ಬೆಂಗಳೂರು : ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧದ ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಆರೋಪದಲ್ಲಿ ತನಿಖೆಗೆ ಈ ಹಿಂದೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ಮೂರು ವಾರಗಳ ಕಾಲ ವಿಸ್ತರಿಸಿ ವಿಚಾರಣೆ ಮುಂದೂಡಿದೆ. ರಾಜ್ಯ ಸರ್ಕಾರ ತನ್ನ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಪ್ರಶ್ನಿಸಿ ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಏಕಸದಸ್ಯ ಪೀಠ ವಜಾಗೊಳಿಸಿ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.
ಈ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಎಂ.ಜೆ.ಎಸ್. ಕಮಲ್ ಅವರಿದ್ದ ನ್ಯಾಯಪೀಠ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಸಿಬಿಐ ಪರ ವಕೀಲರು ಹಾಜರಾಗಿ, ವಾದ ಮಂಡಿಸಲು ಕಾಲಾವಕಾಶ ನೀಡಬೇಕು ಎಂದು ಕೋರಿದರು. ಇದನ್ನು ಪುರಸ್ಕರಿಸಿದ ನ್ಯಾಯಪೀಠ, ವಿಚಾರಣೆಯನ್ನು ಮೂರು ವಾರಗಳ ಕಾಲ ಮುಂದೂಡಿತು. ಅಲ್ಲದೇ, ಈ ಹಿಂದೆ ನೀಡಿದ್ದ ಮಧ್ಯಂತರ ತಡೆಯಾಜ್ಞೆ ವಿಸ್ತರಣೆ ಮಾಡಿ ಆದೇಶಿಸಿತು.
ಏಕ ಸದಸ್ಯ ಪೀಠದ ಮುಂದೆ ಸಿಬಿಐ ಪರ ವಾದ ಮಂಡಿಸಿದ ವಕೀಲರಾದ ಪಿ.ಪ್ರಸನ್ನಕುಮಾರ್, 'ಈಗಾಗಲೇ ಡಿ ಕೆ ಶಿವಕುಮಾರ್ ಸಂಬಂಧಿ ಶಶಿಕುಮಾರ್ ಶಿವಣ್ಣ ಅವರು ಸರ್ಕಾರದ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯಪೀಠ ವಜಾಗೊಳಿಸಿತ್ತು. ಅದರ ವಿರುದ್ಧ ಸಲ್ಲಿಸಿದ್ದ ಮೇಲ್ಮನವಿಯನ್ನೂ ಸಹ ವಜಾಗೊಳಿಸಿದೆ. ಹಾಗಾಗಿ ಈ ಅರ್ಜಿ ಮಾನ್ಯ ಮಾಡಬಾರದು' ಎಂದು ಕೋರಿದ್ದರು.
ಸರ್ಕಾರದ ಪರ ವಾದ ಮಂಡಿಸಿದ ಎಸ್‌ಪಿಪಿ ವಿ.ಎಸ್. ಹೆಗಡೆ, 'ಡಿ ಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ಸರ್ಕಾರ ಅನುಮತಿ ನೀಡಿರುವುದು ಸರಿಯಾಗಿದೆ. ಅದರಲ್ಲಿ ವಿವೇಚನೆ ಬಳಸುವ ಅಗತ್ಯವೇನಿಲ್ಲ. ಒಕ್ಕೂಟ ವ್ಯವಸ್ಥೆಯಲ್ಲಿ ಸಿಬಿಐ, ರಾಜ್ಯದಲ್ಲಿನ ಅಪರಾಧದ ಬಗ್ಗೆ ತನಿಖೆಗೆ ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ ಅದಕ್ಕೆ ಅವಕಾಶ ಮಾಡಿಕೊಡಲಾಗಿದೆ. ಅನುಮತಿ ನೀಡಿರುವುದು ಆಡಳಿತಾತ್ಮಕ ಆದೇಶವಲ್ಲ, ಸರಳ ಎಕ್ಸಿಕ್ಯೂಟಿವ್ ಆದೇಶ ಎಂದು ಹೇಳಿದ್ದರು. ಅಲ್ಲದೆ, ಈ ವಿಚಾರದಲ್ಲಿ ಸಹಜ ನ್ಯಾಯ ಪಾಲನೆ ಮಾಡಿಲ್ಲ, ಅನುಮತಿ ನೀಡಿರುವುದಕ್ಕೆ ಕಾರಣಗಳನ್ನು ನೀಡಿಲ್ಲ ಎಂಬ ಅರ್ಜಿದಾರರ ವಾದದಲ್ಲಿ ಹುರುಳಿಲ್ಲ. ಹಾಗಾಗಿ ಅರ್ಜಿ ವಜಾಗೊಳಿಸಬೇಕು' ಎಂದು ನ್ಯಾಯಪೀಠವನ್ನು ಕೋರಿದ್ದರು.
ಅರ್ಜಿದಾರರ ಪರ ವಕೀಲರು, ಸರ್ಕಾರ ಅನುಮತಿ ನೀಡುವಾಗ ಸಹಜ ನ್ಯಾಯ ಪಾಲನೆ ಮಾಡಿಲ್ಲ. ಅನುಮತಿ ಆದೇಶದಲ್ಲಿ ಕಾರಣಗಳನ್ನು ತಿಳಿಸಿಲ್ಲ. ಇದು ನಿಯಮ ಬಾಹಿರ ಕ್ರಮ. ಅರ್ಜಿದಾರರು ಹಲವು ಪ್ರಕರಣಗಳಲ್ಲಿ ಖುಲಾಸೆಯಾಗಿದ್ದಾರೆ. ಹಾಗಾಗಿ ಅವರ ಮೇಲಿನ ದ್ವೇಷದಿಂದಾಗಿ ಸಿಬಿಐ ತನಿಖೆಗೆ ಅನುಮತಿ ನೀಡಲಾಗಿದೆ. ಹಾಗಾಗಿ ಸರಕಾರದ ಅನುಮತಿ ಆದೇಶವನ್ನು ರದ್ದುಗೊಳಿಸಬೇಕು ಎಂದು ಮನವಿ ಮಾಡಿದ್ದರು.
ಪ್ರಕರಣದ ಹಿನ್ನೆಲೆ : 2019ರ ಸೆ.25ರಂದು ಸಿಬಿಐ ತನಿಖೆಗೆ ಅನುಮತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಅದರಂತೆ ಭ್ರಷ್ಟಾಚಾರ ನಿಗ್ರಹ ಕಾಯಿದೆ 1988ರ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಸಿಬಿಐ 2020ರ ಅ.3ರಂದು ಡಿ ಕೆ ಶಿವಕುಮಾರ್ ವಿರುದ್ಧ ಪ್ರಕರಣ ದಾಖಲಿಸಿತ್ತು. ಸಿಬಿಐ ದಾಖಲಿಸಿರುವ ಈ ಎಫ್‌ಐಆರ್ ಕಾನೂನು ಬಾಹಿರವಾಗಿದ್ದು, ತನಿಖೆ ರದ್ದುಪಡಿಸಬೇಕೆಂದು ಕೋರಿ ಶಿವಕುಮಾರ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಸಿಬಿಐ ತನಿಖೆಗೆ 2023ರ ಫೆ. 10ರಂದು ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿತ್ತು. ಇದೇ ವೇಳೆ ಡಿಕೆ ಶಿವಕುಮಾರ್, ಸರ್ಕಾರದ ಅನುಮತಿ ಆದೇಶ ರದ್ದು ಕೋರಿ ಮತ್ತೊಂದು ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಏಕ ಸದಸ್ಯ ಪೀಠ, ಅರ್ಜಿಯ ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು.
ಇದನ್ನೂ ಓದಿ: ವಿವಿ ಸೂಚಿಸಿದ ದಿನಾಂಕ ಮುಗಿದ ಬಳಿಕವೂ ವಿದ್ಯಾರ್ಥಿಗೆ ಅಡ್ಮಿಷನ್: ಕಾಲೇಜಿಗೆ ₹5 ಲಕ್ಷ ದಂಡ