ಬೆಂಗಳೂರು: ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪ ಪ್ರಕರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಡೆಸುತ್ತಿರುವ ವಿಚಾರಣೆ ರದ್ದುಗೊಳಿಸುವಂತೆ ಕೋರಿ ಮಾಜಿ ಸಚಿವ ರೋಷನ್ ಬೇಗ್ ಮತ್ತವರ ಕುಟುಂಬಸ್ಥರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ರೋಷನ್ ಬೇಗ್, ಪತ್ನಿ ಸಬೀಹಾ ರೋಷನ್ ಹಾಗೂ ಪುತ್ರ ರುಮಾನ್ ಬೇಗ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹ ಅವರಿದ್ದ ನ್ಯಾಯಪೀಠ, ಮನವಿ ತಿರಸ್ಕರಿಸಿದೆ. ಇದೇ ವೇಳೆ ರೋಷನ್ ಬೇಗ್ ಮಾಜಿ ಸಚಿವರಾಗಿರುವ ಕಾರಣ ಅವರ ವಿರುದ್ಧ ವಿಚಾರಣೆ ಮುಂದುವರೆಸಲು ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆಯುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.
ರೋಷನ್ ಬೇಗ್ ಕುಟುಂಬದವರು ಅಕ್ರಮ ಆಸ್ತಿ ಹೊಂದಿದ್ದಾರೆಂದು ಆರೋಪಿಸಿ ಸಲ್ಲಿಕೆಯಾಗಿದ್ದ ಖಾಸಗಿ ದೂರಿನ ವಿಚಾರಣೆ ನಡೆಸಿದ್ದ ವಿಚಾರಣಾ ನ್ಯಾಯಾಲಯ ತನಿಖೆ ನಡೆಸಲು ಸೂಚಿಸಿತ್ತು. ಅದರಂತೆ ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸಿ ಬಿ ರಿಪೋರ್ಟ್ ಸಲ್ಲಿಸಿದ್ದರು. ವರದಿಯಲ್ಲಿ ಶೇ. 10ರಷ್ಟು ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ್ದಾರೆಂದು ತಿಳಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ತಿರಸ್ಕಿರಿಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ.
ವಿಚಾರಣೆ ಸಂದರ್ಭದಲ್ಲಿ ಸರ್ಕಾರದ ಪರ ವಕೀಲರು ಪೀಠಕ್ಕೆ ವಿವರಿಸಿ, ಆರೋಪಿತರು ತಮ್ಮ ಆದಾಯಕ್ಕಿಂತ ಹೆಚ್ಚುವರಿಯಾಗಿ 56.71 ಲಕ್ಷ ಮೌಲ್ಯದ ಆಸ್ತಿಯನ್ನು ಹೊಂದಿದ್ದಾರೆ ಎಂದು ವರದಿ ನೀಡಿದ್ದಾರೆ. ಈ ಅಂಶ ಪರಿಗಣಿಸಿರುವ ಹೈಕೋರ್ಟ್, ಬಿ ರಿಪೋರ್ಟ್ ತಿರಸ್ಕರಿಸಿ ಪ್ರಕರಣದ ವಿಚಾರಣೆ ನಡೆಸುತ್ತಿರುವುದು ಸರಿಯಾಗಿದೆ ಎಂದು ತೀರ್ಪಿನಲ್ಲಿ ಅಭಿಪ್ರಾಯಪಟ್ಟಿದೆ.