ಬೆಂಗಳೂರು: ಡಿ.ಜೆ.ಹಳ್ಳಿ ಹಾಗೂ ಕೆ.ಜಿ.ಹಳ್ಳಿ ಗಲಭೆ ಪ್ರಕರಣ ಸಂಬಂಧ ಕಾನೂನು ಬಾಹಿರ ಅಪರಾಧ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿ ದಾಖಲಿಸಿರುವ ಎರಡು ಪ್ರಕರಣಗಳಲ್ಲಿ ತಲೆ ಮರೆಸಿಕೊಂಡಿರುವ ಆರೋಪಿಗಳನ್ನು ಬಂಧಿಸುವಂತೆ ಹೈಕೋರ್ಟ್ ರಾಷ್ಟ್ರೀಯ ತನಿಖಾ ಸಂಸ್ಥೆಗೆ ನಿರ್ದೇಶಿಸಿದೆ.
ಗಲಭೆ ಪ್ರಕರಣದ ತನಿಖೆಯನ್ನು ಎನ್‌ಐಎಗೆ ವಹಿಸುವಂತೆ ಹಾಗೂ ಸಾರ್ವಜನಿಕ ಆಸ್ತಿ ನಷ್ಟ ಅಂದಾಜು ಮಾಡಲು ಕ್ಲೇಮ್ ಕಮಿಷನರ್ ನೇಮಕ ಮಾಡುವಂತೆ ಕೋರಿ ಸಲ್ಲಿಸಿರುವ ಪಿಐಎಲ್ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಈ ವೇಳೆ, ಎನ್‌ಐಎ ಪರ ವಕೀಲರು ವಿಚಾರಣೆಗೆ ಹಾಜರಾಗಿ, ಎರಡು ಪ್ರಕರಣಗಳ ಸಂಬಂಧ ಈವರೆಗೆ ನಡೆಸಿರುವ ತನಿಖೆಯ ವಿವರಗಳನ್ನು ಒಳಗೊಂಡ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಪೀಠಕ್ಕೆ ಸಲ್ಲಿಸಿದರು. ವರದಿ ಪರಿಶೀಲಿಸಿದ ಪೀಠ, ಡಿ.ಜೆ. ಹಳ್ಳಿ ಮತ್ತು ಕೆ.ಜಿ.ಹಳ್ಳಿ ಗಲಭೆ ಸಂಬಂಧ ಎನ್‌ಐಎ ತನಿಖೆ ನಡೆಸುತ್ತಿದೆ. ಎರಡೂ ಪ್ರಕರಣಗಳಲ್ಲಿ ತಲಾ ನಾಲ್ವರು ಆರೋಪಿಗಳು ಸೇರಿದಂತೆ ಎಂಟು ಮಂದಿ ತಲೆಮರೆಸಿಕೊಂಡಿದ್ದಾರೆ.
ಆದ್ದರಿಂದ ಈ ಆರೋಪಿಗಳನ್ನು ಶೀಘ್ರ ಪತ್ತೆಹಚ್ಚಿ ಬಂಧಿಸಬೇಕು. ಈ ಸಂಬಂಧ ಕೈಗೊಂಡ ಕ್ರಮಗಳನ್ನು ಸೆ.17ರೊಳಗೆ ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಸಬೇಕು ಎಂದು ಎನ್‌ಐಎಗೆ ಸೂಚಿಸಿ, ವಿಚಾರಣೆ ಮುಂದೂಡಿತು.