ಬೆಂಗಳೂರು: ಸಾರ್ವಜನಿಕ ಸ್ಥಳ ಹಾಗೂ ಧಾರ್ಮಿಕ ಕೇಂದ್ರಗಳಲ್ಲಿ ಧ್ವನಿವರ್ಧಕಗಳನ್ನು ಬಳಕೆ ಮಾಡಿ ಶಬ್ಧ ಮಾಲಿನ್ಯ ಉಂಟು ಮಾಡುತ್ತಿರುವವರ ವಿರುದ್ಧ ಸುಪ್ರೀಂಕೋರ್ಟ್ ಮಾರ್ಗಸೂಚಿಗಳನ್ವಯ ಕ್ರಮ ಕೈಗೊಳ್ಳಲು ಪೊಲೀಸರು ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನಗಳನ್ನು ನೀಡುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.
ರಾಜ್ಯದಲ್ಲಿ ಹೆಚ್ಚುತ್ತಿರುವ ಶಬ್ಧ ಮಾಲಿನ್ಯ ನಿಯಂತ್ರಣ ಕೋರಿ ನಗರದ ಗಿರೀಶ್ ಭಾರದ್ವಾಜ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಕೆಲ ಕಾಲ ಅರ್ಜಿದಾರರ ಪರ ವಕೀಲ ಬಿ.ಎನ್ ಜಗದೀಶ್ ಅವರ ವಾದ ಆಲಿಸಿದ ಪೀಠ, ರಾಜ್ಯ ಸರ್ಕಾರ ಸುಪ್ರೀಂ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಪೊಲೀಸರು ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನಗಳನ್ನು ನೀಡಿ ಮೂರು ವಾರಗಳಲ್ಲಿ ಆದೇಶ ಹೊರಡಿಸುವಂತೆ ನಿರ್ದೇಶಿಸಿ, ವಿಚಾರಣೆಯನ್ನು ಫೆ.8 ಕ್ಕೆ ಮುಂದೂಡಿತು.
ಓದಿ : 'ಕೃಷ್ಣ ದೇವಾಲಯದ ಬಳಿ ಇರುವ ಮಸೀದಿ ತೆರವುಗೊಳಿಸಬೇಕು'.. ವಿಚಾರಣೆ ಮುಂದೂಡಿಕೆ
ಅರ್ಜಿದಾರರ ಕೋರಿಕೆ - ಸಾರ್ವಜನಿಕ ಹಾಗೂ ಧಾರ್ಮಿಕ ಸ್ಥಳಗಳಲ್ಲಿ ಬಳಸಲಾಗುವ ಧ್ವನಿವರ್ಧಕಗಳಿಂದ ಹೊರ ಬರುವ ಅತಿಯಾದ ಶಬ್ದ ಮಾಲಿನ್ಯ ಉಂಟು ಮಾಡುತ್ತಿದೆ. ಅಲ್ಲದೇ, ಆರೋಗ್ಯ ಸಮಸ್ಯೆಗಳಿಗೂ ಕಾರಣವಾಗುತ್ತಿದೆ. ರಾಜ್ಯಾದ್ಯಂತ ಧಾರ್ಮಿಕ ಸ್ಥಳಗಳಲ್ಲಿ, ರಾಜಕೀಯ ಪ್ರಚಾರಸಭೆಗಳು ಹಾಗೂ ರ‍್ಯಾಲಿ ಗಳಲ್ಲಿ ಪರವಾನಗಿ ಇಲ್ಲದೇ ಧ್ವನಿವರ್ಧಕಗಳನ್ನು ಬಳಸುತ್ತಿದ್ದರೂ, ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಹೀಗಾಗಿ, ಶಬ್ಧ ಮಾಲಿನ್ಯ ನಿಯಂತ್ರಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು ಹಾಗೂ ಸುಪ್ರೀಂಕೋರ್ಟ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ನಿರ್ದೇಶಿಸಬೇಕು ಎಂದು ಕೋರಿದ್ದಾರೆ.