ಬೆಂಗಳೂರು: ರಾಜ್ಯದಲ್ಲಿರುವ ಅನಧಿಕೃತ ಧಾರ್ಮಿಕ ಕಟ್ಟಡಗಳನ್ನು ತೆರವು ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಹಾಗೂ ಹೈಕೋರ್ಟ್ ನಿರ್ದೇಶನಗಳನ್ನು ಪಾಲಿಸದ ಹಿನ್ನೆಲೆಯಲ್ಲಿ ಹೈಕೋರ್ಟ್ ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ.
ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ಬಿಬಿಎಂಪಿ ಪರ ವಕೀಲರು ಪೀಠಕ್ಕೆ ಲಿಖಿತ ಮಾಹಿತಿ ಸಲ್ಲಿಸಿ, ನಗರದಲ್ಲಿ 94 ಅನಧಿಕೃತ ಧಾರ್ಮಿಕ ಕಟ್ಟಡಗಳಿದ್ದು, ಅವುಗಳಲ್ಲಿ ನಾಲ್ಕನ್ನು ತೆರವು ಮಾಡಲಾಗಿದೆ ಎಂದರು.
ವರದಿ ಪರಿಶೀಲಿಸಿದ ಪೀಠ, ವಾರ್ಡ್ ಮಟ್ಟದ ಎಂಜನಿಯರ್ಗಳು ಸರಿಯಾಗಿ ಸಮೀಕ್ಷೆ ನಡೆಸಿಲ್ಲ. ಅವರು ನೀಡಿರುವ ವರದಿಯಲ್ಲಿ 2009ರ ಸೆ.29ರ ನಂತರ ಹಾಗೂ ಅದಕ್ಕೂ ಮುನ್ನ ನಿರ್ಮಿಸಿರುವ ಅಕ್ರಮ ಧಾರ್ಮಿಕ ಕಟ್ಟಡಗಳ ಕುರಿತು ಸ್ಪಷ್ಟನೆ ಇಲ್ಲ. ಈ ಪ್ರತ್ಯೇಕ ಅವಧಿಯಲ್ಲಿ ಎಷ್ಟು ಅಕ್ರಮ ಧಾರ್ಮಿಕ ಕಟ್ಟಡಗಳು ನಿರ್ಮಾಣವಾಗಿವೆ. ಅವುಗಳಲ್ಲಿ ತೆರವು ಮಾಡಬಹುದಾದ ಕಟ್ಟಡಗಳೆಷ್ಟು?. ಸ್ಥಳಾಂತರಿಸಬಹುದಾದ ಕಟ್ಟಡಗಳೆಷ್ಟು? ಎಂಬ ಮಾಹಿತಿ ಇಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿತು. ಅಲ್ಲದೇ, ಈ ಕುರಿತು ಸ್ಪಷ್ಟನೆ ನೀಡಲು ಬಿಬಿಎಂಪಿ ಆಯುಕ್ತರು ಮುಂದಿನ ವಿಚಾರಣೆ ವೇಳೆ ಖುದ್ದು ಹಾಜರಿರಬೇಕು ಎಂದು ನಿರ್ದೇಶಿಸಿ, ವಿಚಾರಣೆಯನ್ನು ಜ.29ಕ್ಕೆ ಮುಂದೂಡಿತು.
ಓದಿ: ಸಿಎಂ ಸಲಹೆಗಾರ ಹುದ್ದೆಗಳ ನೇಮಕ ಪ್ರಶ್ನಿಸಿ ಅರ್ಜಿ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಇದೇ ವೇಳೆ, ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಸಾರ್ವಜನಿಕ ಸ್ಥಳಗಳಲ್ಲಿರುವ ಅನಧಿಕೃತ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸಲು ಸುಪ್ರೀಂ ಕೋರ್ಟ್‌ನ ಆದೇಶ ಜಾರಿಗೊಳಿಸುವ ಸಂಬಂಧ ಫೆ.5ರೊಳಗೆ ಪ್ರಮಾಣಪತ್ರ ಸಲ್ಲಿಸುವಂತೆ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ನಿರ್ದೇಶಿಸಿತು.