ಬೆಂಗಳೂರು: ಸಾರಿಗೆ ನೌಕರರ ಮುಷ್ಕರದಿಂದ ಆಗಿರುವ ನಷ್ಟವನ್ನು ಆಯೋಜಕರಿಂದ ವಸೂಲಿ ಮಾಡುವಂತೆ ಕೋರಿ ಸಲ್ಲಿಸಿರುವ ಅರ್ಜಿಯಲ್ಲಿ ಮುಷ್ಕರಕ್ಕೆ ಕರೆ ನೀಡಿರುವ ಸಂಘಟನೆಗಳನ್ನೂ ಪ್ರತಿವಾದಿ ಮಾಡಿ ಅರ್ಜಿ ಸಲ್ಲಿಸುವಂತೆ ಹೈಕೋರ್ಟ್ ಅರ್ಜಿದಾರರ ಪರ ವಕೀಲರಿಗೆ ಸೂಚಿಸಿದೆ.
ಕಳೆದ ಡಿಸೆಂಬರ್‌ನಲ್ಲಿ ನಡೆದ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿಗೆ ನೌಕರರ ಮುಷ್ಕರದಿಂದ ಉಂಟಾಗಿರುವ ನಷ್ಟವನ್ನು ಆಯೋಜಕರಿಂದಲೇ ವಸೂಲಿ ಮಾಡಲು ನಿರ್ದೇಶಿಸುವಂತೆ ಕೋರಿ ಸಮರ್ಪಣಾ ಸ್ವಯಂ ಸೇವಾ ಸಂಸ್ಥೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಈ ವೇಳೆ ಅರ್ಜಿದಾರರ ಪರ ವಕೀಲ ಜಿ.ಆರ್.ಮೋಹನ್ ಮಧ್ಯಂತರ ಅರ್ಜಿ ಸಲ್ಲಿಸಿ, 2021ರ ಏ. 7ರಿಂದ ನಡೆಯುತ್ತಿರುವ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳ ಮುಷ್ಕರದಿಂದ ಸುಮಾರು 140 ಕೋಟಿ ರೂ. ನಷ್ಟ ಉಂಟಾಗಿದೆ. ಮುಷ್ಕರ ಇನ್ನೂ ನಿಂತಿಲ್ಲ ಎಂದು ಪೀಠಕ್ಕೆ ವಿವರಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಮುಷ್ಕರಕ್ಕೆ ಕರೆ ನೀಡಿದ ಸಂಘಟನೆಗಳನ್ನೂ ಪ್ರತಿವಾದಿಯಾಗಿ ಸೇರಿಸಿ ಅರ್ಜಿ ಸಲ್ಲಿಸುವಂತೆ ಅರ್ಜಿದಾರರ ಪರ ವಕೀಲರಿಗೆ ಸೂಚಿಸಿ ವಿಚಾರಣೆ ಮುಂದೂಡಿತು.
ಪ್ರಕರಣದ ಹಿನ್ನೆಲೆ:
2020ರ ಡಿ. 11ರಿಂದ 14ರವರಗೆ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ನೌಕರರು ಏಕಾಏಕಿ ಮುಷ್ಕರ ನಡೆಸಿದ್ದರಿಂದ ಸಾರ್ವಜನಿಕರಿಗೆ ತೀವ್ರ ಅನಾನುಕೂಲ ಉಂಟಾಗಿತ್ತು. ಜತೆಗೆ, ಮುಷ್ಕರದಿಂದ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿಗೆ 7.93 ಕೋಟಿ ರೂ. ನಷ್ಟ ಉಂಟಾಗಿದೆ. ಅಲ್ಲದೆ, ಮುಷ್ಕರಕ್ಕೆ ಕರೆ ನೀಡಿದವರ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ಎಫ್‌ಐಆರ್ ದಾಖಲಾಗಿದೆ.
ಆದರೆ, ಅವುಗಳನ್ನು ಆಧರಿಸಿ ಪೊಲೀಸರು ಯಾವುದೇ ತನಿಖೆ ನಡೆಸಿಲ್ಲ. ಆದ್ದರಿಂದ ಮುಷ್ಕರದಿಂದ ಉಂಟಾಗಿರುವ ನಷ್ಟವನ್ನು ಕರೆ ನೀಡಿದ್ದ ಸಂಘಟನೆಗಳು ಮತ್ತು ನೌಕರರಿಂದ ವಸೂಲಿ ಮಾಡಬೇಕು. ಮುಷ್ಕರಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಎಫ್‌ಐಆರ್‌ಗಳ ಸಂಬಂಧ ಕಾನೂನು ಕ್ರಮ ಜರುಗಿಸಲು ನಗರ ಪೊಲೀಸ್ ಆಯುಕ್ತರಿಗೆ ನಿರ್ದೇಶಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.