ಬೆಂಗಳೂರು: ರಾಜಧಾನಿಯಲ್ಲಿ ಬೆಳ್ಳಂಬೆಳಗ್ಗೆಯೇ ಮಳೆ ಶುರುವಾಗಿ ಸಾಕಷ್ಟು ಅವಾಂತರ ಸೃಷ್ಟಿಸಿತು. ಬೆಳಗ್ಗೆ 6 ರಿಂದ 10 ಗಂಟೆ ವರೆಗೆ ವರ್ಷಧಾರೆಯಾಗಿದ್ದು, ಕಚೇರಿಗಳಿಗೆ ತೆರಳಲು ವಾಹನ ಸವಾರರು ಸಾಕಷ್ಟು ಪರದಾಡುವಂತಾಯಿತು.
ಸಾರ್ವಜನಿಕರು ಹಾಗೂ ವ್ಯಾಪಾರಸ್ಥರು ಮಳೆಯಿಂದ ಪರದಾಡಿದರು. ವಾಹನ ಸವಾರರ ಸ್ಥಿತಿಯಂತೂ ಹೇಳತೀರದಾಗಿತ್ತು. ನಗರದ ಪ್ರಮುಖ ಸ್ಥಳಗಳಾದ ಮೆಜೆಸ್ಟಿಕ್, ಶಿವಾನಂದ ಸರ್ಕಲ್, ಕಾರ್ಪೊರೇಷನ್, ಕೆ.ಆರ್ ಮಾರುಕಟ್ಟೆಯಲ್ಲಿ ಮಳೆ ಸುರಿದು ಜನ ಜೀವನ ಅಸ್ತವ್ಯಸ್ತಗೊಂಡಿತು.
ಹವಾಮಾನದ ಸ್ಥಿತಿಗತಿ:
ರಾಜ್ಯದ ಹಲವೆಡೆ ಮಳೆಯ ಆರ್ಭಟ ಜೋರಾಗಿದ್ದು, ಕರ್ನಾಟಕದಲ್ಲಿ ಇನ್ನೂ ನಾಲ್ಕು ದಿನ ಭಾರಿ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ಈಗಾಗಲೇ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ, ಭಾರಿ ಮಳೆಯಾಗುವ ಸಂಭವವಿದೆ. ಬೆಂಗಳೂರು, ಹಾಸನ, ಕೊಡಗು, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಸೇರಿ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಯೆಲ್ಲೋ ಅಲರ್ಟ್ ಘೋಷಣೆಯಾಗಿದೆ.