ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಹಲವೆಡೆ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾಗೆ (ಎಸ್‌ಡಿಪಿಐ) ಸೇರಿದ ಕಚೇರಿಗಳ ಮೇಲೆ ದಾಳಿ ನಡೆಸಿ, ಜಪ್ತಿ ಮಾಡಿ ಕಚೇರಿಗಳಿಗೆ ಬೀಗ ಹಾಕಿದ ಜಿಲ್ಲಾಡಳಿತ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿ ಆದೇಶಿಸಿದೆ.
ಎಸ್‌ಡಿಪಿಐನ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದತ್ ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ಮಂಗಳವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಕಟಿಸಿದರು. ಆದರೆ, ವಿಸ್ತೃತವಾದ ಆದೇಶದ ಪ್ರತಿ ಈವರೆಗೂ ಲಭ್ಯವಾಗಿಲ್ಲ.
ಅರ್ಜಿದಾರರ ಪರ ವಕೀಲರು, ಪ್ರಜಾಪ್ರತಿನಿಧಿ ಕಾಯ್ದೆ-1951ರ ಅಡಿ ನೋಂದಾಯಿತ ರಾಜಕೀಯ ಪಕ್ಷವಾಗಿರುವ ಎಸ್‌ಡಿಪಿಐ, ತುಳಿತಕ್ಕೊಳಗಾದ ಸಮುದಾಯಗಳ ಪರವಾಗಿ ಕೆಲಸ ಮಾಡುತ್ತಿದೆ. ಇದೇ ಕಾರಣಕ್ಕೆ ಕೆಲ ವಿಭಜನಕಾರಿ ಶಕ್ತಿಗಳ ಕೆಂಗಣ್ಣಿಗೆ ಪಕ್ಷ ಗುರಿಯಾಗಿದ್ದು, ಅದರ ಬಗ್ಗೆ ಸಾರ್ವಜನಿಕ ವಲಯದಲ್ಲಿ ಕೆಟ್ಟ ಅಭಿಪ್ರಾಯ ಮೂಡಿಸಲು ಸರಕಾರಿ ಸಂಸ್ಥೆಗಳ ಮೇಲೆ ಒತ್ತಡ ಹಾಕಲಾಗುತ್ತಿದೆ. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ(ಪಿಎಫ್‌ಐ) ಜತೆ ಎಸ್‌ಡಿಪಿಐ ಯಾವುದೇ ಸಂಪರ್ಕ ಹೊಂದಿಲ್ಲ. ಪಿಎಫ್‌ಐ ಮತ್ತದರ ಅಂಗ ಸಂಸ್ಥೆಗಳನ್ನು ನಿಷೇಧಿಸುವ ಸಂದರ್ಭದಲ್ಲಿ ಗೃಹ ಸಚಿವಾಲಯ ಎಸ್‌ಡಿಪಿಐ ಹೆಸರು ಸೇರಿಸಿಲ್ಲ. ಹೀಗಿದ್ದರೂ, ಜಿಲ್ಲಾಡಳಿತ ಪಕ್ಷಕ್ಕೆ ಸೇರಿದ ಸ್ಥಳಗಳ ಮೇಲೆ ಅಕ್ರಮವಾಗಿ ದಾಳಿ ನಡೆಸಿ, ಜಪ್ತಿ ಮಾಡಿದ್ದಾರೆ ಎಂದು ದೂರಿದ್ದರು.
ಅಲ್ಲದೆ, ಯಾವುದೇ ಮಾಹಿತಿ ನೀಡದೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಇರುವ ಎಸ್‌ಡಿಪಿಐ ಕಚೇರಿಗಳು, ಚುನಾಯಿತ ಕಾರ್ಪೊರೇಟರ್‌ಗಳ ಕಚೇರಿಗಳನ್ನು ಮುಚ್ಚಲಾಗಿದೆ. ಅಧಿಕಾರಿಗಳು ಸೀಲ್ ಹಾಕಿರುವ ಕಚೇರಿಗಳು ಬಾಡಿಗೆ ಸ್ಥಳಗಳಾಗಿದ್ದು, ದುರುದ್ದೇಶದಿಂದ ಅವುಗಳನ್ನು ಜಪ್ತಿ ಮಾಡಲಾಗಿದೆ.
ಮಂಗಳೂರಿನ ಬೆಂಗ್ರೆಯಲ್ಲಿರುವ ಎಸ್‌ಡಿಪಿಐ ಮಾಹಿತಿ ಮತ್ತು ಸೇವಾ ಕೇಂದ್ರ, ಬಂಟ್ವಾಳ, ಅಡ್ಡೂರು, ಕುದ್ರೋಳಿ, ಪಾವೂರು, ಸುರತ್ಕಲ್‌ನ ಚೊಕ್ಕಬೆಟ್ಟು, ಫರಂಗಿಪೇಟೆ, ಕಾಟಿಪಳ್ಳ, ಬಂಟ್ವಾಳದ ಮಂಚಿ, ಮಂಗಳೂರಿನ ನೆಲ್ಲಿಕಾಯಿ ರಸ್ತೆಯಲ್ಲಿರುವ ಕಚೇರಿ, ತಲಪ್ಪಾಡಿಯ ಕೆ.ಸಿ ರೋಡ್, ಮಂಗಳೂರಿನ ಉಳ್ಳಾಲದಲ್ಲಿನ ಕಚೇರಿಗಳ ಮೇಲೆ ಅಕ್ರಮವಾಗಿ ದಾಳಿ ನಡೆಸಿ, ಅವುಗಳಿಗೆ ಸೀಲ್ ಹಾಕಲಾಗಿದೆ. ಜಪ್ತಿ ಮಾಡಿರುವ ಕಚೇರಿಗಳಿಗೆ ಹಾಕಲಾಗಿರುವ ಸೀಲ್ ತೆರವುಗೊಳಿಸುವಂತೆ ಜಿಲ್ಲಾಧಿಕಾರಿಗೆ ನಿರ್ದೇಶಿಸಬೇಕು ಎಂದು ಕೋರಿದ್ದರು.
ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ರಾಜ್ಯ ಸರ್ಕಾರದ ಪರ ಹೆಚ್ಚುವರಿ ಅಡ್ವೊಕೇಟ್ ಜನರಲ್ ಆಗಿದ್ದ ಅರುಣ್ ಶ್ಯಾಮ್, ಎಸ್‌ಡಿಪಿಐ ಕಚೇರಿಗಳನ್ನು ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ಮತ್ತು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ(ಸಿಎಫ್‌ಐ)ಸಂಘಟನೆಗಳ ಚಟುವಟಿಕೆಗಳಿಗೆ ಬಳಸಿಕೊಳ್ಳಲಾಗುತ್ತಿತ್ತು ಎಂಬ ಖಚಿತ ಮಾಹಿತಿ ಲಭ್ಯವಾಗಿತ್ತು. ಕೇಂದ್ರ ಸರ್ಕಾರ ರಾಜ್ಯಗಳಿಗೆ ನಿಯೋಜಿಸಿರುವ ಅಧಿಕಾರವನ್ನು ಆಧರಿಸಿ ಜಿಲ್ಲಾಡಳಿತ ಸಮಗ್ರ ಮಾಹಿತಿ ಕಲೆಹಾಕಿ, ತನಿಖೆ ನಡೆಸಿ, ಶಾಂತಿ ಭಂಗ ಹಾಗೂ ಸಾರ್ವಜನಿಕ ಸುವ್ಯವಸ್ಥೆ ಹಾಳು ಮಾಡುವ ಉದ್ದೇಶದ ಕೃತ್ಯಗಳನ್ನು ನಡೆಸುತ್ತಿದೆ ಎಂಬುದನ್ನು ದೃಢಪಡಿಸಿಕೊಂಡ ನಂತರವೇ ಜಿಲ್ಲಾಧಿಕಾರಿಗಳು ಕಚೇರಿಗಳಿಗೆ ಬೀಗ ಮುದ್ರೆ ಹಾಕಿದ್ದಾರೆ ಎಂಬುದಾಗಿ ನ್ಯಾಯಪೀಠದ ಗಮನಕ್ಕೆ ತಂದರು.
ಕೇಂದ್ರ ಸರ್ಕಾರದ ಪರ ಸಹಾಯಕ ಸಾಲಿಸಿಟರ್ ಜನರಲ್ ಶಾಂತಿಭೂಷಣ್ ವಾದ ಮಂಡಿಸಿ, ಕೇಂದ್ರ ಸರ್ಕಾರವು ಪಿಎಫ್‌ಐ ಅನ್ನು ನಿಷೇಧಿಸಿದೆ. ರಾಜ್ಯ ಸರ್ಕಾರ ತನ್ನ ಗುಪ್ತಚರ ಮಾಹಿತಿ ಆಧರಿಸಿ ಎಸ್‌ಡಿಪಿಐ ಕಚೇರಿಗಳಲ್ಲಿ ನಿಷೇಧಿತ ಪಿಎಫ್‌ಐ ಸಂಘಟನೆಯ ಚಟುವಟಿಕೆಗಳನ್ನು ನಡೆಯುತ್ತಿದ್ದರಿಂದ ಅದರ ವಿರುದ್ಧ ಕಾನೂನು ರೀತಿಯ ಕ್ರಮ ಜರುಗಿಸಿದೆ ಎಂದು ಹೇಳಿದರು.
ಇದನ್ನೂ ಓದಿ : ಐಪಿಎಸ್ ಅಧಿಕಾರಿ ಗುಳೇದ್ ವಿರುದ್ಧದ ಲೈಂಗಿಕ ಕಿರುಕುಳ, ಅಕ್ರಮ ಹಣ ವರ್ಗಾವಣೆ ಆರೋಪ.. ಕೇಸ್ ರದ್ದುಗೊಳಿಸಿದ ಹೈಕೋರ್ಟ್