ಬೆಂಗಳೂರು: ವಲಸೆ ಕಾರ್ಮಿಕರು ತಮ್ಮ ತವರಿಗೆ ತೆರಳಲು ಅನುಕೂಲ ಆಗುವಂತೆ ಮೊದಲು ಅವರ ಪ್ರಯಾಣ ವೆಚ್ಚ ಭರಿಸಿ, ನಂತರ ಅವರ ತವರು ರಾಜ್ಯಗಳಿಂದ ಆ ಹಣವನ್ನು ವಸೂಲಿ ಮಾಡಿಕೊಳ್ಳಲು ಸಾಧ್ಯವೇ ಎಂಬುದನ್ನು ತಿಳಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.
ಅಲ್ಲದೆ, ವಲಸೆ ಕಾರ್ಮಿಕರ ಪ್ರಯಾಣ ವೆಚ್ಚಕ್ಕೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ ಬಳಸಲು ಸಾಧ್ಯವೇ ಎಂಬ ಬಗ್ಗೆ ಉತ್ತರಿಸುವಂತೆ ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ. ಹೊರ ರಾಜ್ಯಗಳ ವಲಸೆ ಕಾರ್ಮಿಕರನ್ನು ಅವರ ಸ್ವಗ್ರಾಮಗಳಿಗೆ ಕಳುಹಿಸುವ ವಿಚಾರವಾಗಿ ಎಐಸಿಟಿಯು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ವಲಸೆ ಕಾರ್ಮಿಕರ ಪ್ರಯಾಣ ವೆಚ್ಚ ಭರಿಸುವ ವಿಚಾರದಲ್ಲಿ ಸ್ಪಷ್ಟ ನಿಲುವು ತಿಳಿಸದ ರಾಜ್ಯ ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿತು.
ರಾಜ್ಯದಲ್ಲಿ ವಲಸೆ ಕಾರ್ಮಿಕರು ಅತ್ಯಂತ ಅಪಾಯಕಾರಿ ಸ್ಥಿತಿಯಲ್ಲಿದ್ದಾರೆ. ಊಟ, ವಸತಿ ಇಲ್ಲದೆ ಸಂಕಷ್ಟಕ್ಕೆ ಒಳಗಾಗಿರುವ ಕಾರ್ಮಿಕರ ಪ್ರಯಾಣ ವೆಚ್ಚ ಭರಿಸಲು ಮೀನಾಮೇಷ ಎಣಿಸುತ್ತಿರುವುದು ದುರದೃಷ್ಟಕರ ಸಂಗತಿ. ಹಲವು ಕಾರ್ಮಿಕರು ಸ್ವಗ್ರಾಮಗಳಲ್ಲಿ ಇರುವ ತಮ್ಮ ಕುಟುಂಬಗಳನ್ನು ಸೇರಿಕೊಳ್ಳಲು ಹಂಬಲಿಸುತ್ತಿದ್ದಾರೆ. ಆದರೆ, ಪರಿಸ್ಥಿತಿ ಗಂಭೀರವಾಗಿದೆ. ಈ ಕುರಿತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಕಾರ್ಮಿಕ ಇಲಾಖೆ ಕಾರ್ಯದರ್ಶಿ ಮುಂದಿನ ವಿಚಾರಣೆ ವೇಳೆ ಖುದ್ದು ವಿವರಣೆ ನೀಡುವಂತೆ ತಾಕೀತು ಮಾಡಿ ವಿಚಾರಣೆಯನ್ನು ಮೇ 26ಕ್ಕೆ ಮುಂದೂಡಿತು.
ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ವಕೀಲರು ಲಿಖಿತ ಹೇಳಿಕೆ ಸಲ್ಲಿಸಿ, ಶ್ರಮಿಕ್ ವಿಶೇಷ ರೈಲುಗಳ ಮೂಲಕ ತಮ್ಮ ರಾಜ್ಯಗಳಿಗೆ ಮರಳಲು 4.88 ಲಕ್ಷ ವಲಸೆ ಕಾರ್ಮಿಕರು ತಮ್ಮ ಹೆಸರು ನೋಂದಾಯಿಸಿಕೊಂಡಿದ್ದಾರೆ. ಮೇ.20ರವರೆಗೆ 100 ರೈಲುಗಳಲ್ಲಿ 1,40, 473 ವಲಸಿಗರು ಪ್ರಯಾಣ ಬೆಳೆಸಿದ್ದಾರೆ. ವಿವಿಧ ರಾಜ್ಯಗಳಿಗೆ 670 ಬಸ್‌ಗಳ ಮೂಲಕ 18,156 ವಲಸೆ ಕಾರ್ಮಿಕರು ಪ್ರಯಾಣಿಸಿದ್ದಾರೆ ಎಂದು ತಿಳಿಸಿದೆ.