ಬೆಂಗಳೂರು: ಕನಾರ್ಟಕ ಲೋಕ ಸೇವಾ ಆಯೋಗ (ಕೆಪಿಎಸ್ಸಿ)ದ ಅಧ್ಯಕ್ಷರನ್ನಾಗಿ ನಿವೃತ್ತ ಐಎಎಸ್ ಅಧಿಕಾರಿ ಎಸ್ ಪಿ ಷಡಕ್ಷರಿ ಸ್ವಾಮಿ ನೇಮಕ ಮಾಡಿದ್ದ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಇತ್ಯರ್ಥ ಪಡಿಸಿದೆ. ನಿಯಮಗಳನ್ನು ಉಲ್ಲಂಘಿಸಿ ಕೆಪಿಎಸ್ಸಿ ಅಧ್ಯಕ್ಷರನ್ನಾಗಿ ಷಡಕ್ಷರಿ ಸ್ವಾಮಿ ಮತ್ತು ಅರ್ಹತೆ ಇಲ್ಲದಿದ್ದರೂ ಶಿವಶಂಕರಪ್ಪ ಸಾಹುಕಾರ್ ಅವರನ್ನು ನೇಮಕ ಮಾಡಲಾಗಿದ್ದು, ಅವರನ್ನು ಹುದ್ದೆಯಿಂದ ತೆರವುಗೊಳಿಸಬೇಕು ಎಂದು ಕೋರಿ ಸಾಮಾಜಿಕ ಕಾರ್ಯಕರ್ತ ಟಿ.ನರಸಿಂಹಮೂರ್ತಿ ಹೈಕೋರ್ಟ್ ನಲ್ಲಿ ಪ್ರತ್ಯಕವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಸಲ್ಲಿಸಿದ್ದರು. ಅರ್ಜಿಗಳನ್ನು ಜಂಟಿಯಾಗಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಆಶೋಕ್ ಎಸ್. ಕಿಣಗಿ ಅವರಿದ್ದ ನ್ಯಾಯಪೀಠ ಒಂದು ಅರ್ಜಿ ಇತ್ಯರ್ಥ ಪಡಿಸಿದ್ದು, ಮತ್ತೊಂದು ಅರ್ಜಿ ವಿಚಾರಣೆ ಮುಂದೂಡಿದೆ.
ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು ಷಡಕ್ಷರಿ ಸ್ವಾಮಿ ಅವರು ಈಗಾಗಲೇ ಕೆಪಿಎಸ್ಸಿ ಕಾರ್ಯದರ್ಶಿ ಹುದ್ದೆಯಿಂದ ತೆರವಾಗಿದ್ದಾರೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು. ಈ ಅಂಶ ದಾಖಲಿಸಿಕೊಂಡ ನ್ಯಾಯಪೀಠ ಅರ್ಜಿಯು ಮಾನ್ಯತೆ ಕಳೆದುಕೊಂಡಿದೆ ಎಂದು ತಿಳಿಸಿ ಅರ್ಜಿ ಇತ್ಯರ್ಥಪಡಿಸಿದೆ. ಅಲ್ಲದೆ, ಅರ್ಹತೆ ಇಲ್ಲದಿದ್ದರೂ ಕೆಪಿಎಸ್ಸಿ ಅಧ್ಯಕ್ಷರಾಗಿರುವ ಶಿವಶಂಕರಪ್ಪ ಸಾಹುಕಾರ ಅವರನ್ನು ನೇಮಕ ಮಾಡಲಾಗಿದೆ ಎಂದು ಆರೋಪಿಸಿದ್ದ ಮತ್ತೊಂದು ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಸರ್ಕಾರದ ಪರ ವಕೀಲರು ಕಾಲಾವಕಾಶ ಕೋರಿದರು. ಇದನ್ನು ಪುರಸ್ಕರಿಸಿದ ನ್ಯಾಯಪೀಠ ಕಾಲಾವಲಾಶ ನೀಡಿ ವಿಚಾರಣೆಯನ್ನು ಮುಂದೂಡಿತು.
ಪ್ರಕರಣದ ಹಿನ್ನೆಲೆ ಏನು?: ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರ ರಚನೆ ಆದಾಗ ನಿವೃತ್ತ ಐಎಎಸ್ ಅಧಿಕಾರಿ ಎಸ್ ಪಿ ಷಡಕ್ಷರಿ ಸ್ವಾಮಿ ಅವರನ್ನು ಆಗಿನ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಕೆಪಿಎಸ್ಸಿಯ ಮಧ್ಯಂತರ ಅಧ್ಯಕ್ಷರನ್ನಾಗಿ ನೇಮಿಸಿ ತೀರ್ಮಾನ ಕೈಗೊಂಡಿದ್ದರು. ಇದಾದ ನಂತರ ಆಪರೇಷನ್ ಕಮಲದಿಂದ 2019 ಜುಲೈನಲ್ಲಿ ರಾಜ್ಯದಲ್ಲಿ ಬಿ ಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ರಚನೆ ಆಗಿತ್ತು. ಈ ವೇಳೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಕೂಡಲೇ ಬಿ ಎಸ್ ಯಡಿಯೂರಪ್ಪ ಅವರು ಷಡಕ್ಷರಿ ಸ್ವಾಮಿ ಅವರನ್ನು ಕನಾರ್ಟಕ ಲೋಕ ಸೇವಾ ಆಯೋಗದ ಅಧ್ಯಕ್ಷರನ್ನಾಗಿ ನೇಮಿಸಿದ್ದರು. ಈ ನೇಮಕಾತಿಯನ್ನು ನೇರವಾಗಿ ಮಾಡಲಾಗಿತ್ತು. ಇದರಿಂದಾಗಿ ಹಲವಾರು ಚರ್ಚೆಗಳು ಹುಟ್ಟಿಕೊಮಡಿದ್ದವು. ಚರ್ಚೆಗೆ ಕಾರಣವಾದದ್ದು ಷಡಕ್ಷರಿ ಅವರು ಸುತ್ತೂರು ಮಠದ ಸ್ವಾಮೀಜಿಯೊಬ್ಬರ ಸಹೋದರ 2017ರಲ್ಲಿ ಕೆಪಿಎಸ್ಸಿ ಸದಸ್ಯರಾಗಿ ನೇಮಕಗೊಂಡಿದ್ದರು ಎಂಬ ಕಾರಣಕ್ಕೆ.
ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಷಡಕ್ಷರಿ ಸ್ವಾಮಿ ಅವರನ್ನು ಕೆಪಿಎಸ್ಸಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು. ಈ ನೇಮಕ ಪ್ರಕ್ರಿಯೆಯಲ್ಲಿ ಆಯ್ಕೆ ಸಮಿತಿಯ ನಿಯಮಗಳನ್ನು ಪರಿಗಣಿಸಿಲ್ಲ. ರಾಜಕೀಯ ಹಿತಾಸಕ್ತಿಗಳುನ್ನು ಬಳಸಿ ತರಾತುರಿಯಲ್ಲಿ ಷಡಕ್ಷರಿ ಸ್ವಾಮಿ ಅವರನ್ನು ನೇಮಕ ಮಾಡಲಾಗಿದೆ. ಈ ನೇಮಕ ಅಸಿಂಧು ಎಂದು ಘೋಷಣೆ ಮಾಡಬೇಕು ಎಂದು ಅರ್ಜಿದಾರರ ಆರೋಪಿಸಿದ್ದರು. ಅಲ್ಲದೇ, ಪ್ರಸ್ತುತ ಅಧ್ಯಕ್ಷರಾಗಿರುವ ಶಿವಶಂಕರಪ್ಪ ಸಾಹುಕಾರ ಅವರು ಕೆಪಿಎಸ್ಸಿ ಅಧ್ಯಕ್ಷ ಸ್ಥಾನಕ್ಕೆ ಅರ್ಹರಿಲ್ಲದಿದ್ದರೂ ನೇಮಕ ಮಾಡಲಾಗಿದೆ. ಹೀಗಾಗಿ ಅವರ ನೇಮಕ ರದ್ದು ಮಾಡಬೇಕು ಎಂದು ಮತ್ತೊಂದು ಅರ್ಜಿಯಲ್ಲಿ ಕೋರಿದ್ದರು.
ಇದನ್ನೂ ಓದಿ: ನ್ಯಾಯಾಂಗದಲ್ಲಿ ಕೇಂದ್ರ ಸರ್ಕಾರದ ಹಸ್ತಕ್ಷೇಪ ಅಪಾಯಕಾರಿ : ನಿವೃತ್ತ ಲೋಕಾಯುಕ್ತ ನ್ಯಾ. ಸಂತೋಷ್ ಹೆಗ್ಡೆ