ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಮೆಗ್ಗಾನ್ ಸರ್ಕಾರಿ ಆಸ್ಪತ್ರೆಗೆ ಸೇರಿದ ಜಾಗವನ್ನು ಒತ್ತುವರಿಯಾಗದಂತೆ ಸರ್ಕಾರ ನೋಡಿಕೊಳ್ಳಬೇಕು ಎಂದು ಹೈಕೋರ್ಟ್ ನಿರ್ದೇಶನ ನೀಡಿದೆ.
ಶಿವಮೊಗ್ಗ ಜಯನಗರದ ನಿವಾಸಿ ಜಿ ರಾಮು ಹಾಗೂ ವಿನೋಭಾ ನಗರದ ನಿವಾಸಿ ಮೋಹನ್ ಕುಮಾರ್ ಆಸ್ಪತ್ರೆಯ ಜಾಗದಲ್ಲಿ ಒತ್ತುವರಿಯನ್ನು ಆಕ್ಷೇಪಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನ, ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಸ್.ಸಿ. ಶರ್ಮ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆ ನಡೆಸಿದರು.
ಮೈಸೂರು ಮಹಾರಾಜರು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಜಾಗ ನೀಡಿದ್ದರು. ಇದು ಬ್ರಿಟಿಷರ ಕಾಲದಲ್ಲಿ ನಿರ್ಮಾಣವಾಗಿತ್ತು. ಪ್ರಸ್ತುತ ಆಸ್ಪತ್ರೆಗೆ ಸೇರಿದ ಜಾಗವನ್ನು ಕೆಲ ಖಾಸಗಿ ವ್ಯಕ್ತಿಗಳು ಒತ್ತುವರಿ ಮಾಡಿದ್ದು, ಅದನ್ನು ತೆರವುಗೊಳಿಸಲು ಸರ್ಕಾರಕ್ಕೆ ಆದೇಶಿಸುವಂತೆ ಕೋರಿದರು.
ವಾದವನ್ನ ಪರಿಗಣಿಸಿದ ನ್ಯಾಯಪೀಠ, ಅರ್ಜಿಗೆ ಉತ್ತರಿಸಲು ಸರ್ಕಾರಕ್ಕೆ ಕಾಲಾವಕಾಶ ನೀಡಿ ಆಸ್ಪತ್ರೆಗೆ ಸೇರಿದ ಜಾಗವನ್ನು ಒತ್ತುವರಿಯಾಗದಂತೆ ನೋಡಿಕೊಳ್ಳಬೇಕು ಎಂದು ಸರ್ಕಾರಕ್ಕೆ ನಿರ್ದೇಶಿಸಿ ವಿಚಾರಣೆ ಮುಂದೂಡಿತು. ಮೆಗ್ಗಾನ್ ಆಸ್ಪತ್ರೆಗೆ ಸುತ್ತಾಮುತ್ತಾ ೧೭೨ ಎಕರೆ ಜಾಗವಿದೆ. ಅದರಲ್ಲಿ ೭೨ ಎಕರೆ ಮೈಸೂರು ಮಹಾರಾಜರು ಬಳುವಳಿಯಾಗಿ ನೀಡಿದ್ದರು. ಈಗ ೧೩೬ ಎಕರೆ ಜಾಗ ಖಾಸಗಿ ವ್ಯಕ್ತಿಗಳಿಂದ ಒತ್ತುವರಿಯಾಗಿದೆ ಹಾಗೂ ಅನಧಿಕೃತವಾಗಿ ಕಟ್ಟಡಗಳನ್ನು ನಿರ್ಮಾಣ ಮಾಡಲಾಗಿದೆ ಎಂದು ಅರ್ಜಿದಾರರ ಪರ ವಕೀಲ ಪ್ರಿನ್ಸ್ ಐಸಾಕ್ ಆರೋಪಿಸಿದ್ದಾರೆ.