ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯಲ್ಲಿ ಸ್ಥಾಪಿಸಲಾಗಿರುವ 48 ಟ್ರಯೇಜ್ ಸೆಂಟರ್‌ಗಳಲ್ಲಿ ಎಷ್ಟು ಫಲಾನುಭವಿಗಳು ಸೌಲಭ್ಯ ಪಡೆದುಕೊಂಡಿದ್ದಾರೆ ಎಂಬ ಬಗ್ಗೆ ವಿವರ ನೀಡುವಂತೆ ಹೈಕೋರ್ಟ್ ಪಾಲಿಕೆಗೆ ಸೂಚಿಸಿದೆ.
ಕೋವಿಡ್ ನಿರ್ವಹಣೆ ಮತ್ತು ಚಿಕಿತ್ಸೆಗೆ ಸಂಬಂಧಿಸಿದಂತೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸುತ್ತಿರುವ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ಈ ಸೂಚನೆ ನೀಡಿದೆ.
ವಿಚಾರಣೆ ವೇಳೆ ಬಿಬಿಎಂಪಿ ಪರ ವಕೀಲ ವಿ. ಶ್ರೀನಿಧಿ ವಾದಿಸಿ, ಆಸ್ಪತ್ರೆಗಳ ಮೇಲಿನ ಒತ್ತಡ ತಗ್ಗಿಸಿಲು ಬಿಬಿಎಂಪಿ ವ್ಯಾಪ್ತಿಯ 8 ವಲಯಗಳಲ್ಲಿ 48 ಟ್ರಯೇಜ್ ಸೆಂಟರ್‌ಗಳನ್ನು ತೆರೆಯಲಾಗಿದೆ ಎಂದು ತಿಳಿಸಿದರು.
ಇದನ್ನು ದಾಖಲಿಸಿಕೊಂಡ ಪೀಠ, ಈ ಟ್ರಯೇಜ್ ಸೆಂಟರ್ ಸೌಲಭ್ಯ ಪಡೆದುಕೊಂಡ ಫಲಾನುಭವಿಗಳ ವಿವರಗಳನ್ನು ಮುಂದಿನ ವಿಚಾರಣೆ ವೇಳೆ ಸಲ್ಲಿಸಿ ಎಂದು ಸೂಚಿಸಿತು.
ಇದೇ ವೇಳೆ ಬಿಬಿಎಂಪಿ ವ್ಯಾಪ್ತಿಯಲ್ಲಿ 4 ಸಾವಿರಕ್ಕೂ ಹೆಚ್ಚು ಜನರಲ್ ಬೆಡ್ ಲಭ್ಯವಿದ್ದು, 272 ಹೆಚ್‍ಡಿಯು, 12 ಐಸಿಯು, ಐಸಿಯು-ವೆಂಟಿಲೇಟರ್ 7 ಬೆಡ್‍ಗಳು ಇವೆ ಎಂದು ಬಿಬಿಎಂಪಿ ಪರ ವಕೀಲರು ಮಾಹಿತಿ ನೀಡಿದರು.
ಖಾಸಗಿ ಆಸ್ಪತ್ರೆಗಳಲ್ಲಿ ಸರ್ಕಾರಿ ಕೋಟಾದ ಬೆಡ್‍ಗಳ ವಿವರಗಳನ್ನು ಮಾತ್ರ ಪ್ರಕಟಿಸಲಾಗುತ್ತಿದ್ದು, ಖಾಸಗಿ ಬೆಡ್‍ಗಳ ವಿವರ ಲಭ್ಯವಾಗಿಸುತ್ತಿಲ್ಲ ಎಂದು ವಕೀಲ ಶ್ರೀಧರ್ ಪ್ರಭು ಹೇಳಿದ್ದಾರೆ. ಈ ಬಗ್ಗೆ ಗಮನ ಹರಿಸುವಂತೆ ಬಿಬಿಎಂಪಿ ಪರ ವಕೀಲರಿಗೆ ಪೀಠ ಸೂಚಿಸಿತು.