ಬೆಂಗಳೂರು: ಇತ್ತೀಚೆಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ವಿವಾಹ ಸಮಾರಂಭದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲಾಗಿದೆಯೇ ಎಂಬುದರ ಕುರಿತು ವಿವರ ನೀಡುವಂತೆ ಹೈಕೋರ್ಟ್ ಸರ್ಕಾರಕ್ಕೆ ಸೂಚಿಸಿದೆ.
ಕೊರೊನಾ ತಡೆಗಟ್ಟಲು ಸರ್ಕಾರಕ್ಕೆ ಸೂಕ್ತ ನಿರ್ದೇಶನಗಳನ್ನು ನೀಡುವಂತೆ ಕೋರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠವು ನಿಖಿಲ್ ಮದುವೆ ವಿಚಾರ ಪ್ರಸ್ತಾಪಿಸಿದೆ.
ಈ ಮದುವೆಯಲ್ಲಿ ಎಷ್ಟು ಜನ ಭಾಗವಹಿಸಿದ್ದರು ಮತ್ತು ಅಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲಾಗಿತ್ತೇ? ಎಂಬ ಬಗ್ಗೆ ಪರಿಶೀಲನೆ ನಡೆಸಿ ಮುಂದಿನ ವಿಚಾರಣೆ ವೇಳೆ ವರದಿ ಸಲ್ಲಿಸಿ ಎಂದು ಸರ್ಕಾರಿ ಪರ ವಕೀಲರಿಗೆ ಸೂಚನೆ ನೀಡಿದೆ.
ಆಹಾರ, ದಿನಸಿ ಹಾಗೂ ಇತರ ಜೀವನಾವಶ್ಯಕ ವಸ್ತುಗಳನ್ನು ವಿತರಣೆ ಮಾಡುವ ಸಂದರ್ಭದಲ್ಲಿ ಶಾಸಕರು, ಸಚಿವರು ಸೇರಿದಂತೆ ಜನಪ್ರತಿನಿಧಿಗಳು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೇ ಇರುವುದಕ್ಕೆ ಮುಖ್ಯ ನ್ಯಾಯಮೂರ್ತಿಗಳು ತೀವ್ರ ಬೇಸರ ವ್ಯಕ್ತಪಡಿಸಿದರು.
ಈ ಕುರಿತು ಮಾಧ್ಯಮಗಳಲ್ಲಿ ವರದಿ ಪ್ರಕಟವಾಗುತ್ತಿವೆ. ಜನಪ್ರತಿನಿಧಿಗಳು ಭಾಗವಹಿಸುವ ಕಾರ್ಯಕ್ರಮಗಳಲ್ಲೇ ನಿಯಮ ಪಾಲಿಸದಿದ್ದರೆ ಹೇಗೆ? ಈ ಸಂಬಂಧ ಜನಪ್ರತಿನಿಧಿಗಳಿಗೆ ಯಾವ ಸೂಚನೆಗಳನ್ನು ನೀಡಲಾಗಿದೆ ಮತ್ತು ಇಂತಹ ಘಟನೆಗಳು ಮರುಕಳಿಸದಂತೆ ಯಾವ ರೀತಿ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬುದರ ವರದಿ ಸಲ್ಲಿಸುವಂತೆ ಸರ್ಕಾರಿ ವಕೀಲರಿಗೆ ಸೂಚಿಸಿದೆ.