ಬೆಂಗಳೂರು: ನೆರೆಯಿಂದಾಗಿ ಸಂಕಷ್ಟದಲ್ಲಿರುವ ಜನರ ನೆರವಿಗೆ ಧಾವಿಸುವಂತೆ ಜಿಲ್ಲಾಡಳಿತಕ್ಕೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದ್ದು, ಪರಿಹಾರ ಕಾರ್ಯಗಳಿಗೆ ತೊಂದರೆಯಾಗದಂತೆ ಎಚ್ಚರವಹಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
ರಾಜ್ಯದಲ್ಲಿ ಅತಿವೃಷ್ಟಿ ಮತ್ತು ಪ್ರವಾಹ ಪರಿಸ್ಥಿತಿ ಹೆಚ್ಚುತಲೇ ಇರುವುದರಿಂದ ದೆಹಲಿ ಕಾರ್ಯಕ್ರಮಗಳನ್ನು ಕೈಬಿಟ್ಟು ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತಿದ್ದೇನೆ. ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಪರಿಸ್ಥಿತಿಗಳನ್ನು ಅವಲೋಕಿಸಿ, ಸಂತ್ರಸ್ತ ಜನರಿಗೆ ರಾಜ್ಯಸರ್ಕಾರದ ನೆರವು ಮತ್ತು ಪರಿಹಾರ ಕಾರ್ಯಗಳ ಉಸ್ತುವಾರಿ ವಹಿಸಿದ್ದೇನೆ. ಎಲ್ಲ ಪರಿಸ್ಥಿತಿಗಳನ್ನು ಎದುರಿಸಲು ಆಡಳಿತಯಂತ್ರ ಸನ್ನದ್ಧವಾಗಿದ್ದು, ಈಗಾಗಲೇ ಮುನ್ನೆಚ್ಚರಿಕೆ ಹಾಗೂ ಪರಿಹಾರ ಕಾರ್ಯಗಳಲ್ಲಿ ರಾಜ್ಯಸರ್ಕಾರ ಸಮರೋಪಾದಿಯಲ್ಲಿ ತೊಡಗಿದೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.
ಜನರಲ್ಲಿ ಮತ್ತು ವಿಶೇಷವಾಗಿ ರೈತಬಂಧುಗಳಲ್ಲಿ ನನ್ನ ವಿನಂತಿಯೆಂದರೆ, ರಾಜ್ಯ ಸರ್ಕಾರ ಅಗತ್ಯ ನೆರವು, ಪರಿಹಾರ ಕಾರ್ಯಗಳಲ್ಲಿ ಏನೂ ಲೋಪವಾಗದಂತೆ ಕ್ರಮ ಕೈಗೊಳ್ಳುತ್ತಿದೆ. ಈಗಾಗಲೇ ನಾನು ಪ್ರಧಾನಮಂತ್ರಿಗಳನ್ನು, ಕೇಂದ್ರ ಸಚಿವರನ್ನು ಭೇಟಿ ಮಾಡಿ ಪರಿಸ್ಥಿತಿ ವಿವರಿಸಿದ್ದೇನೆ. ಪರಿಹಾರ ಕಾರ್ಯಗಳಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ಸಹಕಾರ ನೀಡುತ್ತಿದೆ ಎಂದಿದ್ದಾರೆ.
ಸಿಇಟಿ ಶುಲ್ಕ ಪಾವತಿಸಲು ಗಡುವು ವಿಸ್ತರಣೆ
ಸಿಇಟಿ ಮೂರನೇ ಸುತ್ತಿನಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಸಲು ನೀಡಲಾಗಿದ್ದ ಗಡುವು ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಶುಲ್ಕ ಪಾವತಿಗೆ ಇಂದು ಕೊನೆಯ ದಿನವಾಗಿದ್ದು, ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಪ್ರವಾಹ ಪರಿಸ್ಥಿತಿ ಇರುವ ಹಿನ್ನೆಲೆಯಲ್ಲಿ ಶುಲ್ಕ ಪಾವತಿಗೆ ಒಂದು ವಾರ ಗಡುವು ವಿಸ್ತರಿಸುವಂತೆ ಸಿಎಂ ಬಿಎಸ್ ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ಬಗ್ಗೆ ಸಿಎಂ ಅಧಿಕೃತ ಖಾತೆಯಲ್ಲಿ ಟ್ವೀಟ್ ಮಾಡಿದ್ದಾರೆ.