ಬೆಂಗಳೂರು: ಉತ್ತರ ಕರ್ನಾಟಕ ಭಾಗದಲ್ಲಿ ಭಾರಿ ಮಳೆ ಹಿನ್ನೆಲೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಿ ಎಂದು ಆಯಾ ಜಿಲ್ಲಾಧಿಕಾರಿಗಳಿಗೆ ಸಿಎಂ ಬಿ.ಎಸ್. ಯಡಿಯೂರಪ್ಪ ಸೂಚನೆ ನೀಡಿದ್ದಾರೆ.
ಬೆಳಗಾವಿ, ಗದಗ, ಬಾಗಲಕೋಟೆ, ವಿಜಯಪುರ, ಹಾವೇರಿ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು, ಈ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಬಗ್ಗೆ ಜಿಲ್ಲಾಧಿಕಾರಿಗಳಿಂದ ಸಿಎಂ ಬಿಎಸ್ವೈ ಮಾಹಿತಿ ಪಡೆದಿದ್ದಾರೆ. ಮಳೆಯಿಂದಾಗಿ ಸಾರ್ವಜನಿಕರಿಗೆ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳುವಂತೆ ತಾಕೀತು ಮಾಡಿದ್ದಾರೆ.
ಮಳೆ ಸುರಿಯುತ್ತಿರುವ ಪ್ರದೇಶಗಳಿಗೆ ಅಧಿಕಾರಿಗಳು ತೆರಳಬೇಕು. ಅಲ್ಲಿನ ಸಂತ್ರಸ್ತರನ್ನು ಸುರಕ್ಷಿತ ಸ್ಥಳಕ್ಕೆ ಕಳಿಸಬೇಕು. ಅವರಿಗೆ ಕಾಳಜಿ ಕೇಂದ್ರದಲ್ಲಿ ಅಗತ್ಯ ಸೌಕರ್ಯ ಒದಗಿಸಬೇಕು. ಮಳೆಯಿಂದ ಅನಾಹುತಗಳ ತಡೆಗೆ ಕಟ್ಟೆಚ್ಚರ ವಹಿಸಬೇಕು. ಅಗತ್ಯತೆ ಇರುವ ಪ್ರದೇಶಗಳಲ್ಲಿ ಎನ್ ಡಿಆರ್ಎಫ್ ತಂಡ ನಿಯೋಜನೆ ಮಾಡಬೇಕು. ಯಾವುದೇ ಕಾರಣಕ್ಕೂ ಮಳೆಯಿಂದ ಯಾರಿಗೂ ಸಮಸ್ಯೆ ಆಗಬಾರದು. ಮಳೆಯಿಂದಾದ ಅನಾಹುತ ತಡೆಗೆ ಸೂಕ್ತ ಕ್ರಮವಹಿಸಬೇಕು ಎಂದು ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಗೆ ಸಿಎಂ ಆದೇಶಿಸಿದ್ದಾರೆ.