ಬೆಂಗಳೂರು : ತಮ್ಮ ಅನುಮತಿ ಇಲ್ಲದೆ ಸಿಬ್ಬಂದಿ ಹಾಗೂ ಅಧಿಕಾರಿಗಳು ತನಿಖಾ ಸಂಸ್ಥೆಗಳಿಗೆ ಮಾಹಿತಿ ನೀಡಬಾರದು ಎಂದು ಬಿಡಿಎ ಆಯುಕ್ತರು ಹೊರಡಿಸಿರುವ ಸುತ್ತೋಲೆಗೆ ತಡೆ ನೀಡಿರುವ ಹೈಕೋರ್ಟ್, ಆಯುಕ್ತರು ಇಂತಹ ಆದೇಶ ಹೊರಡಿಸುವ ಮೂಲಕ ತನಿಖಾ ಸಂಸ್ಥೆಗಳ ಕಾರ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದೆ.
ಬಿಡಿಎ ಆಯುಕ್ತರ ಆದೇಶ ಪ್ರಶ್ನಿಸಿ ಸಾಮಾಜಿಕ ಕಾರ್ಯಕರ್ತ ಎಸ್. ಅರುಣಾಚಲಂ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿವಾದಾತ್ಮಕ ಸುತ್ತೋಲೆಗೆ ತಡೆಯಾಜ್ಞೆ ನೀಡಿದೆ.
ವಿಚಾರಣೆ ಸಂದರ್ಭದಲ್ಲಿ ಬಿಡಿಎ ಆಯುಕ್ತರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಪೀಠ, ಈ ಕುರಿತು ಸ್ಪಷ್ಟನೆ ನೀಡುವಂತೆ ಅಧಿಕಾರಿಗೆ ಸೂಚಿಸಲಾಗಿದೆ. ಹಾಗಿದ್ದರೂ ಈವರೆಗೆ ಅಧಿಕಾರಿ ಯಾವುದೇ ಸ್ಪಷ್ಟನೆ ನೀಡಿಲ್ಲ. ಸರ್ಕಾರಿ ಅಧಿಕಾರಿಯಾಗಿ ಈ ರೀತಿಯ ನಿರ್ಲಕ್ಷ ಸಲ್ಲದು. ಆದೇಶಕ್ಕೆ ಸಂಬಂಧಿಸಿದಂತೆ ಮುಂದಿನ ವಿಚಾರಣೆ ವೇಳೆ ಸ್ಪಷ್ಟನೆ ನೀಡದಿದ್ದರೆ ನ್ಯಾಯಾಲಯ ಗಂಭೀರವಾಗಿ ಪರಿಗಣಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿ ವಿಚಾರಣೆ ಮುಂದೂಡಿತು.
ಬಿಡಿಎ ಆಯುಕ್ತರು ಜುಲೈ 8ರಂದು ಸುತ್ತೋಲೆ ಹೊರಡಿಸಿ ತಮ್ಮ ಅನುಮತಿ ಇಲ್ಲದೆ ಭ್ರಷ್ಟಾಚಾರ ನಿಗ್ರಹ ದಳ ಸೇರಿದಂತೆ ಯಾವುದೇ ತನಿಖಾ ಸಂಸ್ಥೆಗೆ ಮಾಹಿತಿ ನೀಡಬಾರದು ಎಂದು ತಮ್ಮ ಸಿಬ್ಬಂದಿಗೆ ಆದೇಶಿಸಿದ್ದರು. ಇದನ್ನು ಪ್ರಶ್ನಿಸಿದ್ದ ಅರ್ಜಿದಾರರು ಆಯುಕ್ತರ ಅಕ್ರಮ ತನಿಖಾ ಸಂಸ್ಥೆಗಳ ಕಾರ್ಯವೈಖರಿಯಲ್ಲಿ ಹಸ್ತಕ್ಷೇಪ ಮಾಡಿದಂತೆ. ಇಂತಹ ಸುತ್ತೋಲೆ ಹೊರಡಿಸುವ ಯಾವುದೇ ಶಾಸನಾತ್ಮಕ ಅಧಿಕಾರ ಬಿಡಿಎ ಆಯುಕ್ತರಿಗೆ ಇಲ್ಲ ಎಂದು ಹೇಳಿದ್ದರು.