ಬೆಂಗಳೂರು: ಶಿವಮೊಗ್ಗದ ಹುಣಸೋಡು ಬಳಿಯ ಯಶಸ್ ಸ್ಟೋನ್ ಕ್ರಷರ್ನಲ್ಲಿ ಇತ್ತೀಚೆಗೆ ನಡೆದ ಜಿಲೆಟಿನ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದ ತನಿಖಾ ವರದಿ ಸಲ್ಲಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.
ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಮತ್ತು ಘಟನೆಯಲ್ಲಿ ಸಾವನ್ನಪ್ಪಿದವರ ಕುಟುಂಬಗಳಿಗೆ ಸೂಕ್ತ ಪರಿಹಾರ ಒದಗಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ವಕೀಲ ಡಾ. ಕೆ.ಬಿ.ವಿಜಯ್ ಕುಮಾರ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಕೆಲ ಕಾಲ ಅರ್ಜಿದಾರ ವಕೀಲರ ವಾದ ಆಲಿಸಿದ ಪೀಠ, ಸರ್ಕಾರದ ಮುಖ್ಯ ಕಾರ್ಯದರ್ಶಿ, ಅರಣ್ಯ-ಪರಿಸರ ಇಲಾಖೆ, ಕಾರ್ಮಿಕ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸೇರಿದಂತೆ ಎಲ್ಲಾ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿತು. ಅಲ್ಲದೆ ಪ್ರಕರಣಕ್ಕೆ ಸಂಬಂಧಿಸಿದ ತನಿಖಾ ವರದಿ ಸಲ್ಲಿಸಬೇಕು. ಇಂತಹ ಘಟನೆಗಳು ಮರುಕಳಿಸದಂತೆ ಕೈಗೊಳ್ಳಲಾಗುವ ಕ್ರಮಗಳ ಕುರಿತು ವಿವರಣೆ ನೀಡಬೇಕು ಎಂದು ಸರ್ಕಾರಕ್ಕೆ ಸೂಚಿಸಿ ವಿಚಾರಣೆಯನ್ನು ಫೆಬ್ರವರಿ 24ಕ್ಕೆ ಮುಂದೂಡಿತು.
ಅರ್ಜಿದಾರರ ಕೋರಿಕೆ: ರಾಜ್ಯದಲ್ಲಿ ಹಲವೆಡೆ ರಾಜಕಾರಣಿಗಳ ಸಹಕಾರ ಮತ್ತು ಪ್ರಭಾವದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ನಡೆಯುತ್ತಿದ್ದು, ಇದನ್ನು ನಿಯಂತ್ರಿಸುವಲ್ಲಿ ಪೊಲೀಸರು, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು, ಜಿಲ್ಲಾಡಳಿತಗಳು ಮತ್ತು ಪಂಚಾಯಿತಿ ಕಚೇರಿಗಳು ವಿಫಲವಾಗಿವೆ. ಜನವರಿ 21ರಂದು ಶಿವಮೊಗ್ಗ ಜಿಲ್ಲೆಯ ಹುಣಸೋಡು ಬಳಿಯ ಸ್ಟೋನ್ ಕ್ರಷರ್ ಪ್ರದೇಶದಲ್ಲಿ ರಾತ್ರಿ 10.20ರ ಸಮಯದಲ್ಲಿ ಲಾರಿಯಲ್ಲಿ ತುಂಬಿಸಿಟ್ಟಿದ್ದ ಜಿಲೆಟಿನ್ ಸ್ಫೋಟಗೊಂಡು ಆರು ಜನ ಕಾರ್ಮಿಕರು ಸಾವಿಗೀಡಾಗಿದ್ದಾರೆ. ಅಧಿಕಾರಿಗಳ ಬೇಜವಾಬ್ದಾರಿ ಹಾಗೂ ನಿರ್ಲಕ್ಷ್ಯದಿಂದಲೇ ಅಕ್ರಮ ಕಲ್ಲು ಗಣಿಗಾರಿಕೆ ನಡೆಯುತ್ತಿದೆ. ಇಂತಹ ಘಟನೆ ಇದೇ ಮೊದಲೇನಲ್ಲ. ಆದ್ದರಿಂದ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು. ಹಾಗೆಯೇ ತನಿಖೆಯ ಮೇಲ್ವಿಚಾರಣೆಯನ್ನು ಹೈಕೋರ್ಟ್ ನಡೆಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.
ಓದಿ: 7 ಸರ್ಕಾರಿ ಲಂಚಾಸುರ ಅಧಿಕಾರಿಗಳ ಮೇಲೆ ಎಸಿಬಿ ದಾಳಿ: ಪತ್ತೆಯಾದ ನಗನಾಣ್ಯ ಎಷ್ಟು ಗೊತ್ತಾ?
ಅಲ್ಲದೆ ದುರ್ಘಟನೆಗೆ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಕಾರಣರಾದ ಅಧಿಕಾರಿಗಳನ್ನು ಸೇವೆಯಿಂದ ಅಮಾನತುಗೊಳಿಸಬೇಕು. ತಪ್ಪಿತಸ್ಥರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 304 (ಉದ್ದೇಶಪೂರ್ವಕವಲ್ಲದ ಕೊಲೆ) ಮತ್ತು 425 (ಸಾರ್ವಜನಿಕ ಆಸ್ತಿ ನಷ್ಟಕ್ಕೆ ಕಾರಣರಾದ) ಅಡಿಯಲ್ಲಿ ಪ್ರಕರಣ ದಾಖಲಿಸಬೇಕು. ಘಟನೆಯಲ್ಲಿ ಉಂಟಾದ ಆಸ್ತಿ ಮತ್ತು ಪ್ರಾಣ ಹಾನಿಗೆ ಸೂಕ್ತ ಪರಿಹಾರ ಕಲ್ಪಿಸಲು ಯೋಜನೆ ರೂಪಿಸಬೇಕು. ರಾಜ್ಯದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆಯನ್ನು ತಡೆಯಲು ಕಟ್ಟುನಿಟ್ಟಿನ ಕ್ರಮ ಜರುಗಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.