ಪಾಲನೆ ಮಾಡುವಂತೆ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಪೀಠಕ್ಕೆ ಮನವಿ ಮಾಡಿದ್ದರು.
ಅರ್ಜಿಯಲ್ಲಿ ಏನಿತ್ತು?: ಉದ್ಯೋಗ ಸ್ಥಳದಲ್ಲಿ ಮಹಿಳೆಯರು ಅದರಲ್ಲಿ ಮುಖ್ಯವಾಗಿ ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ಮಕ್ಕಳ ಸುರಕ್ಷತೆ ಮತ್ತು ರಕ್ಷಣಾ ಕ್ರಮಗಳನ್ನು ರಾಜ್ಯ ಸರ್ಕಾರ ಕಡ್ಡಾಯವಾಗಿ ಒದಗಿಸಬೇಕು. ಲೈಂಗಿಕ ಕಿರುಕುಳ ತಪ್ಪಿಸುವುದು ಮತ್ತು ಈ ರೀತಿಯ ಪ್ರಕರಣಗಳನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವುದಕ್ಕಾಗಿ ಕೆಲಸದ ಸ್ಥಳಗಳಲ್ಲಿ ಲೈಂಗಿಕ ಕಿರುಕುಳ ತಡೆಗಟ್ಟುವಿಕೆ ಕಾಯಿದೆಯನ್ನು ಜಾರಿ ಮಾಡಲು ಆಂತರಿಕ ದೂರು ಸಮಿತಿ ರಚನೆ ಮಾಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿತ್ತು.
ಇದನ್ನೂ ಓದಿ: ಪೋಕ್ಸೋ ಕಾಯಿದೆಯ ಸೆಕ್ಷನ್ 19ರ ಕಟ್ಟುನಿಟ್ಟಿನ ಜಾರಿಗೆ ಸರ್ಕಾರಕ್ಕೆ ನಿರ್ದೇಶನ