ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಪದವಿ ಕಾಲೇಜುಗಳಲ್ಲಿ ಖಾಲಿಯಿರುವ ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ನಾಳೆ, ನಾಡಿದ್ದು ನಡೆಯಲಿರುವ ಪರೀಕ್ಷೆಗೆ ಹೈಕೋರ್ಟ್ ಹಸಿರು ನಿಶಾನೆ ತೋರಿದೆ.
ಇದೇ ವೇಳೆ ಪ್ರಾಣಿಶಾಸ್ತ್ರ ಹಾಗೂ ಸಸ್ಯಶಾಸ್ತ್ರ ವಿಷಯಗಳಿಗೆ ಪರಿವರ್ತಿಸಿರುವ 19 ಮನೋವಿಜ್ಞಾನ ವಿಭಾಗದ ಹುದ್ದೆಗಳ ಭರ್ತಿಗೆ ತಡೆಯಾಜ್ಞೆ ನೀಡಿದೆ.
ಡಾ. ಎನ್. ಮೀನಾಕ್ಷಿ ಸೇರಿದಂತೆ ವಿವಿಧ ವಿಶ್ವವಿದ್ಯಾಲಯಗಳ ಮತ್ತು ಸರ್ಕಾರಿ ಪ್ರಥಮ ದರ್ಜೆ ಪದವಿ ಕಾಲೇಜುಗಳ 14 ಅತಿಥಿ ಉಪನ್ಯಾಸಕರು ಸಲ್ಲಿಸಿರುವ ರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಜಿ. ನರೇಂದರ್ ಹಾಗೂ ನ್ಯಾ. ಎಂ.ಜಿ.ಎಸ್. ಕಮಲ್ ಅವರಿದ್ದ ವಿಭಾಗೀಯ ಪೀಠ ಇಂದು ಈ ಮಧ್ಯಂತರ ಆದೇಶ ಮಾಡಿದೆ.
ಪೀಠ ತನ್ನ ಮಧ್ಯಂತರ ಆದೇಶದಲ್ಲಿ, ಪರೀಕ್ಷೆ ಪ್ರಕ್ರಿಯೆಯಲ್ಲಿ ನ್ಯಾಯಾಲಯ ಮಧ್ಯಪ್ರವೇಶಿಸುವುದಿಲ್ಲ. ಪ್ರಕರಣದ ಅಂಶಗಳನ್ನು ಪರಿಗಣಿಸಿದರೆ ಪ್ರಾಣಿಶಾಸ್ತ್ರ ಮತ್ತು ಸಸ್ಯಶಾಸ್ತ್ರ ವಿಷಯಗಳಿಗೆ ಪರಿವರ್ತಿಸಿದ ಮನೋವಿಜ್ಞಾನ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ಭರ್ತಿಯನ್ನು ತಡೆಹಿಡಿಯುವುದರಿಂದ ಯಾವುದೇ ಸಮಸ್ಯೆಯಾಗದು. ಆದ್ದರಿಂದ, ಪ್ರಾಣಿಶಾಸ್ತ್ರ ಮತ್ತು ಸಸ್ಯಶಾಸ್ತ್ರ ವಿಷಯಗಳಿಗೆ ಪರಿವರ್ತಿಸಿದ 19 ಮನೋವಿಜ್ಞಾನ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ಭರ್ತಿಗೆ ಮಾತ್ರವೇ ತಡೆಯಾಜ್ಞೆ ನೀಡಲಾಗಿದೆ ಎಂದು ಸ್ಪಷ್ಟಪಡಿಸಿ, ವಿಚಾರಣೆಯನ್ನು ಏಪ್ರಿಲ್ 4ಕ್ಕೆ ಮುಂದೂಡಿದೆ.
ಪ್ರಕರಣದ ಹಿನ್ನೆಲೆ: ರಾಜ್ಯದ ವಿವಿಧ ಪದವಿ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಕೊರತೆಯಿಂದಾಗಿ ಮನೋವಿಜ್ಞಾನ ಪ್ರಾಧ್ಯಾಪಕರ ಹುದ್ದೆಗಳು ಖಾಲಿ ಉಳಿದಿವೆ. ಈ ಹಿನ್ನೆಲೆಯಲ್ಲಿ ಸರ್ಕಾರ ಮನೋವಿಜ್ಞಾನ ಪ್ರಾಧ್ಯಾಪಕರ ಹುದ್ದೆಗಳಲ್ಲಿ 10 ಹುದ್ದೆಗಳನ್ನು ಪ್ರಾಣಿಶಾಸ್ತ್ರ ಹಾಗೂ 9 ಹುದ್ದೆಗಳನ್ನು ಸಸ್ಯಶಾಸ್ತ್ರ ವಿಭಾಗಕ್ಕೆ ಪರಿವರ್ತಿಸಿ 2021ರ ಜೂನ್ 29ರಂದು ಆದೇಶಿಸಿದೆ. ಈ ಆದೇಶ ಪ್ರಶ್ನಿಸಿ ಅರ್ಜಿದಾರರು ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ (ಕೆಎಟಿ)ಯಲ್ಲಿ ಅರ್ಜಿ ಸಲ್ಲಿಸಿದ್ದರು. ಕೆಎಟಿ ಅರ್ಜಿ ಪರಿಗಣಿಸಿದ ಹಿನ್ನೆಲೆಯಲ್ಲಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಸ್ಪಷ್ಟನೆ: ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿ ಪರೀಕ್ಷೆ ಸಂಬಂಧ ಕೋರ್ಟ್ ತಡೆಯಾಜ್ಞೆ ನೀಡಿದೆ ಎನ್ನುವ ಆಧಾರರಹಿತ ವದಂತಿಯನ್ನು ಅಭ್ಯರ್ಥಿಗಳು ನಂಬಿ, ಮೋಸ ಹೋಗಬಾರದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಇ.ಡಿ ರಮ್ಯ ತಿಳಿಸಿದ್ದಾರೆ.
ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಮಾರ್ಚ್ 12ರಿಂದ 16ರವರೆಗೆ ನಿಗದಿಯಾಗಿರುವ ಸ್ಪರ್ಧಾತ್ಮಕ ಪರೀಕ್ಷೆಯು ಅಬಾಧಿತವಾಗಿ ಮತ್ತು ಕಟ್ಟುನಿಟ್ಟಾಗಿ ನಡೆಯಲಿದೆ. ಪರೀಕ್ಷೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದ ಸುದ್ದಿಯು ಸುಳ್ಳು ಎಂದು ಅವರು ಸ್ಪಷ್ಟೀಕರಣ ನೀಡಿದ್ದಾರೆ.
ಇದನ್ನೂ ಓದಿ: ಭಾರತದ ರಫೇಲ್ ಎದುರಿಸಲು 'ಮೇಡ್ ಇನ್ ಚೀನಾ' ಫೈಟರ್ ಜೆಟ್ ಖರೀದಿಸಿದ ಪಾಕ್