ಬೆಂಗಳೂರು: ಶಿವರಾಮ ಕಾರಂತ ಬಡಾವಣೆ ನಿರ್ಮಾಣಕ್ಕಾಗಿ ಭೂ ಸ್ವಾಧೀನಪಡಿಸಿಕೊಳ್ಳುವ ಸಂಬಂಧ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಹೊರಡಿಸಿದ್ದ ಅಧಿಸೂಚನೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿ ಆದೇಶಿಸಿದೆ.
ಈ ಕುರಿತು ಬಿ.ಎನ್. ಸದಾಶಿವ ಹಾಗೂ ಇತರ 38 ಜನ ಪ್ರತ್ಯೇಕವಾಗಿ ಸಲ್ಲಿಸಿದ್ದ 39 ತಕರಾರು ಅರ್ಜಿಗಳ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾ. ಎಸ್.ಆರ್. ಕೃಷ್ಣಕುಮಾರ್ ಅವರಿದ್ದ ಏಕಸದಸ್ಯ ಪೀಠ ಪ್ರಕಟಿಸಿದೆ.
ಅರ್ಜಿದಾರರ ಮನವಿಗಳನ್ನು ಪುರಸ್ಕರಿಸಲು ನಿರಾಕರಿಸಿರುವ ಪೀಠ, ಅರ್ಜಿದಾರರ ಕೋರಿಕೆಯಂತೆ ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸುವವರೆಗೆ ಬಿಡಿಎ ಯಾವುದೇ ಬಲವಂತದ ಕ್ರಮಕ್ಕೆ ಮುಂದಾಗಬಾರದು’ ಎಂದು ನಿರ್ದೇಶಿಸಿದೆ.
ಏನಿದು ಪ್ರಕರಣ?: ಶಿವರಾಮ ಕಾರಂತ ಬಡಾವಣೆ ಅಭಿವೃದ್ಧಿಗೆ ಸಂಬಂಧಿಸಿದಂತೆ ನಗರದ ಬೆಂಗಳೂರು ಉತ್ತರ ತಾಲೂಕಿನ ಯಶವಂತಪುರ, ಹೆಸರುಘಟ್ಟ ಮತ್ತು ಯಲಹಂಕ ಹೋಬಳಿಗಳ ಸುಮಾರು 17 ಗ್ರಾಮಗಳ ವ್ಯಾಪ್ತಿಯಲ್ಲಿ ಸುಮಾರು 3,546 ಎಕರೆ ಸ್ವಾಧೀನಕ್ಕೆ ಬಿಡಿಎ 2018ರ ಡಿಸೆಂಬರ್ 31ರಂದು ಪ್ರಾಥಮಿಕ ಹಾಗೂ 2018ರ ನವೆಂಬರ್ 1ರಂದು ಅಂತಿಮ ಅಧಿಸೂಚನೆ ಹೊರಡಿಸಿತ್ತು.
ಈ ಅಧಿಸೂಚನೆಯನ್ನು ಪ್ರಶ್ನಿಸಿದ್ದ ಅರ್ಜಿದಾರರು, ಶಿವರಾಮ ಕಾರಂತ ಬಡಾವಣೆ ಅಭಿವೃದ್ಧಿ ಪಡಿಸುವಲ್ಲಿ ಬಿಡಿಎ ತೀರಾ ವಿಳಂಬ ಮಾಡಿದೆ. ಭೂ ಸ್ವಾಧೀನಪಡಿಸಿಕೊಂಡಿರುವ ಜಮೀನಿನ ಮಾಲಿಕರಿಗೆ ಹಣ ಪಾವತಿಸಲು ಬಿಡಿಎ ಬಳಿ ಹಣ ಇಲ್ಲದಂತಾಗಿದೆ. ಆದ್ದರಿಂದ, ಭೂ ಸ್ವಾಧೀನಕ್ಕೆ ಹೊರಡಿಸಿರುವ ಅಧಿಸೂಚನೆ ರದ್ದುಗೊಳಿಸಬೇಕು ಎಂದು ಅರ್ಜಿದಾರರು ಕೋರಿದ್ದರು.