ಬೆಂಗಳೂರು: ರಾಜ್ಯದಲ್ಲಿ ವರುಣನ ಆರ್ಭಟ ಮುಂದುವರೆಯಲಿದ್ದು, ಮುಂದಿನ ವಾರವೂ ಉತ್ತರ ಕರ್ನಾಟಕ ಭಾಗದಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಹೀಗಾಗಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕರು ತಿಳಿಸಿದ್ದಾರೆ.
ಈ ಕುರಿತು ಇಂದು ಮಾಹಿತಿ ನೀಡಿರುವ ಅವರು, ಪೂರ್ವ ಬಂಗಾಳ ಉಪ ಸಾಗರದಲ್ಲಿ ಅಕ್ಟೋಬರ್ 19ರಂದು ವಾಯುಭಾರ ಕುಸಿತವಾಗುವ ಸಾಧ್ಯತೆಯಿದೆ. ಇದರ ಪರಿಣಾಮ, ಕರಾವಳಿ ಭಾಗಗಳಲ್ಲಿ ಹೆಚ್ಚಿನ ಮಳೆಯಾಗಲಿದೆ. ಅ. 19ರಂದು ಅಲ್ಲಲ್ಲಿ ಮಳೆಯಾಗಲಿದ್ದು, ಅ.21-22 ರಂದು ಬಹುತೇಕ ಎಲ್ಲಾ ಕಡೆ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನಲ್ಲಿ ಅಕ್ಟೋಬರ್ 19-22ರ ವರೆಗೆ ಎಲ್ಲಾ ಸ್ಥಳಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಉತ್ತರಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಅ.20ರಂದು ಯೆಲ್ಲೋ ಅಲರ್ಟ್ ಮತ್ತು ಅ. 21-22ರಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದರು.
ಉತ್ತರ ಒಳನಾಡಿನಲ್ಲಿ ಕೂಡ 21-22ರಂದು ವ್ಯಾಪಕ ಮಳೆಯಾಗುವ ಹೆಚ್ಚಿನ ಸಾಧ್ಯತೆಗಗಳಿವೆ. ಗದಗ, ಕೊಪ್ಪಳ, ಬಾಗಲಕೋಟೆ, ಯಾದಗಿರಿ, ರಾಯಚೂರು ಭಾಗಗಳಲ್ಲಿ ಅ. 19-20ರಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಕರ್ನಾಟಕದ ಬಹುತೇಕ ಎಲ್ಲಾ ಪ್ರದೇಶದಲ್ಲಿ ವ್ಯಾಪಕ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ ಎಸ್ ಪಾಟೀಲ್ ವಿವರಿಸಿದರು.
ಮಲೆನಾಡಿನ ಭಾಗಗಳಾದ ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಕೊಡಗು, ಹಾಸನದಲ್ಲಿ ಭಾರಿ ಮಳೆಯಾಗಲಿದ್ದು ಅ.20-22ರವರೆಗೆ ಯೆಲ್ಲೋ ಆಲರ್ಟ್ ಘೋಷಣೆ ಮಾಡಲಾಗಿದೆ. ಇತ್ತ ಬೆಂಗಳೂರಿನಲ್ಲಿ ಅಕ್ಟೋಬರ್ 18-19 ರಂದು ಹಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂಬ ಮಾಹಿತಿ ನೀಡಿದರು.