ಬೆಂಗಳೂರು: ಯಲಹಂಕ ಶಾಸಕ ಎಸ್ ಆರ್ ವಿಶ್ವನಾಥ್ ಅವರನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದ ಸರ್ಕಾರದ ಆದೇಶವನ್ನು ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ.
ಬಿಡಿಎಗೆ ಅಧ್ಯಕ್ಷರು ಮತ್ತು ಸದಸ್ಯರ ನೇಮಕಕ್ಕೆ ಸಂಬಂಧಿಸಿದಂತೆ ನಿಯಮಗಳನ್ನು ರೂಪಿಸುವಂತೆ ನ್ಯಾಯಾಲಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಬಿಡಿಎ ಅಧ್ಯಕ್ಷರಂತಹ ಲಾಭದಾಯಕ ಹುದ್ದೆಯಲ್ಲಿರುವ ಎಸ್ ಆರ್ ವಿಶ್ವನಾಥ್ ಅವರನ್ನು ಶಾಸಕ ಸ್ಥಾನ ಇಲ್ಲವೇ ಬಿಡಿಎ ಅಧ್ಯಕ್ಷ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಕೋರಿ ಬೆಂಗಳೂರಿನ ವಕೀಲ ಹರೀಶ್ ಎಂಬುವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯನ್ಯಾಯಮೂರ್ತಿ ಆಲೋಕ್ ಆರಾಧೆ ಅವರ ನೇತೃತ್ವದ ವಿಭಾಗೀಯ ಪೀಠ ಆ. 24 ರಂದು ತೀರ್ಪು ಕಾಯ್ದಿರಿಸಿದ್ದು, ಶನಿವಾರ ಪ್ರಕಟಸಿದೆ.
ಪ್ರಕರಣ ಸಂಬಂಧ ಅರ್ಜಿದಾರರು ನೀಡಿರುವ ಮನವಿ ರಾಜ್ಯಪಾಲರ ಪರಿಶೀಲನೆಯಲ್ಲಿದೆ. ಈ ಸಂದರ್ಭದಲ್ಲಿ ರಾಜ್ಯಪಾಲರ ಕಚೇರಿಗೆ ನಿರ್ದೇಶನ ನೀಡುವುಕ್ಕೆ ಅವಕಾಶವಿಲ್ಲ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದ್ದು, ಈ ಸಂಬಂಧ ಸಲ್ಲಿಕೆಯಾಗಿದ್ದ ಅರ್ಜಿಯನ್ನು ವಜಾಗೊಳಿಸಿದೆ.
2018ರ ವಿಧಾನಸಭಾ ಚುನಾವಣೆಯಲ್ಲಿ ಬೆಂಗಳೂರಿನ ಯಲಹಂಕ ಕ್ಷೇತ್ರದಿಂದ ಎಸ್ ಆರ್ ವಿಶ್ವನಾಥ್ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಸಂವಿಧಾನದ ಪರಿಚ್ಛೇದ 191(1)(ಎ) ಪ್ರಕಾರ ಸಂಸದರೂ ಹಾಗೂ ಶಾಸಕರು ಕೇಂದ್ರ ಮತ್ತು ರಾಜ್ಯ ಸರ್ಕಾರದಲ್ಲಿ ಯಾವುದೇ ಲಾಭದಾಯಕ ಹುದ್ದೆ ಅಲಂಕರಿಸುವಂತಿಲ್ಲ. ಒಂದು ಅಂತಹ ಹುದ್ದೆ ಹೊಂದಿದ್ದಲ್ಲಿ ಶಾಸಕ ಅಥವಾ ಸಂಸದರ ಸ್ಥಾನದಿಂದ ಅನರ್ಹವಾಗಲಿದ್ದಾರೆ ಎಂಬುದಾಗಿ ತಿಳಿಸಲಾಗಿದೆ.
ಆದರೆ, ವಿಶ್ವನಾಥ್ ಅವರು ಶಾಸಕ ಮತ್ತು ಬಿಡಿಎ ಅಧ್ಯಕ್ಷ ಸ್ಥಾನ ಸೇರಿ ಎರಡು ಹುದ್ದೆಗಳಿಗೆ ವೇತನ ಪಡೆಯುತ್ತಿದ್ದಾರೆ. ಹೀಗಾಗಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿತ್ತು.
ಇದನ್ನೂ ಓದಿ: ಬಿಡಿಎ ಬದಲಿ ನಿವೇಶನ ಪಡೆಯಲು ಯಾವುದೇ ಪ್ರಭಾವ ಬಳಸಿಲ್ಲ : ಆರಗ ಜ್ಞಾನೇಂದ್ರ ಸ್ಪಷ್ಟನೆ