ಬೆಂಗಳೂರು: ಪಕ್ಷ ಸಂಘಟನೆಯಲ್ಲಿ ತೊಡಗಿರುವ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಮಂಡ್ಯ ಜಿಲ್ಲೆಯ ಮುಖಂಡರ ಸಭೆಯನ್ನು ಬೆಂಗಳೂರಿನಲ್ಲಿ ನಡೆಸಿದ್ದಾರೆ.
ಪಕ್ಷದ ಕಚೇರಿ ಜೆಪಿ ಭವನದಲ್ಲಿ ನಿನ್ನೆ ನಡೆದ ಸಭೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ. ಕುಮಾರಸ್ವಾಮಿ, ಮಾಜಿ ಸಚಿವ ಸಿ.ಎಸ್. ಪುಟ್ಟರಾಜು, ಶಾಸಕ ಅನ್ನದಾನಿ, ವಿಧಾನ ಪರಿಷತ್ ಸದಸ್ಯರಾದ ಅಪ್ಪಾಜಿಗೌಡ, ಶ್ರೀಕಂಠೇಗೌಡ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಮೇಶ್ ಬಾಬು, ಮಂಡ್ಯ ಜಿಲ್ಲಾಧ್ಯಕ್ಷರು ಸೇರಿದಂತೆ ಹಲವರು ನಾಯಕರು ಭಾಗವಹಿಸಿದ್ದರು.
ಸಭೆಯಲ್ಲಿ ಹಲವಾರು ಮುಖಂಡರು ತಮ್ಮ ಅಸಮಾಧಾನ ಹೊರಹಾಕಿದರು. ಎಲ್ಲಕ್ಕಿಂತ ಮುಖ್ಯವಾಗಿ ಕೆ.ಆರ್.ಪೇಟೆ ಕ್ಷೇತ್ರದ ಕುರಿತು ಹೆಚ್ಚು ಚರ್ಚೆ ನಡೆಯಿತು. ಲೋಕಸಭಾ ಚುನಾವಣೆಯಲ್ಲಿ ಆದ ಘಟನಾವಳಿಗಳ ಬಗ್ಗೆ ಮಂಡ್ಯ ಜಿಲ್ಲೆಯ ಮುಖಂಡರು ದೇವೇಗೌಡರ ಬಳಿ ವಿವರಿಸಿದರು.
ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡಬೇಕು. ಮುಖ್ಯವಾಗಿ ಕೆ.ಆರ್.ಪೇಟೆ ಕ್ಷೇತ್ರದ ಉಪ ಚುನಾವಣೆ ಬರಲಿದ್ದು, ಅದರ ಬಗ್ಗೆ ಗಮನಹರಿಸುವಂತೆ ದೇವೇಗೌಡರು ಮನವಿ ಮಾಡಿದರು.