ಬೆಂಗಳೂರು : ಬಂಗಾಳ ಉಪಸಾಗರದ ವಾಯವ್ಯ ಭಾಗದಲ್ಲಿ ವಾಯುಭಾರ ಕುಸಿತ ಮುಂದುವರೆದಿದೆ. ಪೂರ್ವ ಅರಬ್ಬೀ ಸಮುದ್ರದ ಮಹಾರಾಷ್ಟ್ರ ಮತ್ತು ಕರ್ನಾಟಕ ಕರಾವಳಿಯಲ್ಲಿ ಕಡಿಮೆ ಒತ್ತಡವಿರುವ ವಿಸ್ತರಿಸಿದ ಪ್ರದೇಶವಿದೆ. ಇದರ ಪ್ರಭಾವದಿಂದ ಜುಲೈ 23 ರಿಂದ 27ರವರೆಗೆ ವ್ಯಾಪಕ ಮಳೆಯಾಗುವ ಹೆಚ್ಚಿನ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.
ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಇಂದು ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ನಾಳೆ ಬಹುತೇಕ ಎಲ್ಲಾ ಸ್ಥಳಗಳಲ್ಲಿ ಜುಲೈ 25, 26ರಂದು ಕೆಲವು ಕಡೆ ಮಾತ್ರ ಮಳೆಯಾಗುವ ಸಾಧ್ಯತೆ ಇದೆ. ಉತ್ತರಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಂಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ರೆಡ್, ನಾಳೆ ಆರೆಂಜ್, ಜುಲೈ 25ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ.
ಉಳಿದಂತೆ ಧಾರವಾಡ, ಹಾವೇರಿ, ಗದಗ್, ಬೀದರ್ ಮತ್ತು ಕಲ್ಬುರ್ಗಿ ಜಿಲ್ಲೆಗಳಿಗೆ ಇಂದು ಆರೆಂಜ್, ನಾಳೆ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಜುಲೈ 25ರಂದು ಮಳೆಯ ವಿಂಗಡಣೆ ಹಾಗೂ ತೀವ್ರತೆ ಕಡಿಮೆಯಾಗುವ ಹೆಚ್ಚಿನ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.
ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಿದ್ದು, ಮಾನ್ಸೂನ್ ಚುರುಕಾಗಿದೆ. ಮುಖ್ಯವಾಗಿ ಬೆಳಗಾವಿ ಜಿಲ್ಲೆಯ ಲೊಂಡಾದಲ್ಲಿ 38 ಸೆ. ಮೀ ಮಳೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕದ್ರಾದಲ್ಲಿ 34 ಸೆ.ಮೀ, ಶಿವಮೊಗ್ಗ ಜಿಲ್ಲೆಯ ತಾಳುಗುಪ್ಪದಲ್ಲಿ 27 ಸೆ. ಮೀ ಮಳೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಬೆಂಗಳೂರು ನಗರದ ಹವಾಮಾನ ಮುನ್ಸೂಚನೆ : ಮುಂದಿನ ಎರಡ್ಮೂರು ದಿನದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಟ ಉಷ್ಣಾಂಶ 25 ಡಿಗ್ರಿ ಸೆ. ಗ್ರೇಡ್ ಮತ್ತು ಕನಿಷ್ಠ 20 ಡಿಗ್ರಿ ಇರುವ ಹೆಚ್ಚಿನ ಸಾಧ್ಯತೆ ಇದೆ ಎಂದಿದ್ದಾರೆ.