ಬೆಂಗಳೂರು: ಕೇರಳದಿಂದ ರಾಜ್ಯಕ್ಕೆ ಬರುವ ಜನರು 72 ಗಂಟೆಗಳ ಒಳಗೆ ಮಾಡಿರುವ ಆರ್‌ಟಿ-ಪಿಸಿಆರ್ ಪರೀಕ್ಷೆಯ ನೆಗೆಟಿವ್ ವರದಿ ತರುವುದನ್ನು ಕಡ್ಡಾಯಗೊಳಿಸಿ ಹೊರಡಿಸಿರುವ ಸುತ್ತೋಲೆಯನ್ನು ಸಮರ್ಪಕವಾಗಿ ಜಾರಿ ಮಾಡುವಂತೆ ಹೈಕೋರ್ಟ್ ಸರ್ಕಾರಕ್ಕೆ ಆದೇಶಿಸಿದೆ.
ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಮತ್ತು ಕೇರಳ ರಾಜ್ಯಗಳಿಂದ ಬರುವ ಜನರಿಗೆ ಆರ್‌ಟಿ-ಪಿಸಿಆರ್ ಪರೀಕ್ಷೆಯ ನೆಗೆಟಿವ್ ವರದಿ ಕಡ್ಡಾಯ ಮಾಡಿ 2021ರ ಜುಲೈ 31ರಂದು ಸರ್ಕಾರ ಸುತ್ತೋಲೆ ಹೊರಡಿಸಿದೆ. ಈ ಸುತ್ತೋಲೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿಲ್ಲ ಎಂದು ಆರೋಪಿಸಿ ದಕ್ಷಿಣ ಕನ್ನಡ ಜಿಲ್ಲೆಯ ಶುಶ್ರೂಷಕಿ ಗೀತಾ ಹಾಗೂ ವಿದ್ಯಾರ್ಥಿ ಮೋಕ್ಷಿತ್ ಎಂಬವರು ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಎಸ್ ದಿನೇಶ್ ಕುಮಾರ್ ಅವರಿದ್ದ ಪೀಠ, ಸುತ್ತೋಲೆಯಲ್ಲಿ ತಿಳಿಸಿರುವಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಸರ್ಕಾರ, ದಕ್ಷಿಣ ಕನ್ನಡ, ಮೈಸೂರು, ಚಾಮರಾಜನಗರ ಹಾಗೂ ಕೊಡಗು ಜಿಲ್ಲಾಡಳಿತಗಳಿಗೆ ಆದೇಶಿಸಿದೆ.
ಇದನ್ನೂ ಓದಿ : ವಕ್ಫ್ ಆಸ್ತಿ ಒತ್ತುವರಿ : ತೆರವಿಗೆ ಕೈಗೊಂಡಿರುವ ಕ್ರಮಗಳ ವರದಿ ಕೇಳಿದ ಹೈಕೋರ್ಟ್
ಪ್ರಕರಣದ ಹಿನ್ನೆಲೆ:
ರಾಜ್ಯ ಸರ್ಕಾರವು ಜುಲೈ 31ರಂದು ಹೊರಡಿಸಿರುವ ಸುತ್ತೋಲೆಯಂತೆ ಕೇರಳದಿಂದ ಕರ್ನಾಟಕಕ್ಕೆ ಬರುವ ಜನ 72 ಗಂಟೆಗಳ ಒಳಗೆ ಮಾಡಿರುವ ಆರ್‌ಟಿಪಿಸಿಆರ್ ಪರೀಕ್ಷೆಯ ನೆಗೆಟಿವ್ ವರದಿ ತರುವುದು ಕಡ್ಡಾಯ. ಈ ಸುತ್ತೋಲೆ ಅನುಸಾರ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕೇರಳ ಗಡಿಭಾಗದಲ್ಲಿ ಚೆಕ್ ಪೋಸ್ಟ್ ತೆರೆಯಲಾಗಿದೆ ಮತ್ತು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಆದರೆ, ಆ ಚೆಕ್ ಪೋಸ್ಟ್‌ಗಳಲ್ಲಿ ಕೇರಳದಿಂದ ಬರುವ ಜನರು ಆರ್‌ಟಿ-ಪಿಸಿಆರ್ ಪರೀಕ್ಷೆ ನೆಗೆಟಿವ್ ವರದಿಯನ್ನು ತರುವುದನ್ನು ಸೂಕ್ತವಾಗಿ ಪರಿಶೀಲನೆ ನಡೆಸಲಾಗುತ್ತಿಲ್ಲ. ಇದರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನ ಸೋಂಕಿನ ಪ್ರಕರಣಗಳು ಹೆಚ್ಚುತ್ತಿವೆ. ವಿಶೇಷ ನಿಗಾ ಕ್ರಮಗಳನ್ನು ಕೊಡಗು, ಮೈಸೂರು ಮತ್ತು ಚಾಮರಾಜನಗರ ಜಿಲ್ಲಾಡಳಿಗಳು ಸಮರ್ಪಕವಾಗಿ ಅನುಷ್ಠಾನಕ್ಕೆ ತರುತ್ತಿಲ್ಲ ಎಂದು ಅರ್ಜಿದಾರರು ಆರೋಪಿಸಿದ್ದರು.