ಬೆಂಗಳೂರು: ಸಿಲಿಕಾನ್ ಸಿಟಿಯ ಕೆಲ ಪ್ರದೇಶಗಳಲ್ಲಿ ವಿಪರೀತ ಚಳಿಯೊಂದಿಗೆ ಇಂದು ಮಧ್ಯಾಹ್ನ ಧಾರಾಕಾರ ಮಳೆ ಸುರಿಯಲು ಪ್ರಾರಂಭಗೊಂಡಿದ್ದು, ಇನ್ನೂ ನಾಲ್ಕು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕಾರ್ಪೊರೇಷನ್ ಸರ್ಕಲ್, ಜಯನಗರ, ಶಾಂತಿನಗರ, ಮೆಜೆಸ್ಟಿಕ್, ಗಾಂಧಿನಗರ, ಕೆ.ಆರ್. ಮಾರುಕಟ್ಟೆ ಸೇರಿದಂತೆ ಇನ್ನಿತರ ಪ್ರದೇಶಗಳಲ್ಲಿ ಮಳೆಯಾಗುತ್ತಿರುವ ಪರಿಣಾಮ ವಾಹನ ಸವಾರರು ಪರದಾಡುವಂತಾಗಿದೆ. ಇನ್ನುಳಿದ ಭಾಗಗಳಲ್ಲಿ ತೀವ್ರ ಮೋಡ ಕವಿದ ವಾತಾವರಣ ಉಂಟಾಗಿದ್ದು, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆಗಳು ಇದೆ ಎನ್ನಲಾಗಿದೆ.
ದಕ್ಷಿಣ ಒಳನಾಡು ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲೂ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಪೂರ್ವದಿಂದ ಪಶ್ಚಿಮದೆಡೆಗೆ ಬೀಸುತ್ತಿರುವ ಗಾಳಿ ಮೂಲಕ ತೇವಾಂಶ ಹೆಚ್ಚಾಗಿ ಮಳೆಯಾಗುತ್ತಿದೆ ಎಂದು ಇಲಾಖೆ ಸ್ಪಷ್ಟಪಡಿಸಿದೆ.