ಬೆಂಗಳೂರು: ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಕೊರೊನಾ ಮಾರ್ಗಸೂಚಿಗಳನ್ನು ನಗರದಲ್ಲಿ ಕಟ್ಟುನಿಟ್ಟಾಗಿ ಜಾರಿ ಮಾಡಲು ಅಧಿಕಾರಿಗಳ ತಂಡ ರೂಪಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.
ಕೋವಿಡ್ ಮಾರ್ಗಸೂಚಿಗಳ ಪಾಲನೆ ವಿಚಾರವಾಗಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ಈ ನಿರ್ದೇಶನ ನೀಡಿದೆ. ಅಲ್ಲದೇ, ಅಕ್ಟೋಬರ್ 28ರೊಳಗೆ ಅಧಿಕಾರಿಗಳ ತಂಡ ರಚಿಸುವಂತೆ ಸೂಚಿಸಿದೆ.
ಹೈಕೋರ್ಟ್ ತನ್ನ ಆದೇಶದಲ್ಲಿ, ಮಾರ್ಗಸೂಚಿಗಳ ಮೇಲ್ವಿಚಾರಣೆಗಾಗಿ ರೂಪಿಸುವ ಅಧಿಕಾರಿಗಳ ತಂಡದಲ್ಲಿ ಅಗತ್ಯವೆನ್ನಿಸುವ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಸಾಕಷ್ಟು ಪ್ರಮಾಣದಲ್ಲಿ ಸೇರಿಸಬೇಕು. ಅವರಿಗೆ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿ ಮಾಡುವ ಜವಾಬ್ದಾರಿಯನ್ನಷ್ಟೇ ನೀಡಬೇಕು. ಸಾರ್ವಜನಿಕ ಸಭೆ, ಮೆರವಣಿಗೆಗೆ ಅನುಮತಿ ನೀಡುವಾಗ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸಾಮಾಜಿಕ ಆಂತರ ಕಾಯ್ದುಕೊಳ್ಳಬೇಕು ಎಂಬ ಷರತ್ತು ವಿಧಿಸಬೇಕು. ಮಾಸ್ಕ್ ಧರಿಸುವ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಪೊಲೀಸರು ಮೇಲ್ವಿಚಾರಣೆ ನಡೆಸಬೇಕು ಎಂದು ಪೀಠ ನಿರ್ದೇಶಿಸಿದೆ.
ತೇಜಸ್ವಿ ಸೂರ್ಯ ವಿರುದ್ಧ ಕೈಗೊಂಡ ಕ್ರಮದ ವರದಿಗೆ ತಾಕೀತು: ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷರಾಗಿ ನೇಮಕಗೊಂಡ ಹಿನ್ನೆಲೆ ಸಂಸದ ತೇಜಸ್ವಿ ಸೂರ್ಯ ಅವರನ್ನು ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಲ್ಲೇಶ್ವರದ ಬಿಜೆಪಿ ಕಚೇರಿಗೆ ಮೆರವಣಿಯಲ್ಲಿ ಕರೆತಂದಾಗ ಮಾರ್ಗಸೂಚಿಗಳ ಉಲ್ಲಂಘನೆಯಾಗಿರುವ ಪ್ರಕರಣದಲ್ಲಿ ಕೈಗೊಂಡ ಕ್ರಮಗಳ ಕುರಿತು ವರದಿ ಸಲ್ಲಿಸಲು ಹೈಕೋರ್ಟ್, ಸರ್ಕಾರಕ್ಕೆ ಕೊನೆಯ ಬಾರಿಗೆ ಕಾಲಾವಕಾಶ ನೀಡಿತು. ಜತೆಗೆ, ಶುಕ್ರವಾರ ನೀಡಿರುವ ಎಲ್ಲಾ ನಿರ್ದೇಶನಗಳ ಅನುಪಾಲನಾ ವರದಿಯನ್ನು ನವೆಂಬರ್ 4ರೊಳಗೆ ಸಲ್ಲಿಸಬೇಕೆಂದು ಸೂಚಿಸಿ, ವಿಚಾರಣೆ ಮುಂದೂಡಿತು.