ಬೆಂಗಳೂರು: ಸೂರಜ್ ರೇವಣ್ಣ ಅವರ ವಿಧಾನ ಪರಿಷತ್ ಸದಸ್ಯ ಸ್ಥಾನವನ್ನು ಅನೂರ್ಜಿತಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ಇಂದು ವಜಾಗೊಳಿಸಿ ಆದೇಶಿಸಿದೆ. ಡಾ.ಸೂರಜ್ ರೇವಣ್ಣ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಕೋರಿ ಹೊಳೆನರಸೀಪುರದ ಕಾಮಸಮುದ್ರ ಗ್ರಾಮದ ಎಲ್.ಹನುಮೇಗೌಡ ಅವರು ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು.
ಅರ್ಜಿಯ ವಿಚಾರಣೆ ನಡೆಸಿ ಆದೇಶ ಕಾಯ್ದಿರಿಸಿದ್ದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ನ್ಯಾಯಪೀಠವು ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ. ಹಾಸನ ಕ್ಷೇತ್ರದ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಸೂರಜ್ ರೇವಣ್ಣ ಗೆದ್ದಿದ್ದರು. ಈ ಬಗ್ಗೆ ವಿಸ್ತೃತ ಆದೇಶದ ಪ್ರತಿ ಇನ್ನಷ್ಟೇ ಲಭ್ಯವಾಗಬೇಕಾಗಿದೆ.
ಸೂರಜ್ ರೇವಣ್ಣ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ತಮ್ಮ ಪತ್ನಿಗೆ ಸಂಬಂಧಿಸಿದ ಯಾವುದೇ ಮಾಹಿತಿ ತಿಳಿಸಿಲ್ಲ. ಅಲ್ಲದೆ, ಪತ್ನಿಯ ವಿವರ, ನಗದು, ಸ್ಥಿರಾಸ್ತಿ, ಬ್ಯಾಂಕ್ ಖಾತೆ, ಚಿನ್ನ, ಬೆಳ್ಳಿ ಆಭರಣಗಳು ಹಾಗೂ ಮತ್ತಿತರೆ ವಿವರಗಳನ್ನು ನಮೂದಿಸುವ ಕಾಲಂನಲ್ಲಿ ಅನ್ವಯವಾಗುವುದಿಲ್ಲ ಎಂಬುದಾಗಿ ತಿಳಿಸಿದ್ದಾರೆ. ಇದರ ಜೊತೆಗೆ, ತಮ್ಮ ಬ್ಯಾಂಕ್ ಖಾತೆಗಳ ಬಗ್ಗೆಯೂ ಸರಿಯಾದ ಮಾಹಿತಿ ನೀಡಿಲ್ಲ. ಚುನಾವಣೆಯಲ್ಲೂ ಅಕ್ರಮ ಎಸಗಿದ್ದಾರೆ. ಆದ್ದರಿಂದ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಅರ್ಜಿದಾರರು ನ್ಯಾಯಾಲಯವನ್ನು ಕೋರಿದ್ದರು.
ಇದನ್ನೂ ಓದಿ: ಸೂರಜ್ ರೇವಣ್ಣ ಆಯ್ಕೆ ಅಸಿಂಧು ಕೋರಿ ಅರ್ಜಿ : ಸಮನ್ಸ್ ಜಾರಿಗೆ ಹೈಕೋರ್ಟ್ ಆದೇಶ