ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕಾಗಿದ್ದು, ಮುಂದಿನ 5 ದಿನ ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದ.ಕನ್ನಡ, ಉಡುಪಿ, ಉ.ಕನ್ನಡ ಜಿಲ್ಲೆಗಳಲ್ಲಿ ಇದೇ ನಾಳೆಯಿಂದ ಆ.8ರವರೆಗೆ ಭಾರೀ ಮಳೆಯಾಗಲಿದೆ. ಅಲ್ಲದೆ ದಕ್ಷಿಣ ಒಳನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಆ.7ರ ವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಇನ್ನೂ 8ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕರ್ನಾಟಕ ಜಿಲ್ಲೆಗಳಾದ ಬೆಳಗಾವಿ, ಧಾರವಾಡಗಳಿಗೆ ನಾಳೆ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುವುದರಿಂದ, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇಂದು ಮಧ್ಯಾಹ್ನ 3-30 ರಿಂದ ನಾಳೆ ಬೆಳಗ್ಗೆ 8 ಗಂಟೆಯವರೆಗೆ ಚದುರಿದ ಹಾಗೂ ಭಾರೀ ಮಳೆಯಾಗಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ.
ದಕ್ಷಿಣ ಒಳನಾಡಿನಲ್ಲಿ ಮಳೆ
ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ. ಭಾರೀ ಗಾಳಿಯೊಂದಿಗೆ, ದಾವಣಗೆರೆ, ಚಾಮರಾಜನಗರ, ತುಮಕೂರು, ಮೈಸೂರು, ಮಂಡ್ಯ, ಚಿತ್ರದುರ್ಗ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂ.ನಗರದಲ್ಲಿ ಸಾಧಾರಣ ಮಳೆಯಾಗಲಿದೆ. ಹಾಗೂ ಇತರ ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದೆ ಎಂದು ವರದಿ ನೀಡಿದೆ.
ಉತ್ತರ ಒಳನಾಡು ಜಿಲ್ಲೆಗಳು
ಬೆಳಗಾವಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಭಾರೀ ಗಾಳಿಯೊಂದಿಗೆ ಬೀದರ್, ಕಲಬುರ್ಗಿ, ವಿಜಯಪುರ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ಮಲೆನಾಡು ಜಿಲ್ಲೆಗಳು
ಮಲೆನಾಡಿನ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಗಾಳಿ-ಮಳೆಯಾಗಲಿದೆ ಎಂದು ತಿಳಿಸಲಾಗಿದೆ.
ಕರಾವಳಿ ಜಿಲ್ಲೆಗಳು
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಕೆಲವೆಡೆ ಗಾಳಿಯೊಂದಿಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.