ಬೆಂಗಳೂರು: ಪಾದರಾಯನಪುರದಲ್ಲಿ ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಜೈಲು ಸೇರಿದ್ದ ಮತ್ತೋರ್ವ ಆರೋಪಿಗೆ ಹೈಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿದೆ.
ಕೋವಿಡ್ -19 ಕೆಲಸದ ಮೇಲೆ ತೆರಳಿದ್ದ ವೈದ್ಯರು ಮತ್ತು ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದ ಆರೋಪಿ ಇರ್ಫಾನ್ ಅಹ್ಮದ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಸೂರಜ್ ಗೋವಿಂದ ರಾಜ್ ಅವರಿದ್ದ ಪೀಠ ವಿಚಾರೆಣೆ ನಡೆಸಿ, ಜಾಮೀನು ನೀಡಿದೆ.
ಜಾಮೀನು ನೀಡುವ ವೇಳೆ ಪೀಠ ಹಲವು ಷರತ್ತುಗಳನ್ನು ವಿಧಿಸಿದ್ದು, ಆರೋಪಿ ಒಂದು ಲಕ್ಷ ರೂಪಾಯಿ ಮೊತ್ತದ ವೈಯಕ್ತಿಕ ಬಾಂಡ್ ನೀಡಬೇಕು. ಅಷ್ಟೇ ಮೊತ್ತಕ್ಕೆ ಇಬ್ಬರು ವ್ಯಕ್ತಿಗಳ ಭದ್ರತಾ ಖಾತರಿ ನೀಡಬೇಕು. ಸಾಕ್ಷ್ಯ ನಾಶಪಡಿಸಲು ಯತ್ನಿಸಬಾರದು. ತನಿಖೆಗೆ ಸಹಕರಿಸಬೇಕು, ವಿಚಾರಣಾ ನ್ಯಾಯಾಲಯದ ಅನುಮತಿಯಿಲ್ಲದೆ ಕ್ಷೇತ್ರದಿಂದ ಹೊರ ಹೋಗಬಾರದು ಎಂದು ಸ್ಪಷ್ಟಪಡಿಸಿದೆ.
ಅಲ್ಲದೆ, ಜೈಲಿನಿಂದ ಬಿಡುಗಡೆ ಮಾಡುವ ಮುನ್ನ ಆರೋಪಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಬೇಕು. ಆತನಿಗೆ ಕೊರೊನಾ ಸೋಂಕಿನ ಲಕ್ಷಣಗಳಿದ್ದರೆ ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಮುಂದಿನ ಕ್ರಮ ಜರುಗಿಸಬೇಕು. ಜಾಮೀನಿನ ಮೇಲೆ ಬಿಡುಗಡೆಯಾದ ಬಳಿಕ ಆರೋಗ್ಯ ಇಲಾಖೆಯ ಮಾರ್ಗಸೂಚಿಗಳು ಅಥವಾ ಕೋರ್ಟ್ ಷರತ್ತು ಉಲ್ಲಂಘಿಸಿದರೆ ಜಾಮೀನು ರದ್ದು ಮಾಡುವಂತೆ ಕೋರಿ ಪೊಲೀಸರು ನ್ಯಾಯಾಲಯಕ್ಕೆ ಮನವಿ ಮಾಡಬಹುದು ಎಂದು ಪೀಠ ಜಾಮೀನು ಆದೇಶದಲ್ಲಿ ತಿಳಿಸಿದೆ.