ಬೆಂಗಳೂರು: ರಾಜದಾನಿ ಬೆಂಗಳೂರು ನಗರವನ್ನು ನಿರ್ವಹಣೆ ಮಾಡುವುದಕ್ಕಾಗಿ ಪರಂಪರೆ ಸಂರಕ್ಷಣಾ ಸಮಿತಿ, ಮಹಾನಗರ ಯೋಜನಾ ಸಮಿತಿ ಮತ್ತು ಕುಂದುಕೊರತೆಗಳ ಪರಿಹಾರ ಪ್ರಾಧಿಕಾರ ರಚನೆ ಮಾಡುವಂತೆ ಕೋರಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಸಂಬಂಧ ಹೈಕೋರ್ಟ್ ರಾಜ್ಯ ಸರ್ಕಾರ ಮತ್ತು ಬಿಬಿಎಂಪಿಗೆ ನೋಟಿಸ್ ಜಾರಿ ಮಾಡಿ ಆದೇಶಿಸಿದೆ. ಈ ಸಂಬಂಧ ವಕೀಲ ಎಸ್. ಉಮಾಪತಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಎಂ.ಜೆ.ಎಸ್ ಕಮಲ್ ಅವರಿದ್ದ ವಿಭಾಗೀಯ ಪೀಠ ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿತು.
ವಿಚಾರಣೆ ಸಂದರ್ಭದಲ್ಲಿ ಅರ್ಜಿದಾರರೂ ಆಗಿರುವ ವಕೀಲ ಉಮಾಪತಿ ವಾದ ಮಂಡಿಸಿ, ಬೆಂಗಳೂರು ಅಭಿವೃದ್ಧಿಯಾಗುತ್ತಿದ್ದು, ಕಾಯಿದೆಯಲ್ಲಿ ಉಲ್ಲೇಖಿಸಿರುವ ಮೂರು ಸಮಿತಿಗಳು ನಗರದ ಸಮಗ್ರ ಅಭಿವೃದ್ಧಿಗೆ ಅತ್ಯಗತ್ಯ. ಅಲ್ಲದೆ, ಬಿಬಿಎಂಪಿ ಅಧಿಕಾರಿಗಳಿಗೆ ಯೋಜನೆ ರೂಪಿಸುವ ಸಂಬಂಧ ಯಾವುದೇ ಜ್ಞಾನ ಇಲ್ಲ. ಇದಕ್ಕಾಗಿ ತಜ್ಞರ ನೇತೃತ್ವದಲ್ಲಿ ಪ್ರತ್ಯೇಕ ಸಮಿತಿಗಳು ಬೇಕಾಗಿದೆ. ಆದರೆ, ಸರ್ಕಾರ ಈವರೆಗೂ ಇವುಗಳ ಅನುಷ್ಟಾನ ಕ್ರಮಕ್ಕೆ ಮುಂದಾಗಿಲ್ಲ ಎಂದು ವಿವರಿಸಿದರು.
ಈ ಸಂಬಂಧ ಸರ್ಕಾರಕ್ಕೆ ಮನವಿ ಮಾಡಲಾಗಿದಿಯೇ ಎಂದು ಪೀಠ ಪ್ರಶ್ನಿಸಿತು. ಇದಕ್ಕೆ ಪ್ರತಿಕ್ರಿಯಿಸಿದ ವಕೀಲರು, ಈಗಾಗಲೇ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದ್ದು, ನ್ಯಾಯಾಲಯದ ನಿರ್ದೇಶನ ನೀಡದೆ ಅಧಿಕಾರಿಗಳು ನಿದ್ದೆಯಿಂದ ಎದ್ದೇಳುವುದಿಲ್ಲ. ಯಾವುದೇ ಕ್ರಮಕ್ಕೂ ಮುಂದಾಗುವುದಿಲ್ಲ. ಹೀಗಾಗಿ ಸಮಿತಿಗಳ ರಚನೆ ಮಾಡುವಂತೆ ನಿರ್ದೇಶನ ನೀಡಬೇಕು ಎಂದು ಕೋರಿದರು.
ಸಮಿತಿಗಳನ್ನು ರಚನೆ ಮಾಡದ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಅವ್ಯವಸ್ಥಿತವಾಗಿ ಬೆಳವಣಿಗೆಯಾಗುತ್ತಿದ್ದು, ಸಂಚಾರ ಸಮಸ್ಯೆಗಳು, ಕುಡಿಯುವ ನೀರಿನ ಕೊರತೆ, ಪಾರಂಪರಿಕ ಕಟ್ಟಡಗಳ ರಕ್ಷಣೆ ಸಾಧ್ಯವಾಗದಂತಹ ಪರಿಸ್ಥಿತಿ ಎದುರಾಗುತ್ತಿವೆ. ಸಾರ್ವಜನಿಕರ ಕುಂದುಕೊರತೆ ನಿವಾರಣಾ ಪ್ರಾಧಿಕಾರ ರಚನೆಯಾಗದ ಹಿನ್ನೆಲೆಯಲ್ಲಿ, ಪಾಲಿಕೆಯ ಆಡಳಿತದಲ್ಲಿನ ದುರಾಡಳಿತ ಮತ್ತು ನಾಗರೀಕರ ಸಮಸ್ಯೆಗಳ ಪರಿಹಾರ ಕಂಡುಕೊಳ್ಳುಲು ಸಾಧ್ಯವಾಗುತ್ತಿಲ್ಲ ಎಂದು ನ್ಯಾಯಪೀಠಕ್ಕೆ ವಿವರಿಸಿದರು. ವಾದ ಆಲಿಸಿದ ಪೀಠ, ಸಕಾರಕ್ಕೆ ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿತು. ಅಲ್ಲದೆ, ಬಿಬಿಎಂಪಿ ಕಾಯಿದೆ 2020ರ ಪ್ರಕಾರ ಬೆಂಗಳೂರು ನಗರದಲ್ಲಿ ಸೂಕ್ತ ರೀತಿಯ ಆಡಳಿತ ನಿರ್ವಹಣೆ ಮಾಡುವುದಕ್ಕಾಗಿ ಈ ಸಮಿತಿಗಳು ಅತ್ಯಗತ್ಯವಾಗಿವೆ. ಈ ಸಂಬಂಧ ರಾಜ್ಯ ಸರ್ಕಾರ ಮತ್ತು ಬಿಬಿಎಂಪಿಗೆ ಮನವಿ ಮಾಡಿ ಈ ಸಮಿತಿಗಳ ಪ್ರಾಮುಖ್ಯತೆಯನ್ನು ವಿವರಿಸಿದ್ದೇವೆ ಎಂದು ಅರ್ಜಿಯಲ್ಲಿ ಕೋರಲಾಗಿದೆ.
ಇದನ್ನೂ ಓದಿ: ಪೊಲೀಸ್ ದೂರು ಪ್ರಾಧಿಕಾರಕ್ಕೆ ಅಧ್ಯಕ್ಷ, ಸದಸ್ಯರ ನೇಮಕ: ಕ್ರಮ ಕೂಗೊಳ್ಳಲು 3 ವಾರ ಕಾಲಾವಕಾಶ ನೀಡಿದ ಹೈಕೋರ್ಟ್